ADVERTISEMENT

ಗೋಹತ್ಯೆ ನಿಷೇಧ: ಸುಗ್ರೀವಾಜ್ಞೆಗೆ ಸಹಿ ಹಾಕದಂತೆ ಎಸ್‌ಡಿಪಿಐ ಒತ್ತಾಯ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2020, 15:53 IST
Last Updated 29 ಡಿಸೆಂಬರ್ 2020, 15:53 IST
ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಬಾರದು ಎಂದು ಒತ್ತಾಯಿಸಿ ಎಸ್‌ಡಿಪಿಐ ಕಾರ್ಯಕರ್ತರು ಮಂಗಳವಾರ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು
ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಬಾರದು ಎಂದು ಒತ್ತಾಯಿಸಿ ಎಸ್‌ಡಿಪಿಐ ಕಾರ್ಯಕರ್ತರು ಮಂಗಳವಾರ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು   

ಚಾಮರಾಜನಗರ: ಗೋಹತ್ಯೆ ನಿಷೇಧ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ರಾಜ್ಯ ಬಿಜೆಪಿ ಸರ್ಕಾರದ ಕ್ರಮವನ್ನು ಖಂಡಿಸಿ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿರುವ ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ (ಎಸ್‌ಡಿಪಿಐ) ಕಾರ್ಯಕರ್ತರು, ಸುಗ್ರೀವಾಜ್ಞೆಗೆ ಸಹಿ ಹಾಕಬಾರದು ಎಂದು ರಾಜ್ಯಪಾಲರನ್ನು ಒತ್ತಾಯಿಸಿದರು.

ಡೀವಿಯೇಷನ್‌ ರಸ್ತೆಯಲ್ಲಿರುವ ಲಾರಿ ನಿಲ್ದಾಣದಲ್ಲಿಸೇರಿದ ಎಸ್‌ಡಿಪಿಐ ಜಿಲ್ಲಾ ಘಟಕದ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

‘ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಿಕೊಂಡಿರುವ ಬಿಜೆಪಿಗೆ, ವಿಧಾನಪರಿಷತ್ತಿನಲ್ಲಿ ಬಹುಮತ ಇಲ್ಲದೇ ಇರುವುದರಿಂದ ಹಿಂಬಾಗಿಲ ಮೂಲಕ, ಪ್ರಜಾತಂತ್ರ ವಿರೋಧಿ ಮಾರ್ಗವನ್ನು ಅನುಸರಿಸಿ ಸುಗ್ರೀವಾಜ್ಞೆ ತರಲು ಸರ್ಕಾರ ತರಾತುರಿ ಮಾಡುತ್ತಿದೆ. ರಾಜ್ಯಪಾಲರು ಈ ಸುಗ್ರೀವಾಜ್ಞೆಗೆ ಸಹಿ ಹಾಕಬಾರದು’ ಎಂದು ಒತ್ತಾಯಿಸಿದರು.

ADVERTISEMENT

‘ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದರೆ, ರೈತರಿಗೆ, ಚರ್ಮೋದ್ಯಮದವರು, ಮಾಂಸ ವ್ಯಾಪಾರಸ್ಥರು, ಮಾಂಸ ರಫ್ತುದಾರರು, ಮೃಗಾಲಯದ ಪ್ರಾಣಿಗಳಿಗೆ ಮಾಂಸ ಪೂರೈಸುವವರು, ಅಪೌಷ್ಟಿಕತೆಯಿಂದ ಬಳಲುತ್ತಿರುವವರು, ಕೂಲಿ ಕಾರ್ಮಿಕರು, ಬೀದಿ ವ್ಯಾಪಾರಿಗಳು, ಬರಪೀಡಿತ ಪ್ರದೇಶದವರು, ಪ್ರವಾಸಿಗರು ಸೇರಿದಂತೆ ಸಮಾಜದ ವಿವಿಧ ವರ್ಗದವರಿಗೆ ತೊಂದರೆಯಾಗುತ್ತದೆ. ರಾಜ್ಯದ ಮಾಂಸ ಹಾಗೂ ಚರ್ಮ ವ್ಯಾಪಾರಗಳು ಕುಂಠಿತವಾಗುತ್ತವೆ. ಈ ಉದ್ಯಮಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ನೌಕರರು ನಿರುದ್ಯೋಗಿಗಳಾಗುತ್ತಾರೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಈ ಸುಗ್ರೀವಾಜ್ಞೆ ಜನ ವಿರೋಧಿಯಾಗಿದ್ದು, ನಾಗರಿಕರ ಆಹಾರದ ಹಕ್ಕು ಹಾಗೂ ಮಾನವ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ದೊಡ್ಡ ಹಾಗೂ ಪ್ರಾಯವಾದ ಜಾನುವಾರುಗಳನ್ನು ಸಾಕುವುದು ರೈತರಿಗೆ ಹೊರೆಯಾಗಿ ಪರಿಣಮಿಸಲಿದೆ. ಹೈನುಗಾರಿಕೆಯಲ್ಲಿ ತೊಡಗಿಕೊಂಡ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕವಾಗಿ ನಷ್ಟವಾಗಲಿದೆ. ಹಾಗಾಗಿ, ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಬಾರದು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಬಂದ ತಹಶೀಲ್ದಾರ್‌ ಚಿದಾನಂದ ಗುರುಸ್ವಾಮಿ ಅವರ ಮೂಲಕ ರಾಜ್ಯಪಾಲರಿಗೆ ತಮ್ಮ ಮನವಿ ಪತ್ರ ಸಲ್ಲಿಸಿದರು.

ದಲಿತ ಸಂಘರ್ಷ ಸಮಿತಿ, ಮಾಂಸ ಉದ್ಯಮದ ಕಾರ್ಮಿಕರು, ವ್ಯಾಪಾರಸ್ಥರು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

ಎಸ್‌ಡಿಪಿಐ ಜಿಲ್ಲಾ ಘಟಕದ ಕಾರ್ಯದರ್ಶಿ ಜಬೀ ನೂರ್‌, ಪ್ರಧಾನ ಕಾರ್ಯದರ್ಶಿ ಎಂ.ಮಹೇಶ್‌, ಉಪಾಧ್ಯಕ್ಷ ಸಮೀವುಲ್ಲಾ, ರಾಜ್ಯ ಸಮಿತಿಯ ಅಬ್ರಾರ್‌ ಅಹಮದ್‌, ಮುಖಂಡರಾದ ಕಫೀಲ್‌ ಅಹಮದ್‌, ದಲಿತ ಸಂಘಟನೆಗಳ ಮುಖಂಡರಾದ ಕೆ.ಎಂ.ನಾಗರಾಜು, ಶಿವಣ್ಣ, ಸಂಘಸೇನಾ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.