ಹುಲಿ ( ಸಂಗ್ರಹ ಚಿತ್ರ)
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ಎಸಗಿದ ಮೂವರು ಅಧಿಕಾರಿಗಳ ಅಮಾನತಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಶಿಫಾರಸು ಮಾಡಿದ್ದಾರೆ.
ಹುಲಿಗಳ ಸಾವಿನ ತನಿಖೆಗೆ ನೇಮಿಸಿದ್ದ ಉನ್ನತ ಮಟ್ಟದ ವಿಚಾರಣಾ ಸಮಿತಿ ನೀಡಿರುವ ಪ್ರಾಥಮಿಕ ವರದಿಯನ್ನು ಆಧರಿಸಿ ಎಂ.ಎಂ ಹಿಲ್ಸ್ ವನ್ಯಜೀವಿ ವಿಭಾಗದ ಡಿಸಿಎಫ್ ವೈ.ಚಕ್ರಪಾಣಿ, ಹನೂರು ವನ್ಯಜೀವಿ ಉಪ ವಿಭಾಗದ ಎಸಿಎಫ್ ಗಜಾನನ ಹೆಗಡೆ ಹಾಗೂ ಉಪ ವಲಯ ಅರಣ್ಯಾಧಿಕಾರಿ ಮಾದೇಶ್ ಅವರನ್ನು ಅಮಾನತು ಮಾಡುವಂತೆ ಸಚಿವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಸೂಚಿಸಿದ್ದಾರೆ.
ಅಮಾನತಿಗೆ ಕಾರಣ: ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿ ಮಾಡಲು ಏಪ್ರಿಲ್ ಅಂತ್ಯಕ್ಕೆ ಹಣ ಬಿಡುಗಡೆ ಮಾಡಿದ್ದರೂ ಜೂನ್‌ವರೆಗಿನ ವೇತನ ಪಾವತಿ ಮಾಡಿರಲಿಲ್ಲ. ಪರಿಣಾಮ ಹೊರಗುತ್ತಿಗೆ ಸಿಬ್ಬಂದಿ ಮೂರು ತಿಂಗಳ ವೇತನ ಪಾವತಿಗೆ ಜೂನ್ 23ರಂದು ಪ್ರತಿಭಟನೆ ನಡೆಸಿದ್ದರಿಂದ ಮುಂಚೂಣಿ ಸಿಬ್ಬಂದಿ ಕರ್ತವ್ಯದಿಂದ ವಿಮುಖವಾದ ಅಂಶ ಮೇಲ್ನೋಟಕ್ಕೆ ಕಂಡು ಬಂದಿದೆ.
ಗಸ್ತು ಸಿಬ್ಬಂದಿಯ ಕಾರ್ಯಕ್ಷಮತೆಯ ಮೇಲೆ ಎಸಿಎಫ್, ಆರ್‌ಎಫ್‌ಒ ಮತ್ತು ಡಿಆರ್‌ಎಎಫ್‌ಒ ನಿಗಾ ಇರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದು, ಅರಣ್ಯ ರಕ್ಷಣೆಯಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿ ಇಲಾಖಾ ವಿಚಾರಣೆ ನಡೆಸಬೇಕು ಎಂದು ಸಚಿವರು ಆದೇಶದಲ್ಲಿ ತಿಳಿಸಿದ್ದಾರೆ.
ವಿಷಪ್ರಾಶನ ಕಾರಣ: 11 ವರ್ಷದ ತಾಯಿ ಹುಲಿ ಹಾಗೂ 10-11 ತಿಂಗಳ 4 ಮರಿ ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ ಎಂದು ಪ್ರಾಥಮಿಕ ತನಿಖಾ ವರದಿಯಲ್ಲಿ ಬಹಿರಂಗವಾಗಿದೆ. ಸೇಡು ತೀರಿಸಿಕೊಳ್ಳಲು ಹುಲಿ ದಾಳಿಯಿಂದ ಸತ್ತ ಹಸುವಿನ ಕಳೇಬರಕ್ಕೆ ರಾಸಾಯನಿಕ ಮಿಶ್ರಣ ಮಾಡಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
10ರೊಳಗೆ ಅಂತಿಮ ವರದಿ: ಹುಲಿಗಳ ಸಾವಿನ ಪ್ರಕರಣದಲ್ಲಿ ತನಿಖೆ ನಡೆಸಲು ಹೆಚ್ಚುವರಿ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್ ನೇತೃತ್ವದ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಶ್ರೀನಿವಾಸುಲು, ಚಾಮರಾಜನಗರ ಸಿಸಿಎಫ್ ಹೀರಾಲಾಲ್, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಎಐಜಿ ಹರಿಣಿ ವೇಣುಗೋಪಾಲ್, ವನ್ಯಜೀವಿ ತಜ್ಞ ಡಾ.ಸಂಜಯ್ ಗುಬ್ಬಿ, ಮೈಸೂರು ಮೃಗಾಲಯದ ಸಹಾಯಕ ನಿರ್ದೇಶಕ ಡಾ. ಶಶಿಧರ್ ಅವರನ್ನೊಳಗೊಂಡ ಸಮಿತಿ ಕಾರ್ಯ ನಿರ್ವಹಿಸುತ್ತಿದೆ. ಜುಲೈ 10ರೊಳಗೆ ಅಂತಿಮ ತನಿಖಾ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.