ADVERTISEMENT

ಕೃಷಿ ಸಚಿವರಿಗೆ ಘೇರಾವ್‌ ಹಾಕಲು ರೈತಸಂಘದ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 14:42 IST
Last Updated 18 ಜನವರಿ 2021, 14:42 IST
ಹೆಬ್ಬಸೂರು ಬಸವಣ್ಣ
ಹೆಬ್ಬಸೂರು ಬಸವಣ್ಣ   

ಚಾಮರಾಜನಗರ: ರೈತರ ಕಷ್ಟಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುವ ರೈತ ಸಂಘ ಮತ್ತು ಹಸಿರು ಸೇನೆ, ಇದೇ 23ರಂದು ಜಿಲ್ಲೆಗೆ ಭೇಟಿ ನೀಡಲಿರುವ ಕೃಷಿ ಸಚಿವ ಬಿ.ಸಿ.ಪಾಟೀಲ ಅವರಿಗೆ ಘೇರಾವ್‌ ಹಾಕಲು ನಿರ್ಧರಿಸಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೆಬ್ಬಸೂರು ಬಸವಣ್ಣ ಅವರು, ‘ರೈತರ ಕಷ್ಟಗಳಿಗೆ ಸ್ಪಂದಿಸುವುದನ್ನು ಬಿಟ್ಟು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ಕಾನೂನುಗಳನ್ನು ಜಾರಿಗೊಳಿಸುತ್ತಿವೆ. ರೈತರ ಪರವಾಗಿದ್ದೇವೆ ಎಂದು ಹೇಳುವ ಸರ್ಕಾರಗಳು, ಕೃಷಿಕನಿಗೆ ಅನುಕೂಲ ಮಾಡಿಕೊಡುವಂತಹ ಯಾವ ಕೆಲಸವನ್ನೂ ಮಾಡುತ್ತಿಲ್ಲ’ ಎಂದು ಆರೋಪಿಸಿದರು.

‘ಜಿಲ್ಲೆಯಲ್ಲಿ ಭತ್ತ ಖರೀದಿ ಇನ್ನೂ ಆರಂಭವಾಗದಿರುವುದರಿಂದ ರೈತರಿಗೆ ತುಂಬಾ ತೊಂದರೆಯಾಗಿದೆ. ಕನಿಷ್ಠ ಬೆಂಬಲಬೆಲೆಯಲ್ಲಿ ಕ್ವಿಂಟಲ್‌ಗೆ ₹1800 ಸಿಗುತ್ತಿತ್ತು. ಈಗ ರೈತರು ₹1400ಕ್ಕೆ ಹೊರಗಡೆ ಮಾರಾಟ ಮಾಡುತ್ತಿದ್ದಾರೆ’ ಎಂದು ಅವರು ದೂರಿದರು.

ADVERTISEMENT

‘ನೇಂದ್ರ ಬಾಳೆ ಬೆಲೆ ಸಂಪೂರ್ಣವಾಗಿ ಕುಸಿದಿದ್ದು, ರೈತರು ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ವಾರದ ಅವಧಿಯಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದರು.

‘ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ, ಇದೇ 26ರಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್‌, ಬೈಕ್‌ ರ‍್ಯಾಲಿ ಹಮ್ಮಿಕೊಳ್ಳಲಿದ್ದೇವೆ’ ಎಂದು ಬಸವಣ್ಣ ಹೇಳಿದರು.

ವಿದ್ಯುತ್‌ ಸಂಪರ್ಕ ಕಡಿತಕ್ಕೆ ಅಸಮಾಧಾನ: ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆಗಳ ಅಡಿಯಲ್ಲಿ ವಿದ್ಯುತ್‌ ಸಂಪರ್ಕ ಪಡೆದಿರುವ ರೈತರು, ಬಿಲ್‌ ಪಾವತಿಸಿಲ್ಲ ಎಂಬ ಕಾರಣ ನೀಡಿ, ಸೆಸ್ಕ್‌ನವರು ಹೇಳದೆ ಕೇಳದೆ ಸಂಪರ್ಕ ಕಡಿತಗೊಳಿಸುತ್ತಿದ್ದಾರೆ. ಇದರಿಂದ ಬೆಳೆಗಾರರಿಗೆ ತೀವ್ರ ತೊಂದರೆ ಅನುಭವಿವಂತಾಗಿದೆ ಎಂದು ಅವರು ದೂರಿದರು.

ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಲಿ: ಸಂಘದ ಪ್ರಧಾನ ಕಾರ್ಯದರ್ಶಿ ಜ್ಯೋತಿಗೌಡನಪುರ ಸಿದ್ದರಾಜು ಅವರು ಮಾತನಾಡಿ, ‘ಕೃಷಿ ಸಚಿವ 23ರಂದು ರೈತರೊಂದಿಗೆ ದಿನ ಕಳೆಯಲು ಜಿಲ್ಲೆಗೆ ಬರುತ್ತಿರುವುದು ಸಂತೋಷವೇ. ಜಿಲ್ಲೆಗೆ ಬಂದ ಸಂದರ್ಭದಲ್ಲಿ ಅವರು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಬೇಕು. ಮೃತಪಟ್ಟವರ ಸಂಬಂಧಿಕರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು’ ಎಂದು ಒತ್ತಾಯಿಸಿದರು.

ಸಂಘದ ಕಾರ್ಯದರ್ಶಿ ಶಾಂತಮಲ್ಲಪ್ಪ‍, ಮುಖಂಡ ಅಬ್ಬಾಸ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.