ADVERTISEMENT

ಕ್ರೀಡಾಪಟುಗಳನ್ನು ಮುಖ್ಯವಾಹಿನಿಗೆ ತರಬೇಕು: ಜಯಲಕ್ಷ್ಮಿ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2024, 13:59 IST
Last Updated 29 ಆಗಸ್ಟ್ 2024, 13:59 IST
ಕೊಳ್ಳೇಗಾಲ ನಗರದ ಶ್ರೀಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಜಯಲಕ್ಷ್ಮಿ ಮಾತನಾಡಿದರು
ಕೊಳ್ಳೇಗಾಲ ನಗರದ ಶ್ರೀಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಜಯಲಕ್ಷ್ಮಿ ಮಾತನಾಡಿದರು   

ಕೊಳ್ಳೇಗಾಲ: ಭಾರತದ ಹಾಕಿ ದಂತಕತೆ, ಶ್ರೇಷ್ಠ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಸ್ಮರಣಾರ್ಥ ಪ್ರತಿ ವರ್ಷ ಆಗಸ್ಟ್ 29ರಂದು ರಾಷ್ಟ್ರೀಯ ಕ್ರೀಡಾದಿನ ಆಚರಣೆ ಮಾಡಲಾಗುತ್ತದೆ ಎಂದು ಶ್ರೀಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಜಯಲಕ್ಷ್ಮಿ ಹೇಳಿದರು.

ನಗರದ ಶ್ರೀಮಹದೇಶ್ವರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಗುರುವಾರ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ನಂತರ ಮಾತನಾಡಿದರು.

‘ರಾಷ್ಟ್ರೀಯ ಕ್ರೀಡಾದಿನವನ್ನು ಭಾರತದಲ್ಲಿ ಮೊದಲ ಬಾರಿಗೆ 2012ರಲ್ಲಿ ಆಚರಿಸಲಾಯಿತು. ಅದೇ ವರ್ಷ ರಾಷ್ಟ್ರೀಯ ಕ್ರೀಡಾ ದಿನವನ್ನು ರಾಷ್ಟ್ರೀಯ ದಿನಗಳ ಪಟ್ಟಿಗೆ ಸೇರಿಸಲಾಯಿತು. ಮೇಜರ್ ಧ್ಯಾನ್ ಚಂದ್ ಆಗಸ್ಟ್ 29, 1905ರಲ್ಲಿ ಅಹಮದಾಬಾದ್‌ನಲ್ಲಿ ಜನಿಸಿದರು. ವಿಶ್ವಕಂಡ ಅಪರೂಪದ, ಅತ್ಯುತ್ತಮ ಹಾಕಿ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಹುಟ್ಟುಹಬ್ಬವನ್ನು ಪ್ರತಿವರ್ಷ ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತದೆ. ದೇಶದ ಯುವಕರನ್ನು ಕ್ರೀಡೆಯಲ್ಲಿ ಭಾಗವಹಿಸುವಂತೆ ಉತ್ತೇಜಿಸಲು ಮತ್ತು ಕ್ರೀಡಾಪಟುಗಳನ್ನು ಮುಖ್ಯವಾಹಿನಿಗೆ ಕರೆತರಲು ರಾಷ್ಟ್ರೀಯ ಕ್ರೀಡಾದಿನವನ್ನು ದೇಶದಾದ್ಯಂತ ಆಚರಣೆ ಮಾಡಲಾಗುತ್ತದೆ. ಕ್ರೀಡೆಗಳು ನಮ್ಮನ್ನು ನಾವು ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯವಾಗಿರುವಂತೆ ಮಾಡುತ್ತವೆ. ನಮ್ಮಲ್ಲಿರುವ ಹಿಂಜರಿಕೆಯನ್ನು ಬಿಟ್ಟು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ ಸ್ಫರ್ಧಾ ಮನೋಭಾವ ತೋರಿಸಬೇಕು’ ಎಂದರು.

ADVERTISEMENT

ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡೆಗಳನ್ನು ನಡೆಸಲಾಯಿತು. ಇದರ ಜೊತೆಗೆ ಬೋಧಕರು ಸಹ ಕ್ರೀಡೆಯಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಪ್ರೊ.ಪ್ರೇಮಕುಮಾರಿ, ಪ್ರೊ, ವೇಣುಗೋಪ್ , ಪ್ರೊ, ಪರಮೆಶ್ , ಪ್ರೊ.ಸುಂದರ ಮೂರ್ತಿ, ದೈಹಿಕ ಶಿಕ್ಷಣ ನಿರ್ದೇಶಕ ಜಯಶಂಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.