ADVERTISEMENT

ಅಹಿಂದ ಮುಖವಾಡ ಧರಿಸಿ ಸಿದ್ದರಾಮಯ್ಯ ರಾಜಕಾರಣ: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2022, 11:49 IST
Last Updated 27 ಅಕ್ಟೋಬರ್ 2022, 11:49 IST
ಶ್ರೀರಾಮುಲು
ಶ್ರೀರಾಮುಲು   

ಚಾಮರಾಜನಗರ: ‘ಹಿಂದುಳಿದ ಜಾತಿಗಳನ್ನು ಮತಬ್ಯಾಂಕ್‌ ಮಾಡಿಕೊಂಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೇರೆಯವರು ಕಟ್ಟಿರುವ ಗೂಡಿನಲ್ಲಿ ರಾಜಕಾರಣ ಮಾಡಿದವರು’ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಗುರುವಾರ ಆರೋಪಿಸಿದರು.

‌ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಹೆಚ್ಚಿಸಲು ಪ್ರೋತ್ಸಾಹ ಕೊಟ್ಟಿದ್ದೇವೆ ಎಂದು ಹೇಳುತ್ತಿರುವ ಸಿದ್ದರಾಮಯ್ಯ, ರಾಯಚೂರಿನಲ್ಲಿ ರಾಹುಲ್‌ ಗಾಂಧಿ ಅವರ ಜೋಡೋ ಯಾತ್ರೆ ಸಂದರ್ಭದಲ್ಲಿ ಗೊಲ್ಲರು ಹಾಗೂ ಕಾಡುಗೊಲ್ಲ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಅವರು ತಕ್ಷಣವೇ ಬೇಷರತ್‌ ಕ್ಷಮೆ ಕೇಳಬೇಕು’ ಎಂದು ಆಗ್ರಹಿಸಿದರು.

‘ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ಗೆ ಮೀಸಲಾತಿ ಹೆಚ್ಚಳ ಮಾಡಲು ಆಗಿಲ್ಲ. ಅವರಿಗೆ ಇಚ್ಛಾಶಕ್ತಿ ಇರಲಿಲ್ಲ. ಬಿಜೆಪಿಗೆ ಇಚ್ಛಾಶಕ್ತಿ ಇದ್ದುದರಿಂದ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಸುಗ್ರೀವಾಜ್ಞೆ ಮೂಲಕ ಮೀಸಲಾತಿ ಹೆಚ್ಚಳ ಜಾರಿಗೂ ತಂದಿದ್ದೇವೆ. ಸಿದ್ದರಾಮಯ್ಯ ಸರ್ಕಾರ ಜಾತಿಗಣತಿಗೆ ಸಮಿತಿ ರಚಿಸಿತ್ತು. ಆದರೆ, ವರದಿ ಅಂಗೀಕಾರ ಮಾಡಿರಲಿಲ್ಲ. ಈಗ ನಾವು ಮೀಸಲಾತಿ ಹೆಚ್ಚಳ ಮಾಡಿದ ನಂತರ ಅದರ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ’ ಎಂದು ದೂರಿದರು.

ADVERTISEMENT

‘ಸಿದ್ದರಾಮಯ್ಯ ಅವರು ಪರಮೇಶ್ವರ್‌, ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಗಿಸಿದರು. ಈಗ ಡಿ.ಕೆ.ಶಿವಕುಮಾರ್‌ ಅವರನ್ನು ಮುಗಿಸಲು ಹೊರಟಿದ್ದಾರೆ.ಅಹಿಂದದ ಮುಖವಾಡ ಇಟ್ಟುಕೊಂಡುರಾಜಕಾರಣ ಮಾಡುತ್ತಿದ್ದಾರೆ. ಡಾ.ಬಿ.ಆರ್‌.ಅಂಬೇಡ್ಕರ್‌, ಮಹರ್ಷಿ ವಾಲ್ಮೀಕಿ ಮುಂತಾದವರ ಹೆಸರು ಹೇಳಿಕೊಂಡು ಮತಬ್ಯಾಂಕ್‌ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.