
ಚಾಮರಾಜನಗರ: ಎಸ್‌ಎಸ್‌ಎಲ್‌ಸಿ ಮೊದಲ ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ತಾಲ್ಲೂಕುವಾರು ಮಧ್ಯ ವಾರ್ಷಿಕ ಪರೀಕ್ಷೆಯ ಫಲಿತಾಂಶಗಳನ್ನು ತುಲನೆ ಮಾಡಿ ಕಡಿಮೆ ಫಲಿತಾಂಶ ಪಡೆದ ತಾಲ್ಲೂಕುಗಳಲ್ಲಿ ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೋನಾ ರೋತ್ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯ ಕೊಠಡಿಯಲ್ಲಿ ಸೋಮವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ ಸಂಬಂಧ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಇಒ, ಮೊದಲ ಪೂರ್ವ ಸಿದ್ಧತಾ ಪರೀಕ್ಷೆಗೆ ಜಿಲ್ಲೆಯಾದ್ಯಂತ ಗೈರಾಗಿರುವ 590 ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಿಸಬೇಕು ಎಂದು ಸೂಚನೆ ನೀಡಿದರು.
ಗೈರಾದ ವಿದ್ಯಾರ್ಥಿಗಳ ಮನೆಗಳಿಗೆ ಸಂಬಂಧಪಟ್ಟ ತಾಲ್ಲೂಕಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಭೇಟಿನೀಡಿ ಶಾಲೆಗೆ ವಿದ್ಯಾರ್ಥಿಗಳನ್ನು ಕರೆತರುವ ಕೆಲಸ ಮಾಡಬೇಕು. ಪರೀಕ್ಷೆಯಲ್ಲಿ ‘ಸಿ’ ಗ್ರೇಡ್ ಪಡೆದಿರುವ 2,753 ಮತ್ತು ಅನುತ್ತೀರ್ಣರಾಗಿರುವ 3,376 ಸೇರಿದಂತೆ 6129 ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ವಿಶೇಷ ಗಮನ ಹರಿಸಬೇಕು. ಈ ಸಂಬಂಧ ಕ್ರಿಯಾ ಯೋಜನೆ ಸಿದ್ಧಪಡಿಸಿ ಅದರಂತೆ ಬೋಧನೆ ಮಾಡಬೇಕು ಎಂದು ಸೂಚನೆ ನೀಡಿದರು.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳನ್ನು ಕಲಿಕಾ ಪ್ರಗತಿ ಹೊಂದಿರುವ ಹಾಗೂ ಕಲಿಕಾ ಸುಧಾರಣೆ ಆಗಬೇಕಾದ ವಿದ್ಯಾರ್ಥಿಗಳ ಗುಂಪುಗಳಾಗಿ ರಚಿಸಿ ಕಲಿಕಾ ಚಟುವಟಿಕೆಗಳನ್ನು ನೀಡಬೇಕು. ಪರೀಕ್ಷೆ-1ರಲ್ಲಿ ಎಲ್ಲ ವಿಷಯಗಳಲ್ಲಿ 50 ರಿಂದ 100, 100 ರಿಂದ 200 ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳ ಗುಂಪುಗಳನ್ನು ರಚಿಸಿ ಅವರಿಗೆ ಪ್ರತ್ಯೇಕ ಕ್ರಿಯಾಯೋಜನೆ ರೂಪಿಸಿ ತೇರ್ಗಡೆಯಾಗಲು ಕ್ರಮ ಕೈಗೊಳ್ಳಬೇಕು ಎಂದರು.
ಫಲಿತಾಂಶ ಉತ್ತಮ ಪಡಿಸುವ ಸಂಬಂಧ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ಕಡ್ಡಾಯವಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭೇಟಿನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿ ವರದಿ ಸಲ್ಲಿಸಬೇಕು. ಪೂರ್ವಸಿದ್ಧತಾ ಪರೀಕ್ಷೆ-1ರಲ್ಲಿ ಕಡಿಮೆ ಫಲಿತಾಂಶ ಪಡೆದಿರುವ ಶಾಲಾ ಮುಖ್ಯೋಪಾದ್ಯಾಯರು ಉತ್ತಮ ಫಲಿತಾಂಶಕ್ಕೆ ಕಡ್ಡಾಯವಾಗಿ ಶ್ರಮ ಹಾಕಬೇಕು ಎಂದರು.
ಮುಂಬರುವ 2 ಮತ್ತು 3ನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಇಒ ನಿರ್ದೇಶನ ನೀಡಿದರು.
ಇಲಾಖೆಯ ಇತರೆ ಶೈಕ್ಷಣಿಕ ಕಾರ್ಯಕ್ರಮಗಳು, ಶಾಲಾ ಕಟ್ಟಡ ಕಾಮಗಾರಿ, ಮಧ್ಯಾಹ್ನದ ಬಿಸಿಯೂಟ ಯೋಜನೆ ಹಾಗೂ ಸಾಕ್ಷರತಾ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಸಿದ ಸಿಇಒ ಮೋನಾ ರೋತ್ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಪಾಟೀಲ್, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕಾಂತರಾಜು, ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಕೆ. ಸುರೇಶ್ ಹಾಗೂ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.