ಸಂತೇಮರಹಳ್ಳಿ: ಉತ್ತಮ ಭವಿಷ್ಯದ ಹಿತ ದೃಷ್ಟಿಯಿಂದ ಪೋಷಕರು ತಮ್ಮ ಮಕ್ಕಳ ಚಲನವಲನಗಳ ಬಗ್ಗೆ ಹೆಚ್ಚು ನಿಗಾ ವಹಿಸಬೇಕಾಗಿದೆ ಎಂದು ಡಿವೈಎಸ್ಪಿ ಲಕ್ಷ್ಮಯ್ಯ ತಿಳಿಸಿದರು.
ಸಮೀಪದ ನಡುಕಲಮೋಳೆ ಗ್ರಾಮದಲ್ಲಿ ಸಂತೇಮರಹಳ್ಳಿ ಪೊಲೀಸ್ ಠಾಣೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಯುವಕರು ಮಾದಕ ವಸ್ತುಗಳ ಸೇವನೆಯಿಂದ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇವರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳ ಚಲನ ವಲನಗಳ ಬಗ್ಗೆ ಹೆಚ್ಚು ನಿಗಾವಹಿಸುವುದು ಮುಖ್ಯವಾಗಿದೆ ಎಂದು ಸಲಹೆ ನೀಡಿದರು.
ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪೋಷಕರ ಪಾತ್ರ ಬಹಳ ಮುಖ್ಯವಾಗಿದೆ. ಮಕ್ಕಳನ್ನು ಬಾಲ್ಯ ವಿವಾಹಕ್ಕೆ ಒತ್ತಾಯ ಮಾಡುವ ಪೋಷಕರಿಗೆ ಹಾಗೂ ಸಹಕಾರ ನೀಡುವ ಎಲ್ಲರಿಗೂ ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತದೆ. ಗ್ರಾಮದ ಸುತ್ತಮುತ್ತ ಪ್ರದೇಶಗಳಲ್ಲಿ ಮಾದಕ ವಸ್ತುಗಳ ಸೇವನೆ ಮಾಡುವವರ ಬಗ್ಗೆ ಸಂಬಂಧಪಟ್ಟ ಠಾಣೆಗೆ ಮಾಹಿತಿ ನೀಡಬೇಕು. ಮಹಿಳೆಯರಿಗೆ ವರದಕ್ಷಿಣೆ ಕಿರುಕುಳ ಹಾಗೂ ಇತರೇ ತುರ್ತು ಸಂದರ್ಭದಲ್ಲಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಗ್ರಾಮದಲ್ಲಿ ಅಪರಿಚಿತ ವ್ಯಕ್ತಿಗಳು ಕಂಡು ಬಂದರೆ ಸ್ಥಳೀಯ ಠಾಣೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಸರ್ಕಲ್ ಇನ್‌ಸ್ಪೆಕ್ಟರ್ ಬಸವರಾಜು, ಪಿಎಸ್‌ಐಗಳಾದ ತಾಜುದ್ದೀನ್, ಚಂದ್ರಶೇಖರ್, ಸಿಬ್ಬಂದಿ ರಮೇಶ್, ಮಹದೇವಸ್ವಾಮಿ, ಪ್ರಭು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.