ADVERTISEMENT

ಚಾಮರಾಜನಗರ ಜಿಲ್ಲಾ ದೇವರಾಜು ಅರಸು ಪ್ರಶಸ್ತಿ: ಜಯದೇವ ಆಯ್ಕೆ

ಇಂದು ಜನ್ಮ ದಿನಾಚರಣೆ ಸಮಾರಂಭ, ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2022, 15:19 IST
Last Updated 19 ಆಗಸ್ಟ್ 2022, 15:19 IST
ಪ್ರೊ.ಜಿ.ಎಸ್‌.ಜಯದೇವ
ಪ್ರೊ.ಜಿ.ಎಸ್‌.ಜಯದೇವ   

ಚಾಮರಾಜನಗರ: ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 2022–23ನೇ ಸಾಲಿನ ಜಿಲ್ಲಾಮಟ್ಟದ ಪ್ರಶಸ್ತಿಗೆ ದೀನಬಂಧು ಸಂಸ್ಥೆಯ ಸಂಸ್ಥಾಪಕ ಹಾಗೂ ಗೌರವ ಕಾರ್ಯದರ್ಶಿ ಪ್ರೊ.ಜಿ.ಎಸ್.ಜಯದೇವ ಅವರು ಆಯ್ಕೆಯಾಗಿದ್ದಾರೆ.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಡಿ. ದೇವರಾಜ ಅರಸು ಪ್ರಶಸ್ತಿ ಆಯ್ಕೆ ಸಮಿತಿಯು ಜಯದೇವ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದೆ.

ಶನಿವಾರ (ಆ.20) ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿರುವ ಡಿ. ದೇವರಾಜ ಅರಸು 107ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ADVERTISEMENT

ಮರವಣಿಗೆ ಸಮಾರಂಭ: ಅರಸು ಅವರ 107ನೇ ಜನ್ಮ ದಿನಾಚರಣೆ ಸಮಾರಂಭ ಶನಿವಾರ ಅದ್ದೂರಿಯಾಗಿ ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ಚಾಮರಾಜೇಶ್ವರ ದೇವಾಲಯದ ಬಳಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಡಿ.ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆಗೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಲನೆ ನೀಡಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಏರ್ಪಡಿಸಿರುವ ವಸ್ತುಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಉದ್ಘಾಟಿಸುವರು. ಬಳಿಕ ವೇದಿಕೆ ಸಮಾರಂಭ ನಡೆಯಲಿದೆ. ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.

ಶಾಸಕರಾದ ಆರ್.ನರೇಂದ್ರ, ಎನ್. ಮಹೇಶ್, ಸಿ.ಎಸ್.ನಿರಂಜನಕುಮಾರ್, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜಿ.ನಿಜಗುಣರಾಜು, ನಗರಸಭೆ ಅಧ್ಯಕ್ಷೆ ಸಿ.ಎಂ.ಆಶಾ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ.ದೇವರಾಜು ಅವರು ಪ್ರಧಾನ ಭಾಷಣ ಮಾಡುವರು.

ಮಧ್ಯಾಹ್ನ 2.30ರಿಂದ ಸಂಜೆ 6 ಗಂಟೆಯವರೆಗೆ ಇಲಾಖೆಯ ವಿದ್ಯಾರ್ಥಿ ನಿಲಯಗಳ ಮತ್ತು ವಸತಿ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ಪ್ರಕಟಣೆ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.