ADVERTISEMENT

ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನ ವಿತರಿಸಿದ ಸಚಿವ ಸೋಮಶೇಖರ್‌

​ಪ್ರಜಾವಾಣಿ ವಾರ್ತೆ
Published 5 ಜೂನ್ 2020, 13:54 IST
Last Updated 5 ಜೂನ್ 2020, 13:54 IST
ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಆಶಾ ಕಾರ್ಯಕರ್ತೆಯೊಬ್ಬರಿಗೆ ಪ್ರೋತ್ಸಾಹಧನದ ಚೆಕ್‌ ವಿತರಿಸಿದರು
ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಆಶಾ ಕಾರ್ಯಕರ್ತೆಯೊಬ್ಬರಿಗೆ ಪ್ರೋತ್ಸಾಹಧನದ ಚೆಕ್‌ ವಿತರಿಸಿದರು   

ಚಾಮರಾಜನಗರ: ಕೋವಿಡ್‌–19 ತಡೆಯಲು ಶ್ರಮಿಸುತ್ತಿರುವ ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರಿಗೆ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಗುರುವಾರ ಪ್ರೋತ್ಸಾಹ ಧನದ ಚೆಕ್‌ ವಿತರಿಸಿದರು.

ಇದೇ ಸಂದರ್ಭದಲ್ಲಿ ಹೊಸ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಬೆಳೆ ಸಾಲವನ್ನು ವಿತರರಿಸಿದರು.

ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಹಾಗೂ ಸಹಕಾರ ಇಲಾಖೆಯ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಪ್ರೋತ್ಸಾಹಧನದ ಚೆಕ್‌ ಹಾಗೂ ಸಾಲ ವಿತರಿಸಿದರು.

ADVERTISEMENT

ಈ ಸಂದರ್ಭದಲ್ಲಿ ಮಾತನಾಡಿದ ಹನೂರು ಶಾಸಕ ಆರ್‌.ನರೇಂದ್ರ ಅವರು,‘ಕೊರೊನಾ ವೈರಸ್‌ ಹರಡುವಿಕೆ ತಡೆಗಟ್ಟುವಲ್ಲಿ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಸರ್ಕಾರ ಜಿಲ್ಲೆಯ 2,500 ಆಶಾ ಕಾರ್ಯಕರ್ತೆಯರಿಗೆ ₹3,000 ಪ್ರೋತ್ಸಾಹಧನ ನೀಡುತ್ತಿದೆ’ ಎಂದರು.

ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಅವರು ಮಾತನಾಡಿ ‘ಕೊರೊನಾ ವೈರಸ್ ತಡೆಯಲು ಮೂರು ತಿಂಗಳಿಂದ ಆಶಾ ಕಾರ್ಯಕರ್ತೆಯರು, ನರ್ಸ್‌ಗಳಿಗೆ ಸಮನಾಗಿ ಕೆಲಸ ಮಾಡಿದ್ದಾರೆ. ಆಶಾ ಕಾರ್ಯಕರ್ತರು ಇಂದು ಸಂಕಷ್ಟದಲ್ಲಿದ್ದಾರೆ. ಅವರ ಅವಿರತ ಸೇವೆಗೆ ಸರ್ಕಾರ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ರೈತರು ಸಹ ಕೋವಿಡ್‌ನಿಂದ ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಕೃಷಿಕ್ಷೇತ್ರ ಇಂದು ಲಾಭದಾಯಕವಾಗಿಲ್ಲ. ಇದನ್ನು ಮನಗಂಡಿರುವ ಸರ್ಕಾರ ಅವರಿಗೆ ₹75 ಕೋಟಿ ಸಾಲವನ್ನು ಶೂನ್ಯ ಬಡ್ಡಿದರದಲ್ಲಿ ವಿತರಿಸುತ್ತಿದೆ. ಇದು ಉತ್ತಮ ಬೆಳವಣಿಗೆ’ ಎಂದರು.

ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನಕುಮಾರ್ ಅವರು ಮಾತನಾಡಿ, ‘ಕೋವಿಡ್ ತಡೆಗಟ್ಟುವ ಸಂದಿಗ್ಧ ಪರಿಸ್ಥಿತಿಯಲ್ಲೂ ಅಂತರ ಕಾಯ್ದುಕೊಂಡು ಆಶಾ ಕಾರ್ಯಕರ್ತೆಯರು ಮನೆಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಣೆ ಮಾಡಿರುವುದು ಸ್ತುತ್ಯಾರ್ಹ ಕಾರ್ಯ. ಅವರ ಸೇವೆಯನ್ನು ಪರಿಗಣಿಸಿ ಸಹಕಾರ ಇಲಾಖೆವತಿಯಿಂದ ಪ್ರೋತ್ಸಾಹಧನ ವಿತರಿಸಲಾಗುತ್ತಿದೆ’ ಎಂದರು.

ಜಿಲ್ಲಾ ಪಂ‌ಚಾಯಿತಿ ಅಧ್ಯಕ್ಷೆ ಎಂ.ಆಶ್ವಿನಿ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದ ಕುಮಾರ್, ಸಹಕಾರ ಇಲಾಖೆಯ ಉಪನಿಬಂಧಕರಾದ ವಿಕ್ರಮರಾಜೇಅರಸ್, ಚಾಮುಲ್ ಅಧ್ಯಕ್ಷ ನಂಜುಂಡ ಪ್ರಸಾದ್, ಗೌರವ ನಿರ್ದೇಶಕ ರವಿಶಂಕರ್, ನಿರ್ದೇಶಕ ಬಸವರಾಜು, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಹರೀಶ್‌ಗೌಡ, ನಿರ್ದೇಶಕ ನಾಗೇಂದ್ರ, ವ್ಯವಸ್ಥಾಪಕ ನಿರ್ದೇಶಕ ರಾಜಶೇಖರಮೂರ್ತಿ, ಜಿಲ್ಲಾ ಸಹಕಾರಿ ಯೂನಿಯನ್‌ನ ಎಂ.ಎನ್. ಪ್ರಭುಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.