ಚಾಮರಾಜನಗರ: ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಆರೋಗ್ಯ ವೃದ್ಧಿಗೆ ಸಹಕಾರಿ ಎಂದು ಎಂಎಸ್ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಕರಿಗೆ ಆಯೋಜಿಸಿದ್ದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಆಸಕ್ತಿ ಇರುವವರು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರತಿಭೆ ಪ್ರದರ್ಶಿಸಬೇಕು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಸದೃಢತೆಗೂ ಸಹಕಾರಿಯಾಗಿದ್ದು ಎಲ್ಲರನ್ನೂ ಬೆಸೆಯುತ್ತದೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಮಾದಪ್ಪ ಮಾತನಾಡಿ, ‘ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಶಿಕ್ಷಕರು ಕ್ರೀಡೆಗಳಲ್ಲಿ ಭಾಗವಹಿಸಿ ಒತ್ತಡ ನಿವಾರಣೆ ಮಾಡಿಕೊಂಡು ಸದೃಢ ಆರೋಗ್ಯ ಕಾಪಾಡಿಕೊಳ್ಳಬೇಕು. ಕಾರ್ಯದೊತ್ತಡದ ಮಧ್ಯೆ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದು ಅತ್ಯವಶ್ಯಕ’ ಎಂದರು.
ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಮಹದೇವಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ ಮಾತನಾಡಿದರು. ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರ ಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಕೆ.ರಾಮಸ್ವಾಮಿ, ಉಪಾಧ್ಯಕ್ಷ ಮಹದೇವಯ್ಯ ಕಾರ್ಯದರ್ಶಿ ಭರತ್ ಭೂಷಣ್, ರಂಗರಾಜ್, ಸಾವಿತ್ರಿಬಾಯಿ ಫುಲೆ ಸಂಘದ ಅಧ್ಯಕ್ಷೆ ನೇತ್ರಾವತಿ, ಶಿಕ್ಷಕರ ಸಂಘದ ಕಾರ್ಯದರ್ಶಿ ಎನ್.ಸುಧಾ, ಶಿಕ್ಷಕರಾದ ಸವಿತಾ ರಾಣಿ, ಶಶಿಕಲಾ, ಗೀತಾ, ಶ್ವೇತಾ, ನಟರಾಜ್, ಮಹದೇವಸ್ವಾಮಿ, ಮಲ್ಲಿಕಾರ್ಜುನ, ಮುರುಗೇಶ್ ಕುಮಾರ್, ರಾಜು, ನಿರ್ಮಲ ಸಿದ್ದರಾಜು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.