ADVERTISEMENT

ಚಾಮರಾಜನಗರ: ರಾಯಚೂರು ನ್ಯಾಯಾಧೀಶರ ವಜಾಕ್ಕೆ ಆಗ್ರಹಿಸಿ ಪ್ರತಿಭಟನಾ ರ‍್ಯಾಲಿ

ಗಣರಾಜ್ಯೋತ್ಸವದಂದು ಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಿದ ಆರೋಪ; ಆಕ್ರೋಶ

​ಪ್ರಜಾವಾಣಿ ವಾರ್ತೆ
Published 31 ಜನವರಿ 2022, 12:27 IST
Last Updated 31 ಜನವರಿ 2022, 12:27 IST
ಗಣರಾಜ್ಯೋತ್ಸವ ದಿನದಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರವನ್ನು ತೆಗೆಸಿ ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿರುವ ರಾಯಚೂರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಚಾಮರಾಜನಗರದಲ್ಲಿ ಸೋಮವಾರ ಬೃಹತ್‌ ಪ್ರತಿಭಟನಾ ರ‍್ಯಾಲಿ ನಡೆಯಿತು
ಗಣರಾಜ್ಯೋತ್ಸವ ದಿನದಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರವನ್ನು ತೆಗೆಸಿ ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿರುವ ರಾಯಚೂರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಚಾಮರಾಜನಗರದಲ್ಲಿ ಸೋಮವಾರ ಬೃಹತ್‌ ಪ್ರತಿಭಟನಾ ರ‍್ಯಾಲಿ ನಡೆಯಿತು   

ಚಾಮರಾಜನಗರ: ’ಗಣರಾಜ್ಯೋತ್ಸವ ದಿನದಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರವನ್ನು ತೆಗೆಸಿ ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿರುವ ರಾಯಚೂರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು‘ ಎಂದು ಆಗ್ರಹಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದಲ್ಲಿ ಸೋಮವಾರ ಬೃಹತ್‌ ಪ್ರತಿಭಟನಾ ರ‍್ಯಾಲಿ ನಡೆಯಿತು.

ಜಿಲ್ಲೆಯ 25ಕ್ಕೂ ಹೆಚ್ಚು ಸಂಘಟನೆಗಳ ನೂರಾರು ಕಾರ್ಯಕರ್ತರು ರ‍್ಯಾಲಿಯಲ್ಲಿ ಭಾಗವಹಿಸಿ, ನ್ಯಾಯಾಧೀಶರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ’ನ್ಯಾಯಾಧೀಶರು ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿದ್ದರೂ ಸರ್ಕಾರ ಹಾಗೂ ಹೈಕೋರ್ಟ್‌ ಯಾವ ಕ್ರಮವನ್ನೂ ಕೈಗೊಂಡಿಲ್ಲ‘ ಎಂದು ಆರೋಪಿಸಿದರು.

ನಗರದ ಕರಿನಂಜಪುರ ರಸ್ತೆಯಲ್ಲಿರುವ ಅಂಬೇಡ್ಕರ್‌ ಭವನದಿಂದ ಆರಂಭಗೊಂಡ ಪ್ರತಿಭಟನಾ ರ‍್ಯಾಲಿಯು ಸತ್ಯಮಂಗಲ ರಸ್ತೆ, ದೊಡ್ಡಂಗಡಿ, ಚಿಕ್ಕಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಡಿವಿಯೇಷನ್ ರಸ್ತೆ, ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆಯ ಮೂಲಕ ಸಾಗಿ ಜಿಲ್ಲಾಡಳಿತ ಭವನದಲ್ಲಿ ಮುಕ್ತಾಯಗೊಂಡಿತು.

ADVERTISEMENT

ಭವನದ ಮುಂಭಾಗ ಧರಣಿ ಕುಳಿತು ನ್ಯಾಯಾಧೀಶರ ವರ್ತನೆಯನ್ನು ಖಂಡಿಸಿದರು. ಮಲ್ಲಿಕಾರ್ಜುನ ಗೌಡ ಅವರನ್ನು ಹುದ್ದೆಯಿಂದ ವಜಾ ಮಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ದೇಶದ್ರೋಹದ ಅಡಿಯಲ್ಲಿ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಕಾರರನ್ನು ಉದ್ದೇಶಿಸಿ ಮೈಸೂರಿನ ಉರಿಲಿಂಗಿಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಸಿ.ಎಂ.ಕೃಷ್ಣಮೂರ್ತಿ, ದಲಿತ ಸಂಘರ್ಷ ಸಮಿತಿಯ ಕೆ.ಎಂ.ನಾಗರಾಜು ಸೇರಿದಂತೆ ಹಲವು ಮುಖಂಡರು ಮಾತನಾಡಿದರು. ನಂತರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

’ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಇದೇ 26ರಂದು ನಡೆದ ಗಣರಾಜ್ಯೋತ್ಸವದ ದಿನದಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ’ನನ್ನ ಅಪ್ಪಣೆ ಇಲ್ಲದೆ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಡಲಾಗಿದೆ. ಅವರ ಭಾವಚಿತ್ರವನ್ನು ತೆಗೆದರೆ ಮಾತ್ರ ಧ್ವಜಾರೋಹಣ ಮಾಡುತ್ತೇನೆ. ಇಲ್ಲವಾದರೆ ಬರುವುದಿಲ್ಲ‘ ಎಂದು ಉದ್ಧಟತನದಿಂದ ವರ್ತಿಸಿ ಸಂವಿಧಾನ ಮತ್ತು ಡಾ.ಬಿ.ಆರ್.ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ್ದು, ಇದು ಅಕ್ಷಮ್ಯ‘ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

’ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಎಲ್ಲ ನ್ಯಾಯಾಲಯದಲ್ಲಿ ಅಳವಡಿಸುವಂತೆ ಹೈಕೋರ್ಟ್‌ 2011ರ ಜೂನ್‌ 1ರಂದು ಆದೇಶ ಮಾಡಿದೆ. ರಾಜ್ಯ ಸರ್ಕಾರ ಕೂಡ 202ರ ಜನವರಿ 25ರಂದು ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜುಗಳು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸುತ್ತೋಲೆ ಹೊರಡಿಸಿದೆ. ಹಾಗಿದ್ದರೂ, ಸಂವಿಧಾನ ಅರಿವಿಲ್ಲದ ಪೂರ್ವಗ್ರಹ ಪೀಡಿತ ಕೊಳಕು ಜಾತಿವಾದಿ ಮನಸ್ಸಿನ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಸರ್ಕಾರದ ಆದೇಶದ ವಿರುದ್ಧ ನಡೆದುಕೊಳ್ಳುವುದರ ಮೂಲಕ ಕರ್ತವ್ಯಲೋಪ ಎಸಗಿದ್ದಾರೆ‘ ಎಂದು ಆರೋಪಿಸಿದರು.

’ಡಾ.ಬಿ.ಆರ್.ಅಂಬೇಡ್ಕರ್‌ ಅವರು ರಚಿಸಿರುವ ಭಾರತೀಯ ಸಂವಿಧಾನದ ಪೀಠಿಕೆಯನ್ನು ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಸಾರ್ವಜನಿಕರಿಗೆ ಅರ್ಥವಾಗುವ ಹಾಗೆ ಕನ್ನಡಲ್ಲಿ ಬರೆದು, ಅಂಬೇಡ್ಕರ್‌ ಅವರ ಭಾವಚಿತ್ರ ಸಹಿತ ದೊಡ್ಡದಾಗಿ ಹೋರ್ಡಿಂಗ್‌ ಹಾಕಬೇಕು. ಸರ್ಕಾರದ ಸ್ವಾಮ್ಯದ ಒಳಪಡುವ ಎಲ್ಲ ಕಚೇರಿಗಳು, ಬ್ಯಾಂಕ್‌, ಶಾಲಾ ಕಾಲೇಜುಗಳು ಹಾಗೂ ಖಾಸಗಿ ಸಂಸ್ಥೆಗಳಲ್ಲಿಯೂ ಸರ್ಕಾರ ನಿಗದಿಪಡಿಸಿದ ಅಳತೆಯಲ್ಲಿಯೇ ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕು. ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ, ಎಲ್ಲ ಸಾರ್ವಜನಿಕ ಸಭೆಗಳಲ್ಲಿ ಕಡ್ಡಾಯವಾಗಿ ಅಂಬೇಡ್ಕರ್‌ ಅವರ ಭಾವಚಿತ್ರ ಇಟ್ಟು ಗೌರವಿಸಬೇಕು. ಏಪ್ರಿಲ್‌ 14ರಂದು ಯಾವುದೇ ಸಬೂಬು ಹೇಳದೆ ಕಡ್ಡಾಯವಾಗಿ ಅಂಬೇಡ್ಕರ್‌ ಅವರ ಜಯಂತಿಯನ್ನು ಅದ್ಧೂರಿಯಾಗಿ ರಾಜ್ಯದಾದ್ಯಂತ ಆಚರಿಸಬೇಕು‘ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ವಿವಿಧ ಸಂಘಟನೆಗಳ ಮುಖಂಡರಾದ ರಾಜಶೇಖರ್, ಅಣಗಳ್ಳಿ ಬಸವರಾಜು, ಎ.ಆರ್.ಬಾಲರಾಜ್,ಯರಿಯೂರು ರಾಜಣ್ಣ, ಜಿ.ಎಂ.ಗಾಡ್ಕರ್, ಅರಕಲವಾಡಿ ನಾಗೇಂದ್ರ, ಎನ್.ನಾಗಯ್ಯ, ಬಸವನಪುರ ರಾಜಶೇಖರ್, ಉಮೇಶ್, ರಾಜಶೇಖರ್, ಗಣೇಶ್ ಪ್ರಸಾದ್, ನಲ್ಲೂರುಮಹದೇವಸ್ವಾಮಿ,ಸಿಕೆ.ಮಂಜುನಾಥ್‌, ನಿಜಧ್ವನಿಗೋವಿಂದರಾಜು, ಸಿ.ಎಂ.ನರಸಿಂಹಮೂರ್ತಿ, ಬ್ಯಾಡಮೂಡ್ಲು ಬಸವಣ್ಣ, ಹಲವು ವಕೀಲರು ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.