ADVERTISEMENT

ನರೇಗಾ ಯೋಜನೆಯಡಿ ಕೆಲಸ ನೀಡುವಂತೆ ಒತ್ತಾಯಿಸಿ ಪೊನ್ನಾಚಿ ಗ್ರಾಮಸ್ಥರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 1:59 IST
Last Updated 16 ಸೆಪ್ಟೆಂಬರ್ 2025, 1:59 IST
ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ನೀಡುವಂತೆ ಒತ್ತಾಯಿಸಿ ಪೊನ್ನಾಚಿ ಗ್ರಾಮಸ್ಥರು ಪಂಚಾಯಿತಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.
ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ನೀಡುವಂತೆ ಒತ್ತಾಯಿಸಿ ಪೊನ್ನಾಚಿ ಗ್ರಾಮಸ್ಥರು ಪಂಚಾಯಿತಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.   

ಹನೂರು: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 100 ದಿನಗಳವರೆಗೆ ಕೂಲಿ ಕೆಲಸ ನೀಡಬೇಕು ಎಂದು ಒತ್ತಾಯಿಸಿ ಸೋಮವಾರ ಪೊನ್ನಾಚಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿದರು.

‘ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಳಪಡುವ ಗ್ರಾಮಗಳು ಕಾಡಿನೊಳಗಿವೆ. ಬಹುತೇಕ ಕೃಷಿಯನ್ನೇ ನಂಬಿ ಬದುಕುತ್ತಿರುವ ನಾವು ಈಗ ಮಳೆಯಿಲ್ಲದೇ ಕೃಷಿಯನ್ನು ಮಾಡಲಾಗದ ಸ್ಥಿತಿಯಲ್ಲಿದ್ದೇವೆ. ಸರ್ಕಾರದ ಆದೇಶದಂತೆ ನಮಗೆ ಕೆಲಸ ನೀಡಿ’ ಎಂದು ಒತ್ತಾಯಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾನವ ಕೂಲಿಗೆ ಬದಲಾಗಿ ಯಂತ್ರಗಳನ್ನು ಬಳಸಿ ಕೆಲಸ ಮಾಡಿಸಲಾಗುತ್ತಿದೆ. ಇದರಿಂದ ಜನರಿಗೆ ಅನ್ಯಾಯವಾಗುತ್ತಿದ್ದು, ಈ ಬಗ್ಗೆ ಪ್ರಶ್ನಿಸಿದರೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿದರು.

ADVERTISEMENT

ಗ್ರಾಮ ಪಂಚಾಯಿತಿಯಲ್ಲಿ ವ್ಯಾಪಕ ಭ್ರಷ್ಟಚಾರ ನಡೆಯುತ್ತಿದ್ದು, ತಾಲೂಕು ಮಟ್ಟದ ಅಧಿಕಾರಿಗಳಿಗೆ ಇದು ಗೊತ್ತಿದ್ದರೂ ಸುಮ್ಮನಿದ್ದಾರೆ. ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮಗ್ರ ತನಿಖೆ ನಡೆಸಬೇಕು. ಗ್ರಾಮದಲ್ಲಿ ಉದ್ಯೋಗ ಖಾತ್ರಿ ಕೇವಲ ನೆಪಮಾತ್ರಕ್ಕೆ ಇದ್ದು, ಇದರಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಅಧಿಕಾರಿಗಳೂ ಉದ್ಯೋಗ ಖಾತ್ರಿ ಯೋಜನೆ ಕೆಲಸದ ಬಗ್ಗೆ ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲೂ ಮಾಹಿತಿ ನೀಡುತ್ತಿಲ್ಲ. ಕೂಡಲೇ ಸ್ಥಳಕ್ಕೆ ಅಧಿಕಾರಿಗಳು ಬರಬೇಕು, ಇಲ್ಲದಿದ್ದರೆ ಪ್ರತಿಭಟನೆ ಕೈಬಿಡುವುದಿಲ್ಲ’ ಎಂದು ಪಟ್ಟು ಹಿಡಿದರು.

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ತಾಲ್ಲೂಕು ಪಂಚಾಯಿತಿ ಇಒ ಉಮೇಶ್ ಮನವಿ ಸ್ವೀಕರಿಸಿ ಮಾತನಾಡಿ, ‘ಕೂಡಲೇ ಸ್ಥಳೀಯ ಪಿಡಿಒ ಅವರಿಗೆ ಸೂಚನೆ ನೀಡಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ಕೊಡಿಸಲು ಕ್ರಮ ವಹಿಸಲಾಗುವುದು’ ಎಂದು ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.