ADVERTISEMENT

ದಾವಣಗೆರೆಯಲ್ಲಿ ಡಿ.24ರಿಂದ 23ನೇ ಮಹಾ ಅಧಿವೇಶನ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಆಯೋಜನೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2022, 2:35 IST
Last Updated 27 ನವೆಂಬರ್ 2022, 2:35 IST
ಎಚ್‌.ಎಂ.ರೇಣುಕ ಪ್ರಸನ್ನ
ಎಚ್‌.ಎಂ.ರೇಣುಕ ಪ್ರಸನ್ನ   

ಚಾಮರಾಜನಗರ:ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 23ನೇ ಮಹಾ ಅಧಿವೇಶನ ಡಿ.24 ರಿಂದ 26ರವರೆಗೆ ದಾವಣಗೆರೆಯಲ್ಲಿ ನಡೆಯಲಿದೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರೇಣುಕ ಪ್ರಸನ್ನ, ‘ಮೂರು ದಿನಗಳ ಕಾಲ ನಡೆಯುವ ಅಧಿವೇಶನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ಸೇರಿದಂತೆ ರಾಜ್ಯದ ವಿವಿಧ ಮಠಾಧೀಶರು, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ’ ಎಂದರು.

‘ಮಹಾ ಅಧಿವೇಶನದಲ್ಲಿ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ಹಾಗೂ ವಸ್ತು ಪ್ರದರ್ಶನಗಳು ನಡೆಯಲಿದೆ. ಕೃಷಿ, ವಾಣಿಜ್ಯ, ಕೈಗಾರಿಕೆ, ಮಹಿಳಾ ಮತ್ತು ಯುವ, ಆರೋಗ್ಯ, ನೌಕರರ ಅಧಿವೇಶನ ನಡೆಯಲಿದೆ. ಸಮಾಜಕ್ಕೆ ಸಂಬಂಧಿಸಿದ ಎಲ್ಲ ವಿಚಾರಗಳು, ಮುಂದಿನ ಐದು ವರ್ಷಗಳಲ್ಲಿ ಆಗಬೇಕಾದ ಕಾರ್ಯಗಳ ಬಗ್ಗೆಯೂ ಚರ್ಚೆ ನಡೆಯಲಿದೆ’ ಎಂದು ಹೇಳಿದರು.

ADVERTISEMENT

‘ಡಿ.26ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ನಿರ್ಣಯ ಮಂಡಿಸಿ ಅನುಮೋದನೆ ಪಡೆಯಲಾಗುವುದು. ಪ್ರತಿ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಅಧಿವೇಶನಕ್ಕೆ ರಾಜ್ಯದ ಎಲ್ಲ ಭಾಗಗಳು ಹಾಗೂ ಹೊರ ರಾಜ್ಯಗಳಿಂದಲೂ ಬರುವ ನಿರೀಕ್ಷೆ ಇದ್ದು, ಮೂರು ದಿನಗಳ ಅವಧಿಯಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡುವ ನಿರೀಕ್ಷೆ ಇದೆ’ ಎಂದರು.

‘ಅಧಿವೇಶನದ ನೋಂದಣಿ ಶುಲ್ಕ ₹500 ನಿಗದಿ ಪಡಿಸಲಾಗಿದೆ. ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.

ಮಹಾಸಭಾದ ರಾಜ್ಯ ಕೋಶಾಧ್ಯಕ್ಷ ವರುಣಾ ಮಹೇಶ್‌ ಮಾತನಾಡಿ, ‘22ನೇ ಮಹಾ ಅಧಿವೇಶನ ಸುತ್ತೂರಿನಲ್ಲಿ ನಡೆದಿತ್ತು. ಈ ಬಾರಿಯ ಅಧಿವೇಶನದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ವೀರಶೈವ ಲಿಂಗಾಯತ ಸಮುದಾಯವದರು ಭಾಗವಹಿಸಲಿದ್ದಾರೆ. ಚಾಮರಾಜನಗರ–ಮೈಸೂರು ಭಾಗದಿಂದ 10 ಸಾವಿರಕ್ಕೂ ಹೆಚ್ಚು ಜನರು ತೆರಳುವ ನಿರೀಕ್ಷೆ ಇದೆ’ ಎಂದರು.

ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಮೂಡ್ಲುಪುರ ನಂದೀಶ್ ಮಾತನಾಡಿ, ‘ಜಿಲ್ಲೆಯಾದ್ಯಂತ ಮಹಾ ಅಧಿವೇಶನದ ಬಗ್ಗೆ ಪ್ರಚಾರ ನಡೆಸಿ ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಇದರಲ್ಲಿ ಭಾಗವಹಿಸುವಂತೆ ಮಾಡಲಾಗುವುದು’ ಎಂದರು.

ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗೇಂದ್ರ, ತಾಲ್ಲೂಕು ಘಟಕದ ಅಧ್ಯಕ್ಷ ಹೊಸೂರು ನಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.