
ಚಾಮರಾಜನಗರ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಭೂ ಸ್ವಾಧೀನ ಹಾಗೂ ಭೂಸ್ವಾಧೀನ ಜಾರಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಜ.24ರಂದು ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಜಿ.ಪ್ರಭಾವತಿ ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವ್ಯಾಜ್ಯ ಪೂರ್ವ ಪರಿಹಾರ ಕೇಂದ್ರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಪ್ರೀಂಕೋರ್ಟ್ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ವಿಶೇಷ ಲೋಕ್ ಅದಾಲತ್ ನಡೆಯುತ್ತಿದ್ದು 24ರಂದು ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಮಾತ್ರ ನಡೆಯಲಿದೆ ಎಂದು ತಿಳಿಸಿದರು.
ಇದಲ್ಲದೆ ಜಿಲ್ಲಾ ಹಾಗೂ ತಾಲ್ಲೂಕು ನ್ಯಾಯಾಲಯಗಳಲ್ಲಿ ಮೂರು ತಿಂಗಳಿಗೊಮ್ಮೆ ಮೆಗಾ ಲೋಕ್ ಅದಾಲತ್ ನಡೆಯುತ್ತಿದ್ದು ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತಿದೆ. ಪೋಷಕರು ಹಾಗೂ ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆಯಡಿ ಬಾಕಿ ಇರುವ ಹಿರಿಯ ನಾಗರಿಕರಿಗೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥಪಡಿಸಲು ನಿರ್ಧರಿಸಲಾಗಿದೆ. ಎ.ಸಿ ಹಾಗೂ ಡಿ.ಸಿ ಕೋರ್ಟ್‍ಗಳಲ್ಲಿ ಬಾಕಿ ಇರುವ ಹಿರಿಯ ನಾಗರಿಕರ ಪ್ರಕರಣಗಳನ್ನು ಇತ್ಯರ್ಥಪಡಿಸಲು ಫೆ.28ರಂದು ವಿಶೇಷ ಲೋಕ್ ಅದಾಲತ್ ಆಯೋಜಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದರು.
ಜ.2 ರಿಂದ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ 90 ದಿನಗಳ ಕಾಲ ಮಧ್ಯಸ್ಥಿಕಾ ಅಭಿಯಾನ ನಡೆಯುತ್ತಿದೆ. ಇದರಲ್ಲಿ ಕಕ್ಷಿದಾರರು, ಸಂಧಾನಕಾರರು ಪಾಲ್ಗೊಂಡಿದ್ದಾರೆ. ಮಧ್ಯಸ್ಥಿಕೆ ಅಭಿಯಾನ 3 ತಿಂಗಳು ನಡೆಯಲಿದ್ದು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಸಿ.ಡಿ.ಪ್ರಕಾಶ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಮಸಮುದ್ರ ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ ಶಿವರಾಮು ಸುದ್ದಿಗೋಷ್ಠಿಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.