ADVERTISEMENT

ಕುಷ್ಠರೋಗ ಮುಕ್ತ ಜಿಲ್ಲೆಗೆ ಪಣ ತೊಡಿ: ರಮೇಶ್

​ಪ್ರಜಾವಾಣಿ ವಾರ್ತೆ
Published 30 ಜನವರಿ 2023, 15:51 IST
Last Updated 30 ಜನವರಿ 2023, 15:51 IST
ಚಾಮರಾಜನಗರದಲ್ಲಿ ಸೋಮವಾರ ನಡೆದ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಜಾಥಾದಲ್ಲಿ ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌, ಡಿಎಚ್‌ಒ ಡಾ.ವಿಶ್ವೇಶ್ವರಯ್ಯ, ವಿದ್ಯಾರ್ಥಿಗಳು ಭಾಗವಹಿಸಿದ್ದರು
ಚಾಮರಾಜನಗರದಲ್ಲಿ ಸೋಮವಾರ ನಡೆದ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಜಾಥಾದಲ್ಲಿ ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌, ಡಿಎಚ್‌ಒ ಡಾ.ವಿಶ್ವೇಶ್ವರಯ್ಯ, ವಿದ್ಯಾರ್ಥಿಗಳು ಭಾಗವಹಿಸಿದ್ದರು   

ಚಾಮರಾಜನಗರ: ಜಿಲ್ಲೆಯನ್ನು ಕುಷ್ಠರೋಗ ಮುಕ್ತಗೊಳಿಸಲು ಎಲ್ಲರೂ ಪಣತೊಡಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಸೋಮವಾರ ತಿಳಿಸಿದರು.

ನಗರದ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಜಾಥಾಗೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು.

‘ಈ ಹಿಂದೆ ಬಹಳಷ್ಟು ಕುಷ್ಠರೋಗ ಪ್ರಕರಣಗಳು ಕಂಡು ಬರುತ್ತಿದ್ದವು. ಈಗ ಕಡಿಮೆಯಾಗುತ್ತಿದೆ. ಕುಷ್ಠರೋಗ ಪ್ರಕರಣಗಳು ಕಂಡು ಬಂದರೂ ನಿರ್ಮೂಲನೆಗಾಗಿ ಸರ್ಕಾರ ಅನೇಕ ಕ್ರಮಗಳನ್ನು ಅನುಸರಿಸುತ್ತಿದೆ’ ಎಂದರು.

ADVERTISEMENT

‘ಪ್ರಾಥಮಿಕ ಹಂತದಲ್ಲೇ ಕುಷ್ಠರೋಗಕ್ಕೆ ಚಿಕಿತ್ಸೆ ಪಡೆಯಲು ಮುಂದಾಗಬೇಕು. ಇದರಿಂದ ಬೇಗನೆ ಗುಣಮುಖರಾಗಲು ಸಾಧ್ಯವಾಗುತ್ತದೆ. ಕುಷ್ಠರೋಗದ ಬಗ್ಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಲು ಅಧಿಕಾರಿಗಳು ಮುಂದಾಗಬೇಕಿದೆ. ರೋಗ ಲಕ್ಷಣಗಳ ಬಗ್ಗೆ ಜನರಿಗೆ ತಿಳಿದಾಗ ರೋಗವನ್ನೂ ಸಹ ಪರಿಣಾಮಕಾರಿಯಾಗಿ ತಡೆಯಬಹುದು’ ಎಂದು ರಮೇಶ್ ತಿಳಿಸಿದರು.

ಇದೇ ವೇಳೆ ಕುಷ್ಠರೋಗ ನಿರ್ಮೂಲನಾ ಕುರಿತ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ನರ್ಸಿಂಗ್ ಶಾಲೆಯ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಜಾಥಾದಲ್ಲಿ ಪಾಲ್ಗೊಂಡರು. ಚಾಮರಾಜೇಶ್ವರ ದೇವಾಲಯದಿಂದ ಹೊರಟ ಜಾಥಾ ಜೈ ಭುವನೇಶ್ವರಿ ವೃತ್ತ, ಬಿ. ರಾಚಯ್ಯ ಜೋಡಿ ರಸ್ತೆಯ ಮೂಲಕ ಸಾಗಿ ಜಿಲ್ಲಾಡಳಿತ ಭವನದಲ್ಲಿ ಮುಕ್ತಾಯವಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಚಂದ್ರಶೇಖರ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಶ್ರೀನಿವಾಸ್, ವೈದ್ಯಾಧಿಕಾರಿ ಉಮಾರಾಣಿ, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ದೊರೆಸ್ವಾಮಿ ನಾಯಕ್, ನರ್ಸಿಂಗ್ ಸ್ಕೂಲ್ ಬೋಧಕರಾದ ಗಂಗಮ್ಮ, ಮಂಜುಳಾ, ಸುಷ್ಮಿತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.