ADVERTISEMENT

ಚಾಮರಾಜನಗರ | ಅಸಂಘಟಿತ ವಲಯದಲ್ಲಿ ಶೇ 91 ಕಾರ್ಮಿಕರು: ಕಾರ್ಮಿಕ ಸಚಿವ ಸಂತೋಷ್ ಲಾಡ್

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2025, 2:55 IST
Last Updated 7 ಆಗಸ್ಟ್ 2025, 2:55 IST
ಚಾಮರಾಜನಗರ ತಾಲ್ಲೂಕಿನ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಶ್ರಮಿಕರ ತಾತ್ಕಾಲಿಕ ವಸತಿ ಸಮುಚ್ಚಯಗಳ ಉದ್ಘಾಟನೆ ಹಾಗೂ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಅರಿವು ಕಾರ್ಯಕ್ರಮವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಉದ್ಘಾಟಿಸಿದರು
ಚಾಮರಾಜನಗರ ತಾಲ್ಲೂಕಿನ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಶ್ರಮಿಕರ ತಾತ್ಕಾಲಿಕ ವಸತಿ ಸಮುಚ್ಚಯಗಳ ಉದ್ಘಾಟನೆ ಹಾಗೂ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಅರಿವು ಕಾರ್ಯಕ್ರಮವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಉದ್ಘಾಟಿಸಿದರು   

ಚಾಮರಾಜನಗರ: ದೇಶದಲ್ಲಿ ಶೇ 91ರಷ್ಟು ಕಾರ್ಮಿಕರು ಅಸಂಘಟಿತ ವಲಯದಲ್ಲಿ ದುಡಿಯುತ್ತಿದ್ದು ಅವರ ಜೀವನ ಭದ್ರತೆಗೆ ನೆರವಾಗಲು ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಿದ್ದು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಲಹೆ ನೀಡಿದರು.

ತಾಲ್ಲೂಕಿನ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಶ್ರಮಿಕರ ತಾತ್ಕಾಲಿಕ ವಸತಿ ಸಮುಚ್ಚಯಗಳ ಉದ್ಘಾಟನೆ ಹಾಗೂ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಸಂಘಟಿತ ವಲಯದ ಕಾರ್ಮಿಕರ ಅಭಿವೃದ್ಧಿಗೆ ರೂಪಿಸಿರುವ ಕಾರ್ಯಕ್ರಮಗಳು ಅರ್ಹರಿಗೆ ತಲುಪಬೇಕು. ಗಿಗ್ ಬಿಲ್, ಸಿನಿ ಬಿಲ್, ಸಾರಿಗೆ ಬಿಲ್, ಆಶಾದೀಪ ಯೋಜನೆ, ಡಾ.ಬಿ.ಆರ್. ಅಂಬೇಡ್ಕರ್ ಸಹಾಯ ಹಸ್ತ ಯೋಜನೆ, ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಕಾರ್ಮಿಕ ಇಲಾಖೆಯ ಪ್ರಮುಖ ಯೋಜನೆಗಳಾಗಿವೆ.

ADVERTISEMENT

ಅಸಂಘಟಿತ ವಲಯದ ಕಾರ್ಮಿಕರು ಸರ್ಕಾರದ ಸೌಲಭ್ಯ ಪಡೆದುಕೊಳ್ಳಲು ಅನುಕೂಲವಾಗುವಂತೆ ಸ್ಮಾರ್ಟ್ ಕಾರ್ಡ್‍ಗಳನ್ನು ವಿತರಿಸಲಾಗುತ್ತಿದೆ. ಅಸಂಘಟಿತ ಕಾರ್ಮಿಕರು ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಅರಿವು ಹೊಂದಬೇಕು ಎಂದರು.

ಜೀವನೋಪಾಯಕ್ಕಾಗಿ ವಲಸೆ ಬಂದಿರುವ ಕಾರ್ಮಿಕರ ಹಿತದೃಷ್ಟಿಯಿಂದ ವಸತಿ ಸಮುಚ್ಚಯಗಳನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿರ್ಮಿಸಲಾಗುತ್ತಿದೆ. ಈಗಾಗಲೇ 10 ಜಿಲ್ಲೆಗಳಲ್ಲಿ ತಾತ್ಕಾಲಿಕ ವಸತಿ ಸಮುಚ್ಚಯ ತೆರೆಯಲಾಗಿದ್ದು ಮೂಲಸೌಕರ್ಯ ಒದಗಿಸಲಾಗಿದ್ದು 7 ಸಾವಿರ ಕಾರ್ಮಿಕರು ಉಳಿದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರ್ಕಾರ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಬದ್ಧವಾಗಿದೆ ಎಂದು ಸಚಿವ ಸಂತೋಷ್ ಲಾಡ್ ಭರವಸೆ ನೀಡಿದರು.

ದೇಶದಲ್ಲಿ ವಾರ್ಷಿಕ 4.70 ಲಕ್ಷ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು 1.77 ಲಕ್ಷಕ್ಕೂ ಅಧಿಕ ಮಂದಿ ಮೃತಪಡುತ್ತಿದ್ದಾರೆ. ಮೃತರ ಪೈಕಿ ಯುವಜನತೆ ಹೆಚ್ಚಾಗಿರುವುದು ಆತಂಕದ ವಿಚಾರ. ಝೋಮೆಟೊ, ಸ್ವಿಗ್ಗಿ, ಅಮೇಜಾನ್ ನಂತಹ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಕೆಲಸಗಾರರಿಗೆ ನೆರವಾಗಲು ಗಿಗ್ ಮಸೂದೆ, ಸಿನಿಮಾ ಕ್ಷೇತ್ರದಲ್ಲಿ ತೆರೆಯ ಹಿಂದೆ ಕೆಲಸ ಮಾಡುವವರಿಗಾಗಿ ಸಿನಿ ಮಸೂದೆ ಹಾಗೂ ಖಾಸಗಿ ಬಸ್, ಆಟೋ ಚಾಲಕರು, ಕ್ಲೀನರ್, ಮೆಕಾನಿಕ್‍ಗಳು ಸೇರಿದಂತೆ ಇತರೆ ವರ್ಗಗಳ ಕಲ್ಯಾಣಕ್ಕಾಗಿ ಸಾರಿಗೆ ಮಸೂದೆ ಜಾರಿಗೊಳಿಸಲಾಗಿದೆ ಎಂದರು.

ಕಾಂಗ್ರೆಸ್‌ ಸರ್ಕಾರ 2 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ ₹60,000 ಕೋಟಿ ವ್ಯಯವಾಗುತ್ತಿದ್ದು 5 ವರ್ಷಗಳಿಗೆ ₹ 3 ಲಕ್ಷ ಕೋಟಿ ಖರ್ಚಾಗಲಿದೆ. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿ ಮಹಿಳಾ ಪ್ರಯಾಣಿಕರು ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ತಲಾ ಆದಾಯ, ಜಿಡಿಪಿ ಬೆಳವಣಿಗೆಯಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ. ಜಿ.ಎಸ್.ಟಿ ಸಂಗ್ರಹದಲ್ಲಿ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಸಂಘಟಿತ ವಲಯದ ಕಾರ್ಮಿಕರು

ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮಾತನಾಡಿ ‘ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಮಾದರಿಯಲ್ಲಿ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ವಸತಿ ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದ್ದು ಕಾರ್ಮಿಕ ವರ್ಗಕ್ಕೆ ಶಕ್ತಿ ದೊರೆಯಲಿದೆ ಎಂದರು.

ಲಿಡ್ಕರ್ ಸಂಸ್ಥೆಯ ಅಧ್ಯಕ್ಷ ಮುಂಡರಗಿ ನಾಗರಾಜು, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್, ಬದನಗುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲೇಶ್,  ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸದಸ್ಯ ಎಚ್.ಜಿ. ರಮೇಶ್, ಕೆ.ಪಿ.ಜಾನಿ, ಬಸಪ್ಪ, ಕಾರ್ಮಿಕ ಇಲಾಖೆ ಆಯುಕ್ತ ಡಾ. ಎಚ್.ಎನ್. ಗೋಪಾಲಕೃಷ್ಣ, ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ ಜಂಟಿ ಕಾರ್ಯದರ್ಶಿ ಡಾ. ಎಸ್.ಬಿ. ರವಿಕುಮಾರ, ಮಂಡಳಿಯ ಕಾರ್ಯದರ್ಶಿ ಡಿ. ಭಾರತಿ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್, ಎಸ್‌ಪಿ ಬಿ.ಟಿ.ಕವಿತಾ ಉಪಸ್ಥಿತರಿದ್ದರು.

1460 ಎಕರೆಯಲ್ಲಿ ಕೈಗಾರಿಕಾ ಪ್ರದೇಶ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ ಶಿಕ್ಷಣದಷ್ಟೆ ಆದ್ಯತೆ ಉದ್ಯೋಗ ಸೃಷ್ಟಿಗೂ ಸಿಗಬೇಕು ಎಂಬ ಉದ್ದೇಶದಿಂದ ಜಿಲ್ಲೆಯಲ್ಲಿ 1460 ಎಕರೆ ಪ್ರದೇಶದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲಾಗಿದೆ. 11 ವರ್ಷಗಳಲ್ಲಿ ಜಿಲ್ಲೆಯ ಕೈಗಾರಿಕೆ ಕ್ಷೇತ್ರ ಅಭಿವೃದ್ಧಿಯತ್ತ ಸಾಗುತ್ತಿದೆ. ಕೈಗಾರಿಕೆಗಳಲ್ಲಿ 10 ಸಾವಿರ ಮಂದಿ ಸ್ಥಳೀಯರಿಗೆ ‌ಉದ್ಯೋಗ ದೊರಕಿದೆ. ಹಿಂದೆ ಸಂಘಟಿತ ಕಾರ್ಮಿಕರಿಗೆ ಮಾತ್ರ ಸರ್ಕಾರದ ಸೌಲಭ್ಯಗಳು ದೊರೆಯುತ್ತಿತ್ತು. ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರಿಗೆ ಹಲವು ಸೌಲಭ್ಯ ನೀಡುತ್ತಿದ್ದು ಹಿತರಕ್ಷಣೆಗೆ ಮುಂದಾಗಿದೆ ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.