ADVERTISEMENT

ಸಂಸದರ ರಾಜೀನಾಮೆಗೆ ಬಿಎಸ್‌ಪಿ ಒತ್ತಾಯ

ಬರ ಪರಿಹಾರ ನೀಡಲು ನಿರ್ಲಕ್ಷ್ಯ, ಕೇಂದ್ರದ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2019, 15:25 IST
Last Updated 5 ಅಕ್ಟೋಬರ್ 2019, 15:25 IST
ರಾಜ್ಯದ ಬಿಜೆಪಿ ಸಂಸದರ ರಾಜೀನಾಮೆಗೆ ಒತ್ತಾಯಿಸಿ ಬಿಎಸ್‌ಪಿ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು
ರಾಜ್ಯದ ಬಿಜೆಪಿ ಸಂಸದರ ರಾಜೀನಾಮೆಗೆ ಒತ್ತಾಯಿಸಿ ಬಿಎಸ್‌ಪಿ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು   

ಚಾಮರಾಜನಗರ: ಕೇಂದ್ರದಿಂದ ನೆರೆ ಪರಿಹಾರ ಕೊಡಿಸಲುವಿಫಲವಾಗಿರುವ ರಾಜ್ಯದ 25 ಬಿಜೆಪಿ ಸಂಸದರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಪದಾಧಿಕಾರಿಗಳು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಶ್ರೀಚಾಮರಾಜೇಶ್ವರ ಉದ್ಯಾನದ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ‌ದರು. ನಂತರಶಿರಸ್ತೇದಾರ ಅನೂಷ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಮೆರವಣಿಗೆ ಉದ್ದಕ್ಕೂ ಹಾಗೂ ಪ್ರತಿಭಟನೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಮಾತನಾಡಿ, ‘ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ’ ಎಂದು ಆರೋಪಿಸಿದರು.

‘ಬಿಜೆಪಿಯಿಂದ ಆಯ್ಕೆಯಾಗಿರುವ 25 ಬಿಜೆಪಿ ಸಂಸದರು ನೆರೆ ಪರಿಹಾರ ಕೊಡಿಸುವಲ್ಲಿ ಅಸಮರ್ಥರಾಗಿದ್ದಾರೆ. ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ರಾಜ್ಯದ ಖಜಾನೆಯಲ್ಲಿ ಹಣವಿಲ್ಲ ಎಂದು ಹೇಳುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

ಯಡಿಯೂರಪ್ಪ ಅವರು ಖಜಾನೆ ಖಾಲಿಯಾಗಿದೆ ಎಂದು ಹೇಳುತ್ತಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ತಕ್ಷಣವೇ ಈ ವಿಷಯಕ್ಕೆ ಸಂಬಂಧಿಸಿದಂತೆ ಶ್ವೇತ ಪತ್ರ ಹೊರಡಿಸಬೇಕು. ಸಂತ್ರಸ್ತರಿಗೆ ಪರಿಹಾರ ವಿತರಣೆ ಮಾಡದಿದ್ದರೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ರಾಜ್ಯದಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು’ ಎಚ್ಚರಿಸಿದರು.

ವಕೀಲರಾದ ರಾಜೇಂದ್ರ ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

ಬಿಎಸ್‌ಪಿ ರಾಜ್ಯ ಕಾರ್ಯದರ್ಶಿಪಂಚಾಕ್ಷರಿ, ಮುಖಂಡರಾದ ಬ.ಮ.ಕೃಷ್ಣಮೂರ್ತಿ, ಎನ್.ನಾಗಯ್ಯ, ಬಸವಣ್ಣ ಬ್ಯಾಡಮೂಡ್ಲು, ಎಸ್.ಪಿ.ಮಹೇಶ್, ರಾಜಶೇಖರ್ ಕೊಳ್ಳೇಗಾಲ, ಮಲ್ಲುರಾಜು, ಹನುಮಂತು, ರಾಜೇಶ್, ಸಿದ್ದರಾಜು, ರವಿ, ರಾಜೇಂದ್ರ ಇತರರು ಭಾಗವಹಿಸಿದ್ದರು.

‘₹ 10 ಸಾವಿರ ಕೋಟಿ ನೀಡಲಿ’
‘ನೆರೆಯಿಂದ ₹ 38 ಸಾವಿರ ಕೋಟಿ ನಷ್ಟವಾಗಿದೆ ಎಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ಸಲ್ಲಿಸಿದೆ. ಎರಡು ತಿಂಗಳ ನಂತರ ₹ 1,200 ಕೋಟಿ ಮಧ್ಯಂತರ ಪರಿಹಾರವನ್ನು ಅದು ಘೋಷಿಸಿದೆ. ಇಷ್ಟು ಹಣದಿಂದ ಯಾವುದೇ ಪರಿಹಾರ ಕಾಮಗಾರಿ ಕೈಗೊಳ್ಳಲು ಸಾಧ್ಯವಿಲ್ಲ. ಕನಿಷ್ಠ ₹ 10 ಸಾವಿರ ಕೋಟಿಯಷ್ಟು ಸರ್ಕಾರ ತಕ್ಷಣ ಕೊಡಬೇಕು’ ಎಂದು ಅರಕಲವಾಡಿ ನಾಗೇಂದ್ರ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.