ADVERTISEMENT

ಚಾಮರಾಜನಗರ: 130 ಪ್ರಕರಣ ದೃಢ, ಒಂದು ಸಾವು

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 14:59 IST
Last Updated 17 ಏಪ್ರಿಲ್ 2021, 14:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 130 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಒಬ್ಬರು ಮೃತಪಟ್ಟಿದ್ದಾರೆ. 23 ಮಂದಿ ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 431ಕ್ಕೆ ಏರಿದೆ. ಈ ಪೈಕಿ 244 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ 15 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಲ್ಲೂಕಿನ ಹೆಬ್ಬಸೂರು ಗ್ರಾಮದ 45 ವರ್ಷ ಪುರುಷ ಶುಕ್ರವಾರ ಮೃತಪಟ್ಟಿದ್ದಾರೆ. ಇವರು ಇದೇ 15ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು.

ADVERTISEMENT

ಜಿಲ್ಲೆಯಲ್ಲಿ ಈವರೆಗೆ 117 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. 7,760 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, 7,122 ಮಂದಿ ಗುಣಮುಖರಾಗಿದ್ದಾರೆ.

ಶನಿವಾರ ದಾಖಲೆಯ 1,534 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಈ ಪೈಕಿ 1,408 ಮಂದಿಯ ವರದಿ ನೆಗೆಟಿವ್‌ ಬಂದಿದೆ. 126 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ನಿನ್ನೆಯ ನಾಲ್ಕು ಪ್ರಕರಣಗಳು ಸೇರಿ ಒಟ್ಟು ಪ್ರಕರಣಗಳ ಸಂಖ್ಯೆ 130 ಆಗಿದೆ.

ಸೋಂಕಿತರ ಪೈಕಿ ಚಾಮರಾಜನಗರ ತಾಲ್ಲೂಕಿನ 55 ಮಂದಿ ಇದ್ದಾರೆ. ಉಳಿದಂತೆ ಕೊಳ್ಳೇಗಾಲ ತಾಲ್ಲೂಕಿನ 21, ಗುಂಡ್ಲುಪೇಟೆ ತಾಲ್ಲೂಕಿನ 19, ಯಳಂದೂರಿನ 17 ಮತ್ತು ಹನೂರಿನ 15 ಜನರು ಇದ್ದಾರೆ. ಇಬ್ಬರು ಹೊರ ಜಿಲ್ಲೆಯವರಾಗಿದ್ದಾರೆ.

ದಾಖಲೆಯ ಕೋವಿಡ್‌ ಪರೀಕ್ಷೆ

ಈ ಮಧ್ಯೆ ಜಿಲ್ಲೆಯಲ್ಲಿ ಎರಡು ದಿನಗಳಿಂದ ದಾಖಲೆ ಪ್ರಮಾಣದ ಕೋವಿಡ್‌ ಪರೀಕ್ಷೆ ನಡೆಯುತ್ತಿದೆ. ಸರ್ಕಾರ ಜಿಲ್ಲಾಡಳಿತಕ್ಕೆ ಪ್ರತಿ ದಿನ 1000 ಪರೀಕ್ಷೆಗೆ ಗುರಿ ನೀಡಿದೆ. ಆದರೆ, ಜಿಲ್ಲೆಯಲ್ಲಿ ಈಗ ದಿನಕ್ಕೆ 1,500ಕ್ಕೂ ಹೆಚ್ಚು ಪರೀಕ್ಷೆಗಳು ನಡೆಯುತ್ತಿವೆ.

ದಿನಕ್ಕೆ ಕನಿಷ್ಠ 1,500 ಪರೀಕ್ಷೆಗಳು ನಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.

ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಕೊಳ್ಳೇಗಾಲ, ಗುಂಡ್ಲುಪೇಟೆ, ಯಳಂದೂರು ತಾಲ್ಲೂಕು ಆಸ್ಪತ್ರೆ, ಸಂತೇಮರಹಳ್ಳಿ, ಬೇಗೂರು, ಕಬ್ಬಳ್ಳಿಯ ಸಮುದಾಯ ಆರೋಗ್ಯ ಕೇಂದ್ರ ಹಾಗೂ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗುತ್ತಿದೆ. ಅಲ್ಲದೇ ಗ್ರಾಮಗಳ ಬಳಿಯೇ ತೆರಳಿ ಗಂಟಲು ದ್ರವ ಮಾದರಿ ಸಂಗ್ರಹಿಸಲು ನಾಲ್ಕುಇ ಸಂಚಾರಿ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ.

ಕೋವಿಡ್ ನಿಯಂತ್ರಣ ತಡೆಯುವ ಉದ್ದೇಶದಿಂದ ಕೋವಿಡ್ ಪರೀಕ್ಷೆ ಸಂಖ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಕೋವಿಡ್ ಪರೀಕ್ಷೆಗೆ ಜನರು ಸ್ವಯಂ ಪ್ರೇರಿತರಾಗಿ ಮುಂದೆ ಬರಬೇಕು. ಶೀತ, ಜ್ವರದಂತಹ ಯಾವುದೇ ಲಕ್ಷಣಗಳು ಕಂಡು ಬಂದರೂ ಉದಾಸೀನ ಮಾಡದೇ ತಪಾಸಣೆಗೆ ಒಳಗಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.