
ಚಾಮರಾಜನಗರ: ನಗರದ ಮಹದೇಶ್ವರ ಬಡಾವಣೆಯಲ್ಲಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಸಮೀಪ ಸಮಾಜಕಲ್ಯಾಣ ಇಲಾಖೆಯ 1.66 ಕೋಟಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.
ಇದೇವೇಳೆ ಮಾತನಾಡಿದ ಶಾಸಕರು, ತಾಲ್ಲೂಕು ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಹಲವು ವರ್ಷಗಳಿಂದ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಸ್ವಂತ ಕಟ್ಟಡ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಲಾಗಿದೆ. ನಿರ್ಮಾಣ ಜವಾಬ್ದಾರಿ ವಹಿಸಿಕೊಂಡಿರುವ ಸಂಸ್ಎ ನಿಗಧಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಹಸ್ತಾಂತರ ಮಾಡಬೇಕು ಎಂದು ಸೂಚಿಸಿದರು.
ಇದೇವೇಳೆ ಶಾಸಕರು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿನೀಡಿ ವಿದ್ಯಾರ್ಥಿಗಳು ತಂಗುವ ಕೋಣೆ, ಊಟದ ಕೋಣೆ, ಅಡುಗೆ ಮನೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಇದೇವೇಳೆ ವಿದ್ಯಾರ್ಥಿಗಳ ಕುಂದುಕೊರತೆ ಆಲಿಸಿದರು.
ಈ ಸಂದರ್ಭ ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ನಿರ್ಮಿತಿ ಕೇಂದ್ರದ ಇಇ ಭೀಮಸಾಗರ್, ಸೋಮಶೇಖರ್, ನಟರಾಜು, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ವಾರ್ಡನ್ ರಾಜು ಇದ್ದರು.