ಚಾಮರಾಜನಗರ: ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಸುಗಮ ಮತ್ತು ಪಾರದರ್ಶಕವಾಗಿ ನಡೆಸಲು ಎಲ್ಲ ಸಿದ್ದತೆಗಳನ್ನು ಮಾಡುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಅಧಿಕಾರಿಗಳಿಗೆ ಮಂಗಳವಾರ ಸೂಚಿಸಿದರು.
ಜಿಲ್ಲಾಡಳಿತ ಭವನದ ವಿಡಿಯೊ ಕಾನ್ಫರೆನ್ಸ್ ಸಭಾಂಗಣದಲ್ಲಿ 2024ರ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1 ರಿಂದ 22ರವರೆಗೆ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ನಿಗದಿಯಾಗಿದೆ. ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ 7,328 ಅಭ್ಯರ್ಥಿಗಳು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 12,403 ಅಭ್ಯರ್ಥಿಗಳು ನೋಂದಣಿಯಾಗಿದ್ದಾರೆ. 17 ಪಿಯುಸಿ ಪರೀಕ್ಷಾ ಕೇಂದ್ರಗಳು ಮತ್ತು 45 ಎಸ್ಎಸ್ಎಲ್‌ಸಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ’ ಎಂದರು.
‘ಪರೀಕ್ಷಾ ಕೇಂದ್ರದ ಕೊಠಡಿಗಳಲ್ಲಿ ಹಾಗೂ ಹೊರಾಂಗಣದಲ್ಲಿ ಅಳವಡಿಸಿರುವ ಸಿ.ಸಿಟಿವಿ ಕ್ಯಾಮೆರಾಗಳು ಕಾರ್ಯಾಚರಿಸುತ್ತಿವೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಬೇಕು. ದುರಸ್ತಿ ಯಾಗಬೇಕಿದ್ದಲ್ಲಿ ಸಂಚಿತ ಅನುದಾನ ಬಳಸಿ ಕ್ರಮ ವಹಿಸಬೇಕು. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುವುದು. ಪರೀಕ್ಷಾ ಕೇಂದ್ರದ 500 ಮೀಟರ್ ವ್ಯಾಪ್ತಿಯ ಜೆರಾಕ್ಸ್ ಮತ್ತು ಸೈಬರ್ ಸೆಂಟರ್‌ಗಳನ್ನು ಮುಚ್ಚಿಸಲಾಗುವುದು’ ಎಂದು ಅವರು ಹೇಳಿದರು.
‘ಪರೀಕ್ಷಾ ಕೇಂದ್ರದಲ್ಲಿ ಪೀಠೋಪಕರಣ, ಕುಡಿಯುವ ನೀರು, ಶೌಚಾಲಯ ಹಾಗೂ ಗಾಳಿ ಬೆಳಕು ಇನ್ನಿತರ ಎಲ್ಲ ಮೂಲ ಸೌಕರ್ಯಗಳು ಉತ್ತಮ ಸ್ಥಿತಿಯಲ್ಲಿ ಇರಬೇಕು. ಪರೀಕ್ಷಾ ಕೇಂದ್ರದ ಕೊಠಡಿಗಳ ವಿವರಗಳ ಮಾರ್ಗ ನಕ್ಷೆಯನ್ನು ಸೂಚನಾ ಫಲಕದಲ್ಲಿ ಪ್ರಕಟಿಸಬೇಕು. ಪರೀಕ್ಷಾ ಕೊಠಡಿಗಳ ಮೇಲ್ವಿಚಾರಕರಾಗಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಬೇಕು. ಪರೀಕ್ಷಾ ಕಾರ್ಯ ನಿರತ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಮಂಡಳಿ ನೀಡುವ ಗುರುತಿನ ಚೀಟಿ ಅಥವಾ ಇಲಾಖೆ ಕಚೇರಿಯಿಂದ ಪಡೆದ ಗುರುತಿನ ಚೀಟಿಯನ್ನು ಧರಿಸಿ ಪರೀಕ್ಷಾ ಕಾರ್ಯನಿರ್ವಹಿಸಬೇಕು’ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ಡಯಟ್ ಉಪನಿರ್ದೇಶಕ ಕಾಶಿನಾಥ್, ಜಿಲ್ಲಾ ಖಜಾನಾಧಿಕಾರಿ ಸುಲೋಚನಾ, ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪರೀಕ್ಷಾ ನೋಡೆಲ್ ಅಧಿಕಾರಿಗಳು ಭಾಗವಹಿಸಿದ್ದರು.
‘ಉಚಿತ ಪ್ರಯಾಣಕ್ಕೆ ಕ್ರಮ’ ‘
ಪರೀಕ್ಷಾ ದಿನಗಳಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಬಾರದು ಎಂದು ಸೆಸ್ಕ್ ಅಧಿಕಾರಿಗಳಿಗೆ ಪತ್ರ ಬರೆಯಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ ಔಷಧಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಸಹಿತವಾಗಿ ಶುಶ್ರೂಷಕಿ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಬೇಕು’ ಎಂದು ಶಿಲ್ಪಾ ನಾಗ್ ಸೂಚಿಸಿದರು. ‘ಪರೀಕ್ಷಾ ಕೇಂದ್ರಕ್ಕೆ ಸಕಾಲದಲ್ಲಿ ಹಾಜರಾಗಲು ವಿದ್ಯಾರ್ಥಿಗಳಿಗೆ ಇರುವ ಸಾರಿಗೆ ವ್ಯವಸ್ಥೆಯನ್ನು ಪರಿಶೀಲಿಸಿ ಪ್ರಾಂಶುಪಾಲರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ವರದಿ ನೀಡಬೇಕು. ಪರೀಕ್ಷಾ ದಿನಗಳಂದು ಪ್ರವೇಶ ಪತ್ರ ಹಾಜರು ಪಡಿಸಿ ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಕ್ರಮವಹಿಸಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.