ADVERTISEMENT

ಚಾಮರಾಜನಗರ: ರಾಷ್ಟ್ರೀಯ ಲೋಕ ಅದಾಲತ್ 13ರಂದು

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 4:02 IST
Last Updated 9 ಸೆಪ್ಟೆಂಬರ್ 2025, 4:02 IST
ಜಿ.ಪ್ರಭಾವತಿ
ಜಿ.ಪ್ರಭಾವತಿ   

ಚಾಮರಾಜನಗರ: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸೆ.13ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಜಿ.ಪ್ರಭಾವತಿ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವ್ಯಾಜ್ಯ ಪೂರ್ವ ಪರಿಹಾರ ಕೇಂದ್ರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಸಾರ್ವಜನಿಕರು ಬಗೆಹರಿಸಿಕೊಳ್ಳಬಹುದು’ ಎಂದರು.

‘ಅದಾಲತ್‌ನಲ್ಲಿ ಭಾಗವಹಿಸಲು ಇಚ್ಚಿಸುವವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಯಳಂದೂರು, ಕೊಳ್ಳೇಗಾಲ, ಗುಂಡ್ಲುಪೇಟೆ ತಾಲ್ಲೂಕುಗಳ ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದು. ಆನ್‌ಲೈನ್, ವಿಡಿಯೋ ಕಾನ್ಫೆರೆನ್ಸ್, ಇ–ಮೇಲ್, ಎಸ್.ಎಂ.ಎಸ್, ವಾಟ್ಸ್‌ಆ್ಯಪ್‌, ಖುದ್ದು ಹಾಜರಾಗಿ ಕಾನೂನು ಸೇವಾ ಪ್ರಾಧಿಕಾರ ಮತ್ತು ಸಮಿತಿಗಳಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು’ ಎಂದರು.

ADVERTISEMENT

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ನ್ಯಾಯಾಲಯದ ಶುಲ್ಕ ಮರು ಪಾವತಿಸಲಾಗುವುದು. ಪೊಲೀಸ್ ಇಲಾಖೆ ಸಂಚಾರಿ ಇ-ಚಲನ್‌ನಲ್ಲಿ ಪ್ರಕರಣ ದಾಖಲಾಗಿದ್ದರೆ ಬಾಕಿ ಪ್ರಕರಣದ ದಂಡದ ಮೊತ್ತದಲ್ಲಿ ಶೇ50 ರಿಯಾಯಿತಿ ಪಡೆಯಬಹುದು. ಈ ಅವಕಾಶ ಆ.23 ರಿಂದ ಸೆಪ್ಟೆಂಬರ್ 12ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಪೂರ್ವಭಾವಿ ಸಮಾಲೋಚನಾ ಕೇಂದ್ರ ತೆರೆಯಲಾಗಿದೆ.  ಹೆಚ್ಚಿನ ಮಾಹಿತಿಗೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಸಹಾಯವಾಣಿ ಸಂಖ್ಯೆ 15100, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಹಾಯವಾಣಿ 1800-425-90000, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ 08226-226022, ತಾಲ್ಲೂಕು ಕಾನೂನು ಸೇವಾ ಸಮಿತಿ ಯಳಂದೂರು 08226-240229, ಕೊಳ್ಳೇಗಾಲ 08224-256788, ಗುಂಡ್ಲುಪೇಟೆ 08229-223279 ಸಂಪರ್ಕಿಸಬಹುದು ಎಂದು ಜಿ.ಪ್ರಭಾವತಿ ಹೇಳಿದರು.

ಹಿರಿಯ ಸಿವಿಲ್ ನ್ಯಾಯಧೀಶ ಈಶ್ವರ್, ಮುಖ್ಯ ನ್ಯಾಯಿಕ ದಂಡಾಧಿಕಾರಿ ಸಿ.ಡಿ.ಪ್ರಕಾಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ನಂಜಯ್ಯ, ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ ಸುದ್ದಿಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.