
ಚಾಮರಾಜನಗರ: ಜಿಲ್ಲೆಯಾದ್ಯಂತ ಶನಿವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷೆ ಬರೆದರು.ಕನ್ನಡ ವಿಷಯದಲ್ಲಿ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದ 6,293 ವಿದ್ಯಾರ್ಥಿಗಳ ಪೈಕಿ 6,173 ವಿದ್ಯಾರ್ಥಿಗಳು ಹಾಜರಾಗಿದ್ದರು. 120 ವಿದ್ಯಾರ್ಥಿಗಳು ಗೈರಾಗಿದ್ದರು.
ನಿಗದಿತ ಸಮಯದಂತೆ ಪರೀಕ್ಷೆ ಆರಂಭವಾಗಿದ್ದು ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ, ಸುಸೂತ್ರವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಭೇಟಿ: ನಗರದ ಜೆ.ಎಸ್.ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶ್ರೀರೂಪಾ ಭೇಟಿ ನೀಡಿ ಅಧಿಕಾರಿಗಳು ತೆಗೆದುಕೊಂಡಿರುವ ಕ್ರಮಗಳನ್ನು ಪರಿಶೀಲಿಸಿದರು. ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿಗಳ ಮಾಹಿತಿ ಪಡೆದ ಜಿಲ್ಲಾಧಿಕಾರಿ ಪರೀಕ್ಷಾ ಕಾರ್ಯಕ್ಕೆ ನಿಯೋಜಿತಗೊಂಡಿರುವ ಸಿಬ್ಬಂದಿ ಹಾಗೂ ಅಧಿಕಾರಿಗಳ ಹಾಜರಾತಿ ಪರಿಶೀಲಿಸಿದರು.
ಪರೀಕ್ಷಾ ಕೇಂದ್ರದೊಳಗೆ ಕುಡಿಯುವ ನೀರು ಸೇರಿದಂತೆ ಸೌಲಭ್ಯಗಳನ್ನು ಪರಿಶೀಲಿಸಿದ ಅವರು, ಸುಗಮವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕುಡಿಯುವ ನೀರು, ಸ್ವಚ್ಛತೆಗೆ ಒತ್ತು ನೀಡಬೇಕು, ಶೌಚಾಲಯಗಳು ನಿರ್ವಹಣೆ ಸಮರ್ಪಕವಾಗಿರಬೇಕು ಎಂದು ಕಾಲೇಜು ಸಿಬ್ಬಂದಿಗೆ ಸೂಚನೆ ನೀಡಿದರು.
ಪರೀಕ್ಷಾ ಅಕ್ರಮಗಳ ತಡೆಗೆ ಪರೀಕ್ಷಾ ಕೇಂದ್ರದೊಳಗೆ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆಯ ಬಗ್ಗೆ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಸಿಬ್ಬಂದಿ ನಿಯೋಜನೆಯ ಬಗ್ಗೆಯೂ ಪರಿಶೀಲಿಸಿ ವಿವರ ಪಡೆದುಕೊಂಡರು.
ವೆಬ್ ಕಾಸ್ಟಿಂಗ್ ಪರಿಶೀಲನೆ: ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳಲ್ಲಿ ಚಿತ್ರೀಕರಣವಾಗುವ ದೃಶ್ಯಾವಳಿಗಳನ್ನು ನೇರವಾಗಿ ವೆಬ್ ಕಾಸ್ಟಿಂಗ್ ಮೂಲಕ ವೀಕ್ಷಿಸಲು ಅನುವಾಗುವಂತೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದ್ದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ವೆಬ್ ಕಾಸ್ಟಿಂಗ್ ಕಾರ್ಯವೈಖರಿಯನ್ನು ವೀಕ್ಷಿಸಿದರು.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಹಾಗೂ ಹೆಚ್ಚುವರಿ ಬಸ್‌ಗಳನ್ನು ಬಿಡಲಾಗಿತ್ತು. ಅಹಿತಕಗಳ ಘಟನೆಗಳು ನಡೆಯದಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಪುಟ್ಟಗೌರಮ್ಮ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಜೆ.ಎಸ್.ಎಸ್ ಮಹಿಳಾ ಪದವಿಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳಿಗೆ ಭೇಟಿನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.