ADVERTISEMENT

ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆತ: ಅ. 10ರಂದು ಪಟ್ಟಣದಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2025, 8:12 IST
Last Updated 8 ಅಕ್ಟೋಬರ್ 2025, 8:12 IST
   

ಸೋಮವಾರಪೇಟೆ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣ ಖಂಡಿಸಿರುವ ಕೊಡಗು ಜಿಲ್ಲಾ ದಲಿತ ಹಿತರಕ್ಷಣ ಒಕ್ಕೂಟ, ಇದು ಸಂವಿಧಾನ ವಿರೋಧಿ ಪ್ರಕರಣವಾಗಿದ್ದು ಆರೋಪಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದೆ.

ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಜಯಪ್ಪ ಹಾನಗಲ್‌ ಮಾತನಾಡಿ, ಅರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅ.10 ರಂದು ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ  ಪ್ರತಿಭಟಿಸಲಾಗುವುದು. ಪ್ರತಿಭಟನೆಯಲ್ಲಿ ಪ್ರಗತಿಪರ ಚಿಂತಕರು, ದಲಿತಪರ ಹೋರಾಟಗಾರರು ಭಾಗವಹಿಸಲಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಸಮಯದಲ್ಲಿ ವಕೀಲ ರಾಕೇಶ್ ಕಿಶೋರ್ ಸನಾತನ ಧರ್ಮಕ್ಕೆ ಅವಹೇಳನವಾಗುವುದನ್ನು ಸಹಿಸುವುದಿಲ್ಲ ಎಂಬುದಾಗಿ ಹೇಳಿ ಶೂ ಎಸೆದಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ. ಕಾನೂನು ತಿಳಿದಿರುವ ವ್ಯಕ್ತಿ ಸಂವಿಧಾನವನ್ನು ಗೌರವಿಸಬೇಕೆಂಬ ಪರಿಜ್ಞಾನವಿಲ್ಲರುವುದು ಖಂಡನೀಯ ಎಂದು ಹೇಳಿದರು.

ಒಕ್ಕೂಟದ ಅಧ್ಯಕ್ಷ ಡಿ.ಎಸ್. ನಿರ್ವಾಣಪ್ಪ ಮಾತನಾಡಿ, ಶೂ ಎಸೆತ ಕೃತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ದೇಶದ ಪ್ರಮುಖ ಮುಖಂಡರು ಖಂಡಿಸಿದ್ದಾರೆ. ಅರೋಪಿ ರಾಕೇಶ್ ಕಿಶೋರ್ ವಿರುದ್ಧ ಕಠಿಣ ಕ್ರಮವಾಗಬೇಕು ಎಂದರು.

 ಒಕ್ಕೂಟದ ಕಾರ್ಯದರ್ಶಿ ಬಿ.ಈ. ಜಯೇಂದ್ರ, ಸಹ ಕಾರ್ಯದರ್ಶಿ ಮಹೇಶ್, ಪದಾಧಿಕಾರಿ ಈರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.