ADVERTISEMENT

ಬಾಲಕಿಗೆ ಲೈಂಗಿಕ ಕಿರುಕುಳ: ಅಪರಾಧಿಗೆ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 16:41 IST
Last Updated 3 ಸೆಪ್ಟೆಂಬರ್ 2021, 16:41 IST

ಚಾಮರಾಜನಗರ: ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಜಿಲ್ಲಾಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ಆರು ತಿಂಗಳ ಸಾಧಾರಣ ಶಿಕ್ಷೆ ವಿಧಿಸಿದೆ.

ಪ್ರಸಾದ್ ಕುಮಾರ್ ಅಲಿಯಾಸ್ ಕೆಂಚ ಶಿಕ್ಷೆಗೆ ಗುರಿಯಾದ ವ್ಯಕ್ತಿ.

2019ರ ಮೇ 27ರಂದು 16 ವರ್ಷದ ಬಾಲಕಿಯನ್ನು ಬಲವಂತವಾಗಿ ಅಪಹರಿಸಿಕೊಂಡು ನಿರ್ಮಾಣ ಹಂತದ ಮನೆಯ ಕೊಠಡಿಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಅಪಹರಣ ಹಾಗೂ ಪೋಕ್ಸೊ ಅಡಿ ದೂರು ದಾಖಲಾಗಿತ್ತು.

ADVERTISEMENT

ತನಿಖೆ ನಡೆಸಿದ್ದ ಪೊಲೀಸರು, ಆರೋಪಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು.ಆರೋಪಿ ಕೃತ್ಯ ಎಸಗಿರುವುದು ಸಾಬೀತಾದ ಕಾರಣ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಸದಾಶಿವ ಎಸ್‌.ಸುಲ್ತಾನ್‌ಪುರಿ ಅಪರಾಧಿಗೆ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 363 (ಅಪಹರಣ) ಅಡಿಯಲ್ಲಿ ಆರು ತಿಂಗಳ ಸಾದಾ ಸಜೆ, ₹ 10 ಸಾವಿರ ದಂಡ ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್‌ 12ರ ಅನುಸಾರ ಆರು ತಿಂಗಳ ಸಾದಾ ಸಜೆ ಹಾಗೂ ₹ 10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ದಂಡದ ಹಣವನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡುವಂತೆಯೂ ಅವರು ಆದೇಶದಲ್ಲಿ ಹೇಳಿದ್ದಾರೆ.

ಪ್ರಾಸಿಕ್ಯೂಷನ್‌ ಪರವಾಗಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಕೆ.ಯೋಗೇಶ್ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.