
ಚಾಮರಾಜನಗರ: ಅಸಂಘಟಿತ ಕಾರ್ಮಿಕರಿಗೆ ಮುಪ್ಪಿನಲ್ಲಿ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಪಿಂಚಣಿ ಯೋಜನೆ ನೆರವಿಗೆ ಬರಲಿದ್ದು ಅರ್ಹರಿಗೆ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಪಿಂಚಣಿ ಯೋಜನೆಗೆ ನೋಂದಾಯಿಸುವ ಪ್ರಕ್ರಿಯೆ ಕುರಿತ ಸಭೆಯಲ್ಲಿ ಮಾತನಾಡಿ, ಗೃಹ ಆಧಾರಿತ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟ ಸಿದ್ದಪಡಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು, ಅಗಸರು, ರಿಕ್ಷಾ ಚಾಲಕರು, ಭೂ ರಹಿತ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಕೃಷಿ ಕಾರ್ಮಿಕರು, ಕಟ್ಟಡ, ಕೈಮಗ್ಗ, ಚರ್ಮೋದ್ಯಮ, ಧ್ವನಿ ಮತ್ತು ದೃಶ್ಯ, ಬೀಡಿ ಕಾರ್ಮಿಕರು ಮತ್ತು ಇತರೆ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವ ಉದ್ದೇಶದಿಂದ ಪಿಂಚಣಿ ಯೋಜನೆ ಜಾರಿಗೆ ತರಲಾಗಿದೆ ಎಂದರು.
ಅಸಂಘಟಿತ ವಲಯದ ಕಾರ್ಮಿಕರು ಜಿಲ್ಲೆಯಲ್ಲಿ ಹೆಚ್ಚಾಗಿದ್ದು ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಪಿಂಚಣಿ ಯೋಜನೆಯಡಿ 60 ವರ್ಷ ಪೂರ್ಣಗೊಂಡ ಬಳಿಕ ತಿಂಗಳಿಗೆ 3 ಸಾವಿರ ಖಚಿತ ಮಾಸಿಕ ಪಿಂಚಣಿ ದೊರೆಯಲಿದೆ. ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಳ್ಳಲು ಅನುಕೂಲವಾಗುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಆಯಾ ತಾಲೂಕಿನಲ್ಲಿಯೇ ಯೋಜನೆಗೆ ಅರ್ಹರನ್ನು ನೋಂದಾಯಿಸಲು ವಿಶೇಷ ನೋಂದಣಿ ಶಿಬಿರಗಳನ್ನು ಮಾಡಬೇಕು. ಅಸಂಘಟಿತ ಕಾರ್ಮಿಕರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಯೋಜನೆಯ ಲಾಭದ ಬಗ್ಗೆ ಕಾರ್ಮಿಕರಿಗೆ ಮನವರಿಕೆ ಮಾಡಿಕೊಡಬೇಕು. ಪಿಂಚಣಿ ಸೌಲಭ್ಯ ಸದುಪಯೋಗ ಮಾಡಿಕೊಳ್ಳಲು ಜಾಗೃತಿ ಮೂಡಿಸಬೇಕು ಜಿಲ್ಲಾಧಿಕಾರಿ ಶ್ರೀರೂಪ ನಿರ್ದೇಶನ ನೀಡಿದರು.
ಸಭೆಯಲ್ಲಿ ಅಸಂಘಟಿತ ಕಾರ್ಮಿಕರ ಸಂಘಟನೆಯ ಮುಖಂಡರು ಹಾಗೂ ಪ್ರತಿನಿಧಿಗಳು ಅಹವಾಲು ಹೇಳಿಕೊಂಡರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಿ.ಎಸ್.ಶೃತಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಸಿ.ರಾಮಚಂದ್ರಯ್ಯ, ಯೋಜನಾ ನಿರ್ದೇಶಕ ಎಂ.ಮಹೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಷ್ಮಾ, ಅಧಿಕಾರಿಗಳು, ಕಾರ್ಮಿಕ ಮುಖಂಡರು, ಪ್ರತಿನಿಧಿಗಳು ಸಭೆಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.