
ಚಾಮರಾಜನಗರ: ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಫೆ.8 ಹಾಗೂ 9ರಂದು ವಾಲ್ಮೀಕಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದ್ದು ನಾಡಿನಾದ್ಯಂತ ನೆಲೆಸಿರುವ ವಾಲ್ಮೀಕಿ ಸಮುದಾಯದವರು ಭಾಗವಹಿಸಬೇಕು ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.
ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸ್ವಾಮೀಜಿ, ಗುರುಪೀಠದಲ್ಲಿ ಎರಡು ದಿನ ನಡೆಯುವ ವಾಲ್ಮೀಕಿ ಜಾತ್ರಾ ಮಹೋತ್ಸವ ವೈಚಾರಿಕ ಹಾಗೂ ಧಾರ್ಮಿಕವಾಗಿ ಮಹತ್ವ ಪಡೆದುಕೊಂಡಿದ್ದು ವಾಲ್ಮೀಕಿ ಸಮುದಾಯದವರನ್ನು ಒಂದೆಡೆ ಸೇರಿಸಿ ಸಮಾಲೋಚನೆ ನಡೆಸಲಾಗುವುದು ಎಂದರು.
ಸಮಾಜದಲ್ಲಿ ಜಾಗೃತಿ ಮೂಡಿಸುವ ಹಾಗೂ ಸಂಘಟನೆ ಮಾಡುವ ಉದ್ದೇಶದಿಂದ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ವಾಲ್ಮೀಕಿ ಸಮುದಾಯ ಜಾಗೃತವಾಗಿದ್ದು ಸಂಘಟಿತವಾಗಿದೆ ಎಂಬ ಸಂದೇಶವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ತಲುಪಲಿದೆ. ಹಿಂದುಳಿದಿರುವ ವಾಲ್ಮೀಕಿ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಬೇಕು. ಸಮಾವೇಶದಲ್ಲಿ ಸಮುದಾಯದ ಅಭಿವೃದ್ಧಿ ಸಂಬಂಧ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿರಿಸಲಾಗುವುದು ಎಂದು ಸ್ವಾಮೀಜಿ ಹೇಳಿದರು.
ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಮಾತನಾಡಿ, ಶ್ರೀಮಠದ ಬೆಳವಣಿಗೆಗೆ ವಾಲ್ಮೀಕಿ ಸಮುದಾಯ ಕೈಜೋಡಿಸಬೇಕು. ಜಾತ್ರಾ ಮಹೋತ್ಸವ ಶ್ರೀಮಠಕ್ಕೆ ಸೀಮಿತವಾಗದಂತೆ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಬೇಕು. ಮುಂದಿನ ವರ್ಷ ಚಾಮರಾಜನಗರ ಜಿಲ್ಲೆಯಲ್ಲಿ ವಾಲ್ಮೀಕಿ ಜಾತ್ರಾ ಮಹೋತ್ಸವ ಆಯೋಜಿಸಿದರೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ವಿ.ಚಂದ್ರು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್.ಸೋಮನಾಯಕ, ಕೊಪ್ಪಾಳಿ ಮಹದೇವ ನಾಯಕ, ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಜಯಸುಂದರ್ ಮಾತನಾಡಿದರು. ನಗರಸಭೆ ಮಾಜಿ ಅಧ್ಯಕ್ಷ ರಾಮಸಮುದ್ರ ಸುರೇಶ್, ತಾಲ್ಲೂಕು ವಿದ್ಯಾಭಿವೃದ್ದಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸನಾಯಕ, ಮುಖಂಡರಾದ ಕಪನಿ ನಾಯಕ, ಮುರುಳಿಕೃಷ್ಣ, ಎಸ್.ಸೋಮನಾಯಕ, ರಮೇಶ್, ಮಲ್ಲೇಶ್, ಚೆಂಗುಮಣಿ, ಕೃಷ್ಣನಾಯಕ, ಕಂಡಕ್ಟರ್ ಸೋಮನಾಯಕ, ಕಂದಹಳ್ಳಿ ಮಹೇಶ್, ಪಾಳ್ಯ ಕೃಷ್ಣನಾಯಕ, ಚಂದ್ರಶೇಖರ್ ಇದ್ದರು.
ಚಾಮರಾಜನಗರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಈಚೆಗೆ ಕೋಮುಸೌಹಾರ್ದ ಹಾಳುಮಾಡುವ ಕೆಲವು ಘಟನೆಗಳು ನಡೆಯುತ್ತಿದ್ದರೂ ಸಮರ್ಪಕವಾಗಿ ಕಾರ್ಯ ನಿರ್ವಹಿಸದ ಜಿಲ್ಲಾ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಅವರಿಗೆ ಮನವಿ ಸಲ್ಲಿಸಲಾಯಿತು. ತಾಲ್ಲೂಕಿನ ಬದನಗುಪ್ಪೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ನಿರ್ಣಯಕ್ಕೆ ವಿರುದ್ಧವಾಗಿ ನಾಮಫಲಕ ಅಳವಡಿಕೆ ಹೊಂಗನೂರು ಗ್ರಾಮ ಪಂಚಾಯಿತಿ ನೀರುಗಂಟಿ ಆತ್ಮಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸದಿರುವುದು ಜ್ಯೋತಿಗೌಡನಪುರ ಗ್ರಾಮದಲ್ಲಿ ಬುದ್ಧ ಹಾಗೂ ಅಂಬೇಡ್ಕರ್ ನಾಮಫಲಕ ಧ್ವಂಸ ಪ್ರಕರಣದಲ್ಲಿ ನೈಜ ಆರೋಪಿಗಳನ್ನು ಬಂಧಿಸದಿರುವುದು ಪೊಲೀಸರ ಕರ್ತವ್ಯ ಲೋಪ ಎದ್ದು ಕಾಣುತ್ತದೆ. ಪ್ರಕರಣಗಳ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಬೇಕು ಅಥವಾ ನ್ಯಾಯಾಧೀಶರ ನೇತೃತ್ವದ ಸಮಿತಿಗೆ ಒಪ್ಪಿಸಬೇಕು ಎಂದು ಮನವಿ ಸಲ್ಲಿಸಲಾಯಿತು. ವಾರದೊಳಗೆ ಕ್ರಮ ಜರುಗಿಸದಿದ್ದರೆ ಜಿಲ್ಲಾಡಳಿತ ಭವನದ ಮುಂಭಾಗ ಹೋರಾಟ ಮಾಡುವ ಎಚ್ಚರಿಕೆ ನೀಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.