ADVERTISEMENT

ಹನೂರು: ಸೂಕ್ಷ್ಮ ವಲಯದಲ್ಲಿ ಪ್ರವಾಸೋದ್ಯಮ, ಮಾಲೀಕನಿಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2023, 6:34 IST
Last Updated 16 ಆಗಸ್ಟ್ 2023, 6:34 IST
   

ಹನೂರು: ಕಾವೇರಿ ವನ್ಯಧಾಮದ ಪರಿಸರ ಸೂಕ್ಷ್ಮ ವಲಯಕ್ಕೆ ಸೇರಿದ ಕೃಷಿ ಭೂಮಿಯಲ್ಲಿ ‘ಮ್ಯಾನೇಜ್ಡ್‌ ಫಾರ್ಮ್ ಲ್ಯಾಂಡ್’ ಹೆಸರಿನಲ್ಲಿ ಪ್ರವಾಸೋದ್ಯಮಕ್ಕೆ ಸಿದ್ಧತೆ ನಡೆಸುತ್ತಿದ್ದ ಮಾಲೀಕ ಚಿನ್ನಾಳು ಎಂಬುವರಿಗೆ ಅರಣ್ಯಾಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಕೊತ್ತನೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಕೃಷಿ ಮಾಡುವುದಾಗಿ ಹೇಳಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಜಾಹೀರಾತನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದರು. ಈ ಬಗ್ಗೆ ‘ಸೂಕ್ಷ್ಮ ವಲಯದಲ್ಲಿ ಪ್ರವಾಸೋದ್ಯಮ’ ಎಂಬ ಶೀರ್ಷಿಕೆಯಡಿ ‘ಪ್ರಜಾವಾಣಿ’ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.

ಕಾವೇರಿ ವನ್ಯಧಾಮದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎನ್ ಅಂಕರಾಜು, ಕೊತ್ತನೂರು ವನ್ಯಜೀವಿ ವಲಯ ಅರಣ್ಯಾಧಿಕಾರಿ ಶಶಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೆ, ಸಾಮಾಜಿಕ ಮಾಧ್ಯಮದಲ್ಲಿ ನೀಡಿದ್ದ ಜಾಹೀರಾತನ್ನು ಗಂಭೀರವಾಗಿ ಪರಿಗಣಿಸಿದ ಅಧಿಕಾರಿಗಳು, ಪರಿಸರ ಸೂಕ್ಷ್ಮ ವಲಯ ಎಂದು ಗುರುತಿಸಲ್ಪಟ್ಟಿರುವ ಅರಣ್ಯ ಪ್ರದೇಶದಲ್ಲಿ ಅನುಮತಿ ಪಡೆಯದೆ ಯಾವುದೇ ರೀತಿಯ ಚಟುವಟಿಕೆಗಳನ್ನು ನಡೆಸಬಾರದು. ಹೀಗಿದ್ದರೂ ಪ್ರವಾಸೋದ್ಯಮವನ್ನು ಉತ್ತೇಜಿಸುವ ಜಾಹೀರಾತು ನೀಡಿರುವುದರ ಬಗ್ಗೆ ಕಾರಣ ಕೇಳಿ ನೋಟಿಸ್ ನೀಡುವ ಜತೆಗೆ, ಮುಂದೆ ಯಾವುದೇ ಪ್ರವಾಸೋದ್ಯಮ ಚಟುವಟಿಕೆ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ.

ADVERTISEMENT

‘ಪ್ರವಾಸೊದ್ಯಮವನ್ನು ಉತ್ತೇಜಿಸುವ ಯಾವುದೇ ರೀತಿಯ ಚಟುವಟಿಕೆಗಳನ್ನು ನಡೆಸದಂತೆ ಸೂಚಿಸಲಾಗಿದೆ. ಇದನ್ನು ಉಲ್ಲಂಘಿಸಿದರೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು’ ಎಂದು ಕೊತ್ತನೂರು ವನ್ಯಜೀವಿ ವಲಯ ಅರಣ್ಯಾಧಿಕಾರಿ ಶಶಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.