
ಸಂತೇಮರಹಳ್ಳಿ ಹೋಬಳಿಯ ಮುರಟಿಪಾಳ್ಯ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಬಾಕ್ಸ್ ಚರಂಡಿ ಕಾಮಗಾರಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಭೂಮಿ ಪೂಜೆ ನೆರವೇರಿಸಿದರು
ಸಂತೇಮರಹಳ್ಳಿ: ಕ್ಷೇತ್ರ ವ್ಯಾಪ್ತಿಯಲ್ಲಿ ಸೋಲಿಗರು ವಾಸಮಾಡುವ ಗ್ರಾಮಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹೆಚ್ಚು ಆದ್ಯತೆ ನೀಡಲಾಗುತ್ತದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.
ಹೋಬಳಿಗೆ ಸೇರಿದ ಮುರಟಿಪಾಳ್ಯ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಬಾಕ್ಸ್ ಚರಂಡಿ ಕಾಮಗಾರಿಗೆ ಈಚೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಕ್ಷೇತ್ರ ವ್ಯಾಪ್ತಿಯ ಅರಣ್ಯ ಪ್ರದೇಶಗಳಲ್ಲಿ ಮೂಲ ಸೌಲಭ್ಯವಿಲ್ಲದೆ ವಾಸ ಮಾಡುವ ಸೋಲಿಗರ ಗ್ರಾಮಗಳನ್ನು ಈಗಾಗಲೇ ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆ ಗ್ರಾಮಗಳಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಮುರಟಿಪಾಳ್ಯ ಗ್ರಾಮದಲ್ಲಿ ವಾಸ ಮಾಡುತ್ತಿರುವ ಸೋಲಿಗರಿಗೆ ಮೂಲ ಸೌಲಭ್ಯ ಒದಗಿಸುವ ಸಲುವಾಗಿ ಟಿಎಸ್‌ಪಿ ಯೋಜನೆಯಡಿ ₹ 25 ಲಕ್ಷ ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ ಹಾಗೂ ಬಾಕ್ಸ್ ಚರಂಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಾಮಗಾರಿಯನ್ನು ಕೆಆರ್‌ಐಡಿಎಲ್ ಸಂಸ್ಥೆಗೆ ವಹಿಸಲಾಗಿದೆ ಎಂದರು.
ಸಂಬಂಧಪಟ್ಟ ಎಂಜಿನಿಯರ್ ಆದಷ್ಟು ಬೇಗನೆ ಕಾಮಗಾರಿ ಆರಂಭಿಸಿ ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೋಲಿಗರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಸರ್ಕಾರ ನಾನಾ ಇಲಾಖೆ ಮೂಲಕ ಸೌಲಭ್ಯಗಳನ್ನು ಒದಗಿಸುತ್ತಿದೆ. ಹಾಗಾಗಿ ಪ್ರತಿಯೊಬ್ಬರು ಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ವಿ.ಚಂದ್ರು, ಯಳಂದೂರು ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಪ್ರಭುಪ್ರಸಾದ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಿ.ಮಹದೇವ್, ಹೊಂಗನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಂಕರ್, ಸದಸ್ಯ ಸಿದ್ದೇಗೌಡ, ಆರಾಧನ ಸಮಿತಿ ಸದಸ್ಯ ಶಿವನಂಜಯ್ಯ, ಕೆಆರ್‌ಐಡಿಎಲ್ ಸಂಸ್ಥೆ ಎಂಜಿನಿಯರ್ ಮಧು, ಮುಖಂಡರಾದ ಮುತ್ತೇಗೌಡ, ಹೊನ್ನೂರು ರಾಘವೇಂದ್ರ, ಕಂದಹಳ್ಳಿ ನಂಜುಂಡಸ್ವಾಮಿ, ಬಸವರಾಜು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.