ಚಾಮರಾಜನಗರ: ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ದೈಹಿಕ ಹಾಗೂ ಮಾನಸಿಕವಾಗಿ ಸದೃಢತೆ ಸಾಧಿಸಬಹುದು ಎಂದು ಚಾಮರಾಜನಗರ ವಿಶ್ವವಿದ್ಯಾಲಯದ ದೈಹಿಕ ವಿಭಾಗದ ನಿರ್ದೇಶಕ ಶಾಂತರಾಜು ಸಲಹೆ ನೀಡಿದರು.
ನಗರದ ಜೋಡಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ದೈಹಿಕ ಶಿಕ್ಷಣ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಹಾಕಿ ಮಾಂತ್ರಿಕ ಧಾನ್‌ಚಂದ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ಯುವಜನತೆ ಕ್ರೀಡೆಗಳತ್ತ ಅಭಿರುಚಿ ಬೆಳೆಸಿಕೊಳ್ಳಬೇಕು, ಕ್ರೀಡೆಗಳಲ್ಲಿ ಭಾಗವಹಿಸುವಿಕೆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದರು.
ಸರ್ಕಾರ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಕ್ರೀಡಾಪಟುಗಳು ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು, ಗ್ರಾಮೀಣ ಭಾಗದಲ್ಲಿರುವ ಪ್ರತಿಭಾವಂತರಿಗೆ ಅವಕಾಶ ಕಲ್ಪಿಸಬೇಕು ಎಂದು ಆಯೋಜಕರಿಗೆ ಸಲಹೆ ನೀಡಿದರು.
ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕಿ ಲಿಖಿತಾ ಎಸ್.ಅನುರಾಧಾ ಮಾತನಾಡಿ, ಎಲ್ಲ ಕ್ಷೇತ್ರಗಲ್ಲೂ ಮಹಿಳೆಯರು ಸಾಧನೆ ಮಾಡುತ್ತಿದ್ದು ವಿಶೇಷವಾಗಿ ಕ್ರೀಡೆಯಲ್ಲಿ ಛಾಪು ಮೂಡಿಸುತ್ತಿದ್ದಾರೆ. ಈಚೆಗೆ ನಡೆದ ಕೊಕ್ಕೊ ವಿಶ್ವಕಪ್‌ನಲ್ಲಿ ಟಿ.ನರಸೀಪುರ ತಾಲ್ಲೂಕಿನ ಪ್ರತಿಭೆ ಚೈತ್ರಾ ರಾಷ್ಟ್ರವೇ ಗಮನ ಸೆಳೆಯುವಂತ ಪ್ರದರ್ಶನ ನೀಡಿದ್ದಾರೆ. ಪ್ರತಿಭೆ ಸೂಕ್ತ ವೇದಿಕೆಯಲ್ಲಿ ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ಪ್ರಭಾರ ಪ್ರಾಂಶುಪಾಲ ಶೈಲೇಶ ಕುಮಾರ್ ಮಾತನಾಡಿ, ವಿದ್ಯಾರ್ಥಿನಿಯರು ಜಿಲ್ಲಾ ಹಾಗೂ ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು, ಗ್ರಂಥಾಲಯಗಳಲ್ಲಿ ಪುಸ್ತಕ ಹಾಗೂ ದಿನಪತ್ರಿಕೆಗಳನ್ನು ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಪತ್ರಕರ್ತ ಜಿ.ಬಂಗಾರು ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ದೀಪಾ, ಉಪನ್ಯಾಸಕ ಜಯಣ್ಣ, ಪ್ರಶಾಂತ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.