ADVERTISEMENT

ಬಿಳಿಗಿರಿರಂಗನಬೆಟ್ಟ: ಅ 6, 7ರಂದು ಪ್ರವೇಶ ನಿರ್ಬಂಧ

ರಾಷ್ಟ್ರಪತಿ ರಾಮನಾಥ ಕೋವಿಂದ್ ಭೇಟಿ, ಜಿಲ್ಲಾಧಿಕಾರಿ ಆದೇಶ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2021, 16:04 IST
Last Updated 4 ಅಕ್ಟೋಬರ್ 2021, 16:04 IST
ಯಳಂದೂರು ತಾಲ್ಲೂಕಿನ ವಡೆಗೆರೆ ಸಮೀಪ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಬಳಿ ನಿರ್ಮಾಣ ಆಗುತ್ತಿರುವ ಹೆಲಿಪ್ಯಾಡ್ ಮೈದಾನಕ್ಕೆ ದಕ್ಷಿಣ ವಲಯದ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಅವರು ಸೋಮವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು
ಯಳಂದೂರು ತಾಲ್ಲೂಕಿನ ವಡೆಗೆರೆ ಸಮೀಪ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಬಳಿ ನಿರ್ಮಾಣ ಆಗುತ್ತಿರುವ ಹೆಲಿಪ್ಯಾಡ್ ಮೈದಾನಕ್ಕೆ ದಕ್ಷಿಣ ವಲಯದ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಅವರು ಸೋಮವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು   

ಯಳಂದೂರು/ಚಾಮರಾಜನಗರ:ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು 7ರಂದು ಬಿಳಿಗಿರಿರಂಗನಬೆಟ್ಟಕ್ಕೆ ಭೇಟಿ ನೀಡುತ್ತಿರುವ ಕಾರಣ,ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ 6 (ಬುಧವಾರ) ಮತ್ತು 7ರಂದು(ಗುರುವಾರ) ಬಿಳಿಗಿರಿರಂಗನಾಥಸ್ವಾಮಿ ದೇವಾಲಯಕ್ಕೆ ಸಾರ್ವಜನಿಕರು ಹಾಗೂ ಭಕ್ತಾದಿಗಳ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಆದೇಶ ಹೊರಡಿಸಿದ್ದಾರೆ.

ರಾಷ್ಟ್ರಪತಿಗಳ ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು, ಅತಿ ಗಣ್ಯರು, ಭದ್ರತಾ ಸಿಬ್ಬಂದಿ ಮತ್ತು ನಿಯೋಜಿತರಾದ ಅಧಿಕಾರಿ, ಸಿಬ್ಬಂದಿ ವರ್ಗದವರಿಗೆ ನಿಷೇಧಾಜ್ಞೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ರಸ್ತೆಗೆ ಬಣ್ಣದ ಅಲಂಕಾರ, ಬೊಂಬಿನ ಬೇಲಿ: ಈ ಮಧ್ಯೆ, ತಾಲ್ಲೂಕಿನ ವಡೆಗೆರೆ ಸಮೀಪದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಬಳಿ ಹೆಲಿಪ್ಯಾಡ್ ನಿರ್ಮಾಣ ಕಾಮಗಾರಿ ಚುರುಕು ಪಡೆದಿದೆ.

ADVERTISEMENT

ರಾಷ್ಟ್ರಪತಿ ಅವರು ಸಂಚರಿಸುವ ಹಾದಿಯುದ್ದಕ್ಕೂ ಶ್ವೇತ ಬಣ್ಣ ಬಳಿದು ಸಿಂಗರಿಸಲಾಗುತ್ತಿದೆ. ಬಿಆರ್‌ಟಿ ರಸ್ತೆಯವರೆಗೆ ಹಾದಿ ಬದಿ ಬೊಂಬಿನ ಬೇಲಿ ಹಾಕಲಾಗಿದ್ದು, ಭದ್ರತೆಗೆ ಸಂಬಂಧಿಸಿದ ಕೆಲಸಗಳು ಭರದಿಂದ ಸಾಗಿವೆ.

ಐಜಿಪಿ ಭೇಟಿ: ದಕ್ಷಿಣ ವಲಯದ ಪೊಲೀಸ್ ಮಹಾ ನಿರೀಕ್ಷಕ ಪ್ರವೀಣ್ ಮಧುಕರ್ ಪವಾರ್ ಅವರು ಸೋಮವಾರ ಹೆಲಿಪ್ಯಾಡ್ ನಿರ್ಮಾಣ ಆಗುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಭದ್ರತೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಡನೆ ಚರ್ಚೆ ನಡೆಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್, ಸರ್ಕಲ್ ಇನ್‌ಸ್ಪೆಕ್ಟರ್ ಎಂ.ಶಿವಮಾದಯ್ಯ, ಇತರರು ಇದ್ದರು.

7ರಂದು ನಿಷೇಧಾಜ್ಞೆ: ರಾಷ್ಟ್ರಪತಿ ಅವರು ಭೇಟಿ ನೀಡುವ ದಿನವಾದ ಗುರುವಾರಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ವಡಗೆರೆ ಗ್ರಾಮದ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯ ಆವರಣದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್, ಬಿಳಿಗಿರಿರಂಗನಾಥಸ್ವಾಮಿ ದೇವಾಲಯದ ಆವರಣ ಮತ್ತು ಚಾಮರಾಜನಗರದ ವೈದ್ಯಕೀಯ ಕಾಲೇಜು ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಅಲ್ಲದೇ, ವಡಗೆರೆ ಗ್ರಾಮದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್, ಬಿಳಿಗಿರಿರಂಗನಾಥಸ್ವಾಮಿ ದೇವಾಲಯದ ಆವರಣ ಮತ್ತು ಚಾಮರಾಜನಗರದ ವೈದ್ಯಕೀಯ ಕಾಲೇಜಿನ 15 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮಾನವ ರಹಿತ ಏರ್‌ಕ್ರಾಫ್ಟ್ ಬಳಕೆ, ಏರ್‌ಬಲೂನ್‌ಗಳ ಹಾರಾಟ ಹಾಗೂ ಬ್ಯಾನರ್, ಬಂಟಿಂಗ್ಸ್ ಅಳವಡಿಸುವುದನ್ನು ನಿಷೇಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.