ಹನೂರು: ‘ಪೋಲಿಸರು ಕಂಡು ಭಯಪಡುವುದು ಬಿಟ್ಟು, ಅವರ ಮೇಲೆ ಭರವಸೆ ಇಡಬೇಕು’ ಎಂದು ಹನೂರು ಪಟ್ಟಣದ ಇನ್ ಸ್ಪೆಕ್ಟರ್ ಆನಂದಮೂರ್ತಿ ಹೇಳಿದರು.
ಹನೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗೌತಮ್ ಶಾಲೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ತೆರೆದ ಮನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರ ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತೆರೆದ ಮನೆ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ. ಸರ್ಕಾರದ ನಿಯಮದಂತೆ ಪುರುಷನಿಗೆ 21, ಮಹಿಳೆಗೆ 18 ವರ್ಷ ತುಂಬಿದ ನಂತರ ವಿವಾಹ ಮಾಡಬೇಕು. ಇದನ್ನು ಹೊರತುಪಡಿಸಿ ಬಾಲ್ಯ ವಿವಾಹ ಮಾಡಿದರೆ ಅಂತಹವರ ವಿರುದ್ಧ ಕ್ರಮ ವಹಿಸಲಾಗುತ್ತಿದೆ. ಬಾಲ್ಯ ವಿವಾಹ ಅಕ್ಷಮ್ಯ ಅಪರಾಧ. ಬಾಲ್ಯ ವಿವಾಹ ತಡೆಗೆ ಮಾಹಿತಿ ನೀಡಿದವರ ಹೆಸರು ಗೌಪ್ಯವಾಗಿ ಇಡಲಾಗುವುದು ಎಂದರು.
ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯುವತಿಯರನ್ನು ಹಾಗೂ ಶಾಲೆಗೆ ಹೋಗುವಾಗ ಹೆಣ್ಣು ಮಕ್ಕಳನ್ನು ಚುಡಾಯಿಸಿದರೆ ಕಾನೂನು ರೀತಿಯಲ್ಲಿ ಕ್ರಮ ವಹಿಸಲಾಗುತ್ತದೆ. ಈಗಾಗಲೇ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆಪ್ತ ಗೆಳತಿ ಕಾರ್ಯಕ್ರಮ ಅನುಷ್ಠಾನಕ್ಕೆ ತರಲಾಗಿದೆ. ಸಮಸ್ಯೆಗಳನ್ನು ದೂರು ಪೆಟ್ಟಿಗೆಯಲ್ಲಿ ಬರೆದು ಹಾಕಬಹುದು ಎಂದು ತಿಳಿಸಿದರು.
ಪೊಲೀಸ್ ಮತ್ತು ಇನ್ನಿತರ ಎಲ್ಲಾ ತುರ್ತು ಸಹಾಯಕ್ಕಾಗಿ 112 ಸಂಖ್ಯೆಗೆ ಕರೆ ಮಾಡಿದರೆ ತ್ವರಿತವಾಗಿ ಪೊಲೀಸರು ಭೇಟಿ ನೀಡಿ ನಿಮ್ಮ ಸಮಸ್ಯೆ ಬಗೆಹರಿಸುವರು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಹಾಗೂ ಸಂಬಂಧಿಕರಿಗೆ ಮಾಹಿತಿ ನೀಡುವ ಮೂಲಕ ತಮ್ಮ ಜವಾಬ್ದಾರಿ ನಿರ್ವಹಿಸಬೇಕು ಎಂದರು.
ಎಎಸ್ಐ ಹೂವಯ್ಯ ಗೌತಮ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.