ADVERTISEMENT

ಮೇಕೆದಾಟು ಯೋಜನೆ: ತಮಿಳುನಾಡು ವಿರೋಧಕ್ಕೆ ಖಂಡನೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 16:20 IST
Last Updated 18 ಜುಲೈ 2021, 16:20 IST
ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು
ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು   

ಚಾಮರಾಜನಗರ: ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ಶ್ರೀಚಾಮರಾಜೇಶ್ವರ ಉದ್ಯಾನದ ಆವರಣದಲ್ಲಿ ಸೇರಿದ ಪ್ರತಿಭಟನಕಾರರು, ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಲೇಬೇಕು ಎಂದು ಆಗ್ರಹಿಸಿದರು. ತಮಿಳುನಾಡು ಸರ್ಕಾರ, ರಾಜ್ಯ ಸರ್ಕಾರ ಹಾಗೂ ರಾಜ್ಯದ ಎಲ್ಲ ಸಂಸದರ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರು ಮಾತನಾಡಿ, ಕರ್ನಾಟಕದ ನೆಲದಲ್ಲಿ ಅಣೆಕಟ್ಟು ನಿರ್ಮಿಸುವುದಕ್ಕೆ ತಮಿಳುನಾಡು ಸರ್ಕಾರ ವಿರೋಧ ಮಾಡುತ್ತಿದೆ. ಮೇಕೆದಾಟು ಯೋಜನೆಗೆ ಅವಕಾಶ ನೀಡಬಾರದು ಎಂದು ತಮಿಳುನಾಡಿನ ಸರ್ವಪಕ್ಷ ನಿಯೋಗ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಕರ್ನಾಟಕದ ನೆಲದಲ್ಲಿ ಅಣೆಕಟ್ಟು ಕಟ್ಟಲಾಗುತ್ತಿದೆ. ಇದನ್ನು ತಡೆಯಲು ಇವರು ಯಾರು’ ಎಂದು ಅವರು ಪ್ರಶ್ನಿಸಿದರು.

ADVERTISEMENT

ಇಷ್ಟೆಲ್ಲ ಬೆಳವಣಿಗೆ ಆಗಿದ್ದರೂ ರಾಜ್ಯದ ಸಂಸದರು ಇದರ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಇವರಿಗೆ ರಾಜ್ಯದ ಬಗ್ಗೆ ಕಾಳಜಿ ಇಲ್ಲ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ತಕ್ಷಣವೇ ಮೇಕೆದಾಟು ಯೋಜನೆ ಆರಂಭಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಕನ್ನಡಪರ ಸಂಘಟನೆಗಳು ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ’ ಎಂದು ಅವರು ಎಚ್ಚರಿಸಿದರು.

ನಿಜಧ್ವನಿ ಗೋವಿಂದರಾಜು, ಕರ್ನಾಟಕ ಕನ್ನಡ ರಕ್ಷಣಾ ವೇದಿಕೆಯ ಅಧ್ಯಕ್ಷ ಚಾ.ಗು.ನಾಗರಾಜ್, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಸಹ ಕಾರ್ಯದರ್ಶಿ ಪಿ.ಎಚ್.ರಾಜು, ಗು.ಪುರುಪೋತ್ತಮ್, ತಾಂಡವಮೂರ್ತಿ, ನಂಜುಂಡ, ವೀರಭದ್ರ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.