ADVERTISEMENT

ಚಾಮರಾಜನಗರ ವೈದ್ಯಕೀಯ ಕಾಲೇಜಿನಲ್ಲಿ ರ‍್ಯಾಗಿಂಗ್‌: ದೂರು ದಾಖಲು, ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2021, 11:50 IST
Last Updated 30 ಮಾರ್ಚ್ 2021, 11:50 IST
ಚಾಮರಾಜನಗರ ವೈದ್ಯಕೀಯ ಕಾಲೇಜಿನ ನೋಟ
ಚಾಮರಾಜನಗರ ವೈದ್ಯಕೀಯ ಕಾಲೇಜಿನ ನೋಟ   

ಚಾಮರಾಜನಗರ: ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯೊಬ್ಬನಿಗೆ ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳು ರ‍್ಯಾಗಿಂಗ್‌ ಮಾಡಿರುವ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿಲ್ಲ. ರ‍್ಯಾಗಿಂಗ್‌ ಮಾಡಿರುವ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿರುವ ಪೊಲೀಸರು ಅವರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡಿದ್ದಾರೆ. ವೈದ್ಯಕೀಯ ಕಾಲೇಜಿನಲ್ಲಿ ಡೀನ್‌ ಅವರು ಹಿರಿಯ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಅನಿತಾ ಬಿ ಹದ್ದಣ್ಣವರ್‌ ಅವರು ಮಂಗಳವಾರ ಕಾಲೇಜಿಗೆ ಭೇಟಿ ನೀಡಿ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ್ದಾರೆ.

ರ‍್ಯಾಗಿಂಗ್‌ ಮಾಡಿರುವ ಏಳು ವಿದ್ಯಾರ್ಥಿಗಳ ಪೋಷಕರನ್ನು ಕಾಲೇಜಿಗೆ ಬರಲು ಹೇಳಿರುವ ಆಡಳಿತ ಮಂಡಳಿ, ಅವರ ಎದುರು ವಿದ್ಯಾರ್ಥಿಗಳಿಗೆ ಅಂತಿಮ ಎಚ್ಚರಿಕೆ ನೀಡಲು ನಿರ್ಧರಿಸಿದೆ.

ADVERTISEMENT

ಕಾಲೇಜಿನ ದ್ವಿತೀಯ ಹಾಗೂ ತೃತೀಯ ವರ್ಷಗಳ ಏಳು ಮಂದಿ ವಿದ್ಯಾರ್ಥಿಗಳು ತುಮಕೂರು ಮೂಲದ ಪ್ರಥಮ ವರ್ಷ ವಿದ್ಯಾರ್ಥಿಯೊಬ್ಬನಿಗೆ ರ‍್ಯಾಗಿಂಗ್‌ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ರಾತ್ರಿ ಹಾಸ್ಟೆಲ್‌ ಕೊಠಡಿಗೆ ಬಂದು ಕಪಾಳಕ್ಕೆ ಹೊಡೆಯುವುದು, ಬಟ್ಟೆ ಬಿಚ್ಚಿಸುವುದು, ಕುರ್ಚಿಯಲ್ಲಿ ಕುಳಿತ ಭಂಗಿಯನ್ನು ಕೂರಿಸುವುದು ಸೇರಿದಂತೆ ವಿವಿಧ ರೀತಿಯಲ್ಲಿ ರ‍್ಯಾಗಿಂಗ್‌ ಮಾಡುತ್ತಿದ್ದರು ಎಂದು ಗೊತ್ತಾಗಿದೆ. ಮೂರ್ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದೆ.

ವಿದ್ಯಾರ್ಥಿಯು ಪೋಷಕರಿಗೆ ಕರೆ ಮಾಡಿ ನಡೆದ ವಿಷಯ ತಿಳಿಸಿ, ಕಾಲೇಜು ಬಿಡುವುದಾಗಿ ಹೇಳಿದ್ದ. ತಕ್ಷಣವೇ ನಗರಕ್ಕೆ ಬಂದಿದ್ದ ವಿದ್ಯಾರ್ಥಿಯ ತಂದೆ ಡೀನ್‌ ಅವರಿಗೆ ದೂರು ನೀಡುವುದರ ಜೊತೆಗೆ ಗ್ರಾಮಾಂತರ ಠಾಣೆಗೂ ದೂರು ನೀಡಿದ್ದರು.

ಭಾನುವಾರ ರಾತ್ರಿ ರ‍್ಯಾಗಿಂಗ್‌ ಮಾಡಿದ ವಿದ್ಯಾರ್ಥಿಗಳನ್ನು ಪೊಲೀಸರು ಪ್ರಕರಣ ಸಂಬಂಧ ವಿಚಾರಣೆ ನಡೆಸಿದ್ದಾರೆ.

ಪೋಷಕರಿಗೆ ಬುಲಾವ್‌

‘ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್‌ ದಾಖಲು ಮಾಡಿಲ್ಲ. ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ. ನಾನು ಕೂಡ ಕಾಲೇಜಿಗೆ ಭೇಟಿ ನೀಡಿ, ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಲ್ಲಿ ರ‍್ಯಾಗಿಂಗ್‌ ವಿರುದ್ಧ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಿದ್ದೇನೆ’ ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಅನಿತಾ ಬಿ.ಹದ್ದಣ್ಣವರ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಘಟನೆ ಸಂಬಂಧ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿರುವ ವೈದ್ಯಕೀಯ ಕಾಲೇಜಿನ ಡೀನ್‌ ಡಾ.ಸಂಜೀವ್‌ ಅವರು, ‘ದೂರು ಬಂದ ತಕ್ಷಣ ಕ್ರಮ ಕೈಗೊಂಡಿದ್ದೇವೆ. ಈಗಾಗಲೇ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದೇವೆ. ಏಳು ವಿದ್ಯಾರ್ಥಿಗಳ ಪೋಷಕರನ್ನೂ ಬರ ಹೇಳಿದ್ದೇವೆ. ಅವರೊಂದಿಗೆ ಸಭೆ ನಡೆಸಿ ಮತ್ತೆ ಎಚ್ಚರಿಕೆ ನೀಡುತ್ತೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.