ADVERTISEMENT

ಚಾಮರಾಜನಗರ | ST ಪಟ್ಟಿಗೆ ಅನ್ಯ ಜಾತಿಗಳ ಸೇರ್ಪಡೆ ಸಲ್ಲದು: ಜಿಲ್ಲಾಧಿಕಾರಿಗೆ ಮನವಿ

ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ಧಿ ಸಂಘದಿಂದ ಮನವಿ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2025, 3:53 IST
Last Updated 26 ಸೆಪ್ಟೆಂಬರ್ 2025, 3:53 IST
ಅನ್ಯ ಸಮುದಾಯದವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಮತ್ತು ಸಿಂಧುತ್ವ ಪ್ರಮಾಣ ಪತ್ರ ನೀಡಬಾರದು, ಎಸ್.ಟಿ ಪಟ್ಟಿಗೆ ಸೇರಿಸಬಾರದು ಎಂದು ಒತ್ತಾಯಿಸಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ಧಿ ಸಂಘದಿಂದ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಲಾಯಿತು
ಅನ್ಯ ಸಮುದಾಯದವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಮತ್ತು ಸಿಂಧುತ್ವ ಪ್ರಮಾಣ ಪತ್ರ ನೀಡಬಾರದು, ಎಸ್.ಟಿ ಪಟ್ಟಿಗೆ ಸೇರಿಸಬಾರದು ಎಂದು ಒತ್ತಾಯಿಸಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ಧಿ ಸಂಘದಿಂದ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಲಾಯಿತು   

ಚಾಮರಾಜನಗರ: ಅನ್ಯ ಸಮುದಾಯಗಳನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಬಾರದು ಎಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಂ.ರಾಮಚಂದ್ರ ಹಾಗೂ ತಾಲ್ಲೂಕು ವಿದ್ಯಾಭಿವೃದ್ದಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸನಾಯಕ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

ಇತರೆ ಹಿಂದುಳಿದ ವರ್ಗಗಳ ಪ್ರವರ್ಗ-1ರಲ್ಲಿರುವ ಬೆಸ್ತ, ಅಂಬಿಗ, ಕಬ್ಬಲಿಗ, ಕಣ್ಣೀರ, ಕೊಲಿ ಸಹಿತ ಹಲವು ಜಾತಿಗೆ ಸೇರಿದವರಿಗೆ ನಾಯಕ ತಳವಾರರ ಹೆಸರಿನಲ್ಲಿ ಪರಿಶಿಷ್ಟ ಪಂಗಡಗಳಡಿ ಜಾತಿ ಪ್ರಮಾಣ ಪತ್ರಗಳನ್ನು ನೀಡಲಾಗುತ್ತಿದ್ದು ಕೂಡಲೇ ನಿಲ್ಲಿಸಬೇಕು. ಅಕ್ರಮವಾಗಿ ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ಜರುಗಿಸಬೇಕು.

ರಾಜ್ಯ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವಾಗ ಪರಿಶಿಷ್ಟ ಪಂಗಡದ ಪಟ್ಟಿಯ ಕ್ರಮ ಸಂಖ್ಯೆ 38ರಲ್ಲಿ ನಾಯಕ ತಳವಾರ ಜಾತಿ ಮಾತ್ರ. ಹಾಗಾಗಿ ಬೆಸ್ತ, ಅಂಬಿಗ, ಕಬ್ಬಲಿಗ, ಕಬ್ಬೇರ, ಕೊಲಿ ಮುಂತಾದ ಜಾತಿಗೆ ಸೇರಿದ ತಳವಾರರನ್ನು  ಇತರೆ ಹಿಂದುಳಿದ ವರ್ಗಗಳ ಪ್ರವರ್ಗ-1ರ ಕ್ರಮ ಸಂಖ್ಯೆ 6ರಲ್ಲಿ ಸೇರಿಸಿ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಒತ್ತಾಯಿಸಿದರು.

ADVERTISEMENT

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಖಾತೆ ಹಂಚಿಕೆ ಮಾಡಬೇಕು. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಕೂಡಲೇ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು, ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸಿ ವಾಲ್ಮೀಕಿ ನಾಯಕ ಜನಾಂಗದ ಸಾಂಸ್ಕೃತಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ರಾಜಕೀಯ ವಿಷಯಗಳ ಬಗ್ಗೆ ಅಧ್ಯಯನ ಮಾಡಲು ವಿಶೇಷ ಅನುದಾನ ಬಿಡುಗಡೆ ಮಾಡಬೇಕು.

ಅಪೂರ್ಣ ವಾಲ್ಮೀಕಿ ಭವನಗಳನ್ನು ಪೂರ್ಣಗೊಳಿಸಸಬೇಕು, ವಿದ್ಯಾರ್ಥಿ ವೇತನ ಬಾಕಿ ಬಿಡುಗಡೆಗೆ ಹೆಚ್ಚುವರಿ ₹ 500 ಕೋಟಿ ಅನುದಾನ ಬಿಡುಗಡೆ ಮಾಡಬೇಕು, ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು, ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪಿಸಿ ಸಂಶೋಧನ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು.

ಗಿರಿಜನ ಉಪಯೋಜನೆಯಡಿ ನಿಗದಿಯಾಗಿರುವ ಅನುದಾನವನ್ನು ಅನ್ಯ ಉದ್ದೇಶಗಳಿಗೆ ಉಪಯೋಗಿಸಬಾರದು, ಪರಿಶಿಷ್ಟ ವರ್ಗಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದರೂ ಪದೋನ್ನತಿ ವಿಳಂಬ ಖಂಡನೀಯ, ಪರಿಶಿಷ್ಟ ಪಂಗಡಗಳ ಪಟ್ಟಿಗೆ ಅನ್ಯ ಸಮುದಾಯಗಳನ್ನು ಸೇರಿಸಿದರೆ ಸಂವಿಧಾನ ಆಶಯಗಳಿಗೆ ಪೆಟ್ಟುಬೀಳಲಿದ್ದು ಕೈಬಿಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಈ ಸಂದರ್ಭ ಮುಖಂಡರಾದ ಜಯಸುಂದರ್, ಕೃಷ್ಣನಾಯಕ, ಶಿವು ವಿರಾಟ್, ಬದನಗುಪ್ಪೆ ಶಿವರಾಮ್, ಸಿಂಗನಪುರ ಮಾದೇಶ್, ವೆಂಕಟೇಶ್, ಮಹೇಂದ್ರ, ಬಸವನಾಯಕ, ಯಾನಗಳ್ಳಿ ಲಿಂಗಣ್ಣ, ನಾರಾಯಣನಾಯಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.