ADVERTISEMENT

ಚಾಮರಾಜನಗರ : ಅ.7ರಿಂದ 10ರವರೆಗೆ ಜಿಲ್ಲಾ ದಸರಾ

ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್‌ ನೇತೃತ್ವದ ಸಭೆಯಲ್ಲಿ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 16:03 IST
Last Updated 22 ಸೆಪ್ಟೆಂಬರ್ 2021, 16:03 IST
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬುಧವಾರ ಜಿಲ್ಲಾ ದಸರಾ ಆಚರಣೆ ಸಂಬಂಧ ಸಭೆ ನಡೆಯಿತು. ಶಾಸಕರಾದ ಆರ್‌.ನರೇಂದ್ರ, ಸಿ.ಪುಟ್ಟರಂಗಶೆಟ್ಟಿ, ಎನ್‌.ಮಹೇಶ್‌, ಸಿ.ಎಸ್‌.ನಿರಂಜನಕುಮಾರ್‌, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಇದ್ದಾರೆ
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬುಧವಾರ ಜಿಲ್ಲಾ ದಸರಾ ಆಚರಣೆ ಸಂಬಂಧ ಸಭೆ ನಡೆಯಿತು. ಶಾಸಕರಾದ ಆರ್‌.ನರೇಂದ್ರ, ಸಿ.ಪುಟ್ಟರಂಗಶೆಟ್ಟಿ, ಎನ್‌.ಮಹೇಶ್‌, ಸಿ.ಎಸ್‌.ನಿರಂಜನಕುಮಾರ್‌, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಇದ್ದಾರೆ   

ಚಾಮರಾಜನಗರ/ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾಗಿ ಚಾಮರಾಜನಗರ ಜಿಲ್ಲಾ ದಸರಾ ಅ.7ರಿಂದ 10ರವರೆಗೆ ನಡೆಯಲಿದೆ.

ಬೆಂಗಳೂರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆದ ದಸರಾ ಮಹೋತ್ಸವದ ಕುರಿತ ಸಭೆಯಲ್ಲಿ ನಾಲ್ಕು ದಿನ ಜಿಲ್ಲಾ ದಸರಾ ಆಚರಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ನಗರದ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ದಸರಾ ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ADVERTISEMENT

ಸಚಿವಎಸ್.ಟಿ.ಸೋಮಶೇಖರ್ ಮಾತನಾಡಿ, ‘ಅ.7ರಂದು ನಿಗದಿತ ಮುಹೂರ್ತದಲ್ಲಿ ದಸರಾ ಉತ್ಸವ ಆರಂಭವಾಗಲಿ. ರಾಷ್ಟಪತಿ ಬರುವ ಸಾಧ್ಯತೆ ಇರುವುದರಿಂದ ಯಾವುದೇ ಲೋಪವಾಗಬಾರದು. ಎಲ್ಲ ಸಿದ್ಧತೆ ಮಾಡಿಕೊಂಡು ದಸರಾ ಆಚರಿಸಬೇಕು’ ಎಂದರು.

‘ಈ ಬಾರಿ ಹೆಚ್ಚಿನ ಅವಧಿಗೆ ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮ ವಿಸ್ತರಿಸಬೇಕು. ಹೆಚ್ಚು ಸಂಖ್ಯೆಯಲ್ಲಿ ಕಾರ್ಯಕ್ರಮ ಆಯೋಜಿಸುವ ಮೂಲಕ ಹೆಚ್ಚಿನ ಕಲಾವಿದರಿಗೆ ಅವಕಾಶ ಮಾಡಿಕೊಡಬೇಕು’ ಎಂದು ಸೂಚಿಸಿದರು.

ಕಳೆದ ವರ್ಷದಂತೆ ಈ ಬಾರಿಯೂ ನಗರದ ಪ್ರಮುಖ ರಸ್ತೆ, ವೃತ್ತ, ಸರ್ಕಾರಿ ಕಟ್ಟಡಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಆಕರ್ಷಕವಾಗಿ ವಿದ್ಯುತ್ ದೀಪಾಲಂಕಾರ ಮಾಡುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (ಸೆಸ್ಕ್‌) ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.

ಜಿಲ್ಲಾ ಮಟ್ಟದಲ್ಲಿ ನಡೆಸಲಾಗುವ ದಸರಾ ಬಗ್ಗೆ ತಾಲ್ಲೂಕುಗಳಲ್ಲಿಯೂ ಹೆಚ್ಚಿನ ಜಾಗೃತಿ ಮೂಡಿಸಬೇಕು. ತಾಲ್ಲೂಕು ಮಟ್ಟದಲ್ಲಿಯೂ ದೀಪಾಲಂಕಾರ ಮಾಡುವ ಮೂಲಕ ಹಬ್ಬದ ವಾತಾವರಣ ಮೂಡುವಂತೆ ಮಾಡಬೇಕು. ಇದಕ್ಕೆ ಅಗತ್ಯ ವ್ಯವಸ್ಥೆ, ಸಿದ್ಧತೆ ಕೈಗೊಳ್ಳುವಂತೆ ಜಿಲ್ಲೆಯ ಶಾಸಕರು ಸಭೆಯಲ್ಲಿ ಸೂಚಿಸಿದರು.

ದಸರಾ ಕಾರ್ಯಕ್ರಮಕ್ಕೆ ಅಗತ್ಯವಿರುವ ಖರ್ಚು ವೆಚ್ಚದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾತನಾಡಿ,‘ದಸರಾ ಆಚರಣೆಗೆ ₹ 50 ಲಕ್ಷ ಅಂದಾಜು ವೆಚ್ಚ ಸಿದ್ಧಪಡಿಸಲಾಗುವುದು. ವಿದ್ಯುತ್ ವೆಚ್ಚವನ್ನು ಸೆಸ್ಕ್‌ನವರು ವಹಿಸಿಕೊಂಡರೆ ದಸರಾ ಆಚರಣೆಗೆ ಯಾವುದೇ ಹಣದ ಕೊರತೆಯಾಗುವುದಿಲ್ಲ’ ಎಂದರು.

ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ಎನ್.ಮಹೇಶ್, ಸಿ.ಎಸ್.ನಿರಂಜನ ಕುಮಾರ್, ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷ ಎಂ.ರಾಮಚಂದ್ರ, ನಗರಸಭೆ ಅಧ್ಯಕ್ಷೆ ಸಿ.ಎಂ.ಆಶಾ, ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕ ಜಯವಿಭವಸ್ವಾಮಿ, ಜಿ.ಪಂ.ಸಿಇಒ ಹರ್ಷಲ್ ಭೊಯರ್ ನಾರಾಯಣ ರಾವ್, ಎಎಸ್‌ಪಿ ಕೆ.ಎಸ್.ಸುಂದರ್ ರಾಜ್, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಪೂರ್ಣಚಂದ್ರ ತೇಜಸ್ವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಶ್ವೇಶ್ವರಯ್ಯ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ವಿನಯ್‌ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಕೆ.ಗಿರೀಶ್ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.