ಚಾಮರಾಜನಗರ: ಲೋಕಸಭಾ ಚುನಾವಣಾ ಅಕ್ರಮಗಳ ವಿರುದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಆ.5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಗೆ ಜಿಲ್ಲೆಯ 8 ಬ್ಲಾಕ್‌ಗಳಿಂದ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಪೂರ್ವಭಾವಿಯಲ್ಲಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ರಾಹುಲ್ ಗಾಂಧಿ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತಿದ್ದಾರೆ. ಇದರ ಭಾಗವಾಗಿ 5ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು ಅಂದು ಚುನಾವಣಾ ಅಕ್ರಮಗಳ ದಾಖಲೆಗಳನ್ನು ರಾಹುಲ್ ಗಾಂಧಿ ಬಿಡುಗಡೆ ಮಾಡಲಿದ್ದಾರೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜ್ಯದ ಸಚಿವರು, ಶಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ಜಿಲ್ಲಾ ಘಟಕದ ಎಲ್ಲ ಪದಾಧಿಕಾರಿಗಳು, ಜಿಲ್ಲಾ ಘಟಕದ ಅಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿ, ರಾಹುಲ್ ಗಾಂಧಿ ಅವರ ಹೋರಾಟವನ್ನು ಬಲಪಡಿಸಬೇಕು.
ಜಿಲ್ಲೆಯ ವೀಕ್ಷಕ ಎಚ್.ಸಿ.ಬಸವರಾಜು ಮಾತನಾಡಿ, ಬಿಜೆಪಿ ಸರ್ಕಾರ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಚುನಾವಣೆ ಎದುರಿಸಿದೆ. ಈಗಾಗಲೇ ರಾಹುಲ್ ಗಾಂಧಿ ಅಕ್ರಮಗಳ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಕರ್ನಾಟಕ ವ್ಯಾಪ್ತಿಯ ಲೋಕಸಭಾ ಕ್ಷೇತ್ರಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಬೆಂಗಳೂರಿನಲ್ಲಿ ರಾಹುಲ್ ಪ್ರತಿಭಟನೆ ಮಾಡುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಮುಖಂಡರು ಭಾಗವಹಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಆರ್. ಮಹದೇವ್, ಚಿಕ್ಕಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕಲವಾಡಿ ಗುರುಸ್ವಾಮಿ, ತೋಟೇಶ್, ಹೊಂಗನೂರು ಚಂದ್ರು, ಮಹಮದ್ ಅಸ್ಗರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎಸ್.ನಾಗರತ್ನ ಕೆಂಗಾಕಿ, ಮಾಜಿ ಕಾಡಾ ಅಧ್ಯಕ್ಷ ಎಸ್. ನಂಜಪ್ಪ, ಮುಖಂಡರಾದ ಎಸ್. ಸೋಮನಾಯಕ, ಸೋಮೇಶ್ವರ, ಶಿವಮೂರ್ತಿ, ಸುಹೇಲ್ ಆಲಿ ಖಾನ್, ಅಯ್ಯನಪುರ ಶಿವಕುಮಾರ್, ಸಿ.ಎ. ಮಹದೇವಶೆಟ್ಟಿ, ಜಿಲ್ಲಾ ವಕ್ತಾರ ಕೆರೆಹಳ್ಳಿ ನವೀನ್, ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.