ADVERTISEMENT

ಉದ್ಧವ್‌ ಠಾಕ್ರೆ ಹೇಳಿಕೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2021, 12:48 IST
Last Updated 20 ಜನವರಿ 2021, 12:48 IST
ಠಾಕ್ರೆ ಹೇಳಿಕೆ ಖಂಡಿಸಿ ಕರ್ನಾಟಕ ಯುವಶಕ್ತಿ ವೇದಿಕೆ ಪದಾಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿದರು
ಠಾಕ್ರೆ ಹೇಳಿಕೆ ಖಂಡಿಸಿ ಕರ್ನಾಟಕ ಯುವಶಕ್ತಿ ವೇದಿಕೆ ಪದಾಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿದರು   

ಚಾಮರಾಜನಗರ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಹೇಳಿಕೆ ಖಂಡಿಸಿ ಕರ್ನಾಟಕ ಯುವಶಕ್ತಿ ವೇದಿಕೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಸೇರಿದ ಪ್ರತಿಭಟನಕಾರರು ಉದ್ಧವ್ ಠಾಕ್ರೆ ವಿರುದ್ಧ ಘೋಷಣೆಗಳನ್ನು ಕೂಗಿದರು.

‘ಕರ್ನಾಟಕದಲ್ಲಿರುವ ಮರಾಠಿ ಭಾಷೆ ಹಾಗೂ ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವುದಾಗಿ ಹೇಳಿಕೆ ನೀಡಿರುವುದು ಖಂಡನೀಯ. ರಾಜ್ಯ ವಿಭಜನೆಗೆ ಸಂಬಂಧಿಸಿದಂತೆ ಮಹಾಜನ್‌ ವರದಿಯೇ ಅಂತಿಮ. ರಾಜ್ಯದಲ್ಲಿರುವ ಮರಾಠಿಗರು ಕನ್ನಡಿಗರೊಂದಿಗೆ ಅನ್ಯೋನ್ಯತೆಯಿಂದ ಬೆರೆತು ಜೀವನ ನಡೆಸುತ್ತಿದ್ದಾರೆ’ ಎಂದರು.

ADVERTISEMENT

ರಾಜ್ಯದಲ್ಲಿರುವ ಯಾರಾದರೂ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಎಂದು ಹೇಳಿದರೆ, ಅಂತಹವರನ್ನು ನಾವೇ ಮಹಾರಾಷ್ಟ್ರಕ್ಕೆ ಕಳುಹಿಸಿಕೊಡುತ್ತೇವೆ. ರಾಜ್ಯದ ಎಲ್ಲ ಪಕ್ಷಗಳ ಸಂಸದರು, ಶಾಸಕರು, ಮುಖಂಡರು ಠಾಕ್ರೆ ಹೇಳಿಕೆಯನ್ನು ಖಂಡಿಸಬೇಕು. ಅವರು ಕ್ಷಮೆ ಕೇಳುವಂತೆ ಮಾಡಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದರು.

ವೇದಿಕೆಯ ಜಿಲ್ಲಾಧ್ಯಕ್ಷ ಮಂಜುನಾಥಚಾರಿ, ಪದಾಧಿಕಾರಿಗಳಾದ ರಂಗಸ್ವಾಮಿ, ವೆಂಕಟೇಶ್, ಗಿರೀಶ್ ಚಾರಿ, ವೀರಭದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.