ADVERTISEMENT

ರೈತರಿಂದ ಛೀ.. ಥೂ.. ಚಳವಳಿ: ಮೋದಿ-ರಾಹುಲ್ ಭಾವಚಿತ್ರಕ್ಕೆ ಸಗಣಿ ಎರಚಿ ಪ್ರತಿಭಟನೆ

ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 21 ಜುಲೈ 2020, 14:12 IST
Last Updated 21 ಜುಲೈ 2020, 14:12 IST
ಪ್ರತಿಭಟನಕಾರರು ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರಗಳಿಗೆ ಸಗಣಿ ಎರಚಿ ಆಕ್ರೋಶ ವ್ಯಕ್ತಪಡಿಸಿದರು
ಪ್ರತಿಭಟನಕಾರರು ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರಗಳಿಗೆ ಸಗಣಿ ಎರಚಿ ಆಕ್ರೋಶ ವ್ಯಕ್ತಪಡಿಸಿದರು   

ಚಾಮರಾಜನಗರ: ಭೂ ಸುಧಾರಣಾ ಕಾಯ್ದೆಗೆ ಮಾಡಿರುವ ತಿದ್ದುಪಡಿಯನ್ನು ವಾಪಸ್‌ ಪಡೆಯುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಛೀ... ಥೂ ಚಳವಳಿ ನಡೆಸಿದರು.

ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸೇರಿದ ಪ್ರತಿಭಟನಕಾರರು ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಮಾನವ ಸರಪಣಿ ನಿರ್ಮಿಸಿ ರಸ್ತೆ ತಡೆ ನಡೆಸಿದರು.

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವಲ್ಲಿ ಎಲ್ಲ ರಾಜಕೀಯ ಪಕ್ಷಗಳ ಕೈವಾಡ ಇದೆ ಎಂದು ಆರೋಪಿಸಿದ ರೈತರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಜೆಡಿಎಸ್‌ ವರಿಷ್ಠ ದೇವೇಗೌಡ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕೃಷಿ ಸಚಿವ ಬಿ.ಸಿ.ಪಾಟೀಲ, ಕಂದಾಯ ಸಚಿವ ಆರ್‌.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ವಿವಿಧ ರಾಜಕೀಯ ಮುಖಂಡರ ಭಾವಚಿತ್ರಗಳಿಗೆ ಸಗಣಿ ಎರಚಿ ಛೀ.. ಥೂ ಎಂದು ಉಗಿದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ನಂತರ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನದವರೆಗೆ ತೆರಳಿ ಭವನದ ಮುಂಭಾಗ ಕೆಲ ಹೊತ್ತು ಧರಣಿ ಕುಳಿತರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ರೈತ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

‘ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಾಪಸ್‌ ಪಡೆ‌ಯಬೇಕು, ವಿದ್ಯುತ್‌ ಕ್ಷೇತ್ರವನ್ನು ಖಾಸಗೀಕರಣಗೊಳಿಸಬಾರದು. ಬ್ಯಾಂಕ್‌ಗಳನ್ನೂ ಖಾಸಗೀಕರಣ ಮಾಡಬಾರದು’ ಎಂದು ಒತ್ತಾಯಿಸಿದರು.

‘ಗುಂಡ್ಲುಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌, ಸಬ್‌ ಇನ್‌ಸ್ಪೆಕ್ಟರ್‌ ಅವರನ್ನು ಕೂಡಲೇ ಅಮಾನತುಗೊಳಿಸಬೇಕು. ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಿಗೆ ಮೂಲಸೌಕರ್ಯ ಒದಗಿಸಬೇಕು. ಚಾಮರಾಜನಗರ ತಾಲ್ಲೂಕಿನ ಮುತ್ತಿಗೆ, ಹೆಗ್ಗೋಠಾರ, ಗೋವಿಂದವಾಡಿಗೆ ಸೇರಿದ ಪ್ರದೇಶದಲ್ಲಿ ಎಂಟಕ್ಕೂ ಹೆಚ್ಚು ಕ್ರಷರ್‌ಗಳು, ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ, ಇದರಿಂದ ರೈತರ ಬೆಳೆಗಳು ಹಾಗೂ ಮಾರ್ಗ ಹಾಳಾಗುತ್ತಿದೆ. ಹಾಗಾಗಿ ಇವುಗಳನ್ನು ಕೂಡಲೇ ಸ್ಥಗಿತಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಮಹದೇಶ್ವರ ಬೆಟ್ಟದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಬೇಕು. ಕೋವಿಡ್‌–19 ಕಾರಣಕ್ಕೆ ಮಹದೇಶ್ವರ ದೇವಾಲಯದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಬೇಕು. ಬಿಳಿಗಿರಂಗನಬೆಟ್ಟದ ಕರುಣಾ ಟ್ರಸ್ಟ್‌ನ ಡಾ.ಸುದರ್ಶನ್‌ ಅವರ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾ ಘಟ‌ಕದ ಅಧ್ಯಕ್ಷ ಹೊನ್ನೂರು ಪ್ರಕಾಶ್‌, ಕಬ್ಬು ಬೆಳೆಗಾರರ ಸಂಘದ ಕಾರ್ಯಾಧದ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್‌, ಮುಖಂಡರಾದ ಮೂಕಹಳ್ಳಿ ಮಹಾದೇವಸ್ವಾಮಿ, ನಾಗರಾಜು, ಕುಮಾರಸ್ವಾಮಿ, ಹೊನ್ನೂರು ಬಸವಣ್ಣ, ಮಾಡ್ರಹಳ್ಳಿ ಮಹದೇವಪ್ಪ, ಕರಿಯಪ್ಪ, ವಿಜಯ್‌, ಪೃಥ್ವಿ, ಶಿವಕುಮಾರ್‌, ಮಹದೇವಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.