ADVERTISEMENT

ಹಾಸ್ಟೆಲ್‌ಗಳಲ್ಲಿ ಗುಣಮಟ್ಟದ ಆಹಾರ ಪೂರೈಸಿ: ಅಧಿಕಾರಿಗಳಿಗೆ ವಿನೋತ್ ಪ್ರಿಯಾ ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 8:35 IST
Last Updated 27 ಫೆಬ್ರುವರಿ 2026, 8:35 IST
ಚಾಮರಾಜನಗರದಲ್ಲಿ ಗುರುವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆರ್.ವಿನೋತ್ ಪ್ರಿಯಾ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು
ಚಾಮರಾಜನಗರದಲ್ಲಿ ಗುರುವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆರ್.ವಿನೋತ್ ಪ್ರಿಯಾ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು   

ಚಾಮರಾಜನಗರ: ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡುತ್ತಿರುವ ಹಾಗೂ ಹಾಸ್ಟೆಲ್‌ಗಳಲ್ಲಿ ಸಮರ್ಪಕ ಮೂಲಸೌಕರ್ಯಗಳು ಲಭ್ಯವಿರುವ ಬಗ್ಗೆ ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಬೇಕು ಎಂದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆರ್.ವಿನೋತ್ ಪ್ರಿಯಾ ಸೂಚನೆ ನೀಡಿದರು.

‌ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಹಾಸ್ಟೆಲ್‌ಗಳು, ವಸತಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿದ್ದು ಆಯಾ ಇಲಾಖೆಯ ಹಿರಿಯ ಅಧಿಕಾರಿಗಳು ನಿರಂತರವಾಗಿ ಭೇಟಿಕೊಡಬೇಕು.

ವಿದ್ಯಾರ್ಥಿಗಳಿಗೆ ನೀಡುತ್ತಿರುವ ಊಟ, ಉಪಹಾರ, ಕುಡಿಯುವ ನೀರಿನ ಗುಣಮಟ್ಟ ಪರಿಶೀಲಿಸಬೇಕು. ಭೇಟಿನೀಡಿದ ವರದಿಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.

ADVERTISEMENT

ಹಾಸ್ಟೆಲ್‌, ವಸತಿ ಶಾಲೆಗಳಿಗೆ ದಾಖಲಾಗಿರುವ ವಿದ್ಯಾರ್ಥಿಗಳ ಹಾಜರಾತಿ ಮೇಲೆ ನಿಗಾ ಇರಿಸಬೇಕು, ಗೈರು ಹಾಜರಾಗುತ್ತಿದ್ದರೆ ಅಥವಾ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದರೆ ಕಾರಣ ತಿಳಿದು ಸಮಸ್ಯೆ ಪರಿಹರಿಸಬೇಕು ಎಂದು ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು.

ಕಳೆದ ವರ್ಷದ ಎಸ್.ಎಸ್.ಎಲ್.ಸಿ, ಪಿಯುಸಿ ಫಲಿತಾಂಶದ ವಿವರ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ‘ಈ ವರ್ಷ ವಿದ್ಯಾರ್ಥಿಗಳು ಉತ್ತಮ ಅಂಕ ಹಾಗೂ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಪೂರಕ ಕ್ರಮಗಳನ್ನು ಕೈಗೊಳ್ಳಬೇಕು. ನಿರಂತರ ಶಾಲೆಗಳಿಗೆ ಗೈರಾಗುವ ಮಕ್ಕಳ ಮನೆಗಳಿಗೆ ತೆರಳಿ ಪೋಷಕರ ಜೊತೆ ಚರ್ಚಿಸಿ ಮರಳಿ ಮಕ್ಕಳನ್ನು ಶಾಲೆಗೆ ಕರೆತರಬೇಕು.

ಅಂಗನವಾಡಿಗಳಲ್ಲಿ ಮಕ್ಕಳ ಆರೋಗ್ಯ ಹಾಗೂ ದೈಹಿಕ ಬೆಳವಣಿಗೆಯ ಮೇಲೆ ನಿಗಾ ಇರಿಸಬೇಕು, ಮಕ್ಕಳಲ್ಲಿರುವ ಅಪೌಷ್ಟಿಕತೆ ಹಾಗೂ ಆರೋಗ್ಯ ತಪಾಸಣೆ ನಡೆಯಬೇಕು. ವಯಸ್ಸಿಗನುಗುಣವಾಗಿ ಮಕ್ಕಳು ಇರಬೇಕಾದ ತೂಕ, ಆರೋಗ್ಯ ಸ್ಥಿತಿ ತಿಳಿಯಬೇಕು, ಅಪೌಷ್ಟಿಕತೆ ಮಕ್ಕಳು ಕಂಡುಬಂದರೆ ವಿಶೇಷ ಕಾಳಜಿ ವಹಿಸಬೇಕು ಎಂದು ಉಸ್ತುವಾರಿ ಕಾರ್ಯದರ್ಶಿಗಳು ತಿಳಿಸಿದರು.

ಬೇಸಗೆ ಆರಂಭವಾಗಿದ್ದು ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಬಾಧಿಸದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಮಸ್ಯಾತ್ಮಕ ಗ್ರಾಮಗಳ ಮೇಲೆ ವಿಶೇಷ ನಿಗಾ ವಹಿಸಿ ಪರ್ಯಾಯ ವಿಧಾನಗಳ ಮೂಲಕ ನೀರು ಪೂರೈಸಬೇಕು. ಟ್ಯಾಂಕರ್‌ಗಳಲ್ಲಿ ನೀರು ಪೂರೈಸುವಾಗ ಪಾರದರ್ಶಕತೆ ಕಾಯ್ದುಕೊಳ್ಳಬೇಕು, ನಗರ, ಪಟ್ಟಣ, ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆರ್.ವಿನೋತ್ ಪ್ರಿಯಾ ಸೂಚಿಸಿದರು.


ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಮಾತನಾಡಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಲಾಗಿದೆ. ಸಮಸ್ಯೆ ಎದುರಾಗಬಹುದಾದ ಗ್ರಾಮಗಳ ವಿವರ ಪಡೆದು ಸಮಸ್ಯೆಗೆ ಸ್ಪಂದಿಸಲು ಸೂಚನೆ ನೀಡಲಾಗಿದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಿ.ಸಿ.ಶೃತಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.

‘ಕಾಮಗಾರಿ ತ್ವರಿತ ಪೂರ್ಣಗೊಳಿಸಿ’

ಅಮೃತ್ ಯೋಜನೆಯಡಿ ಕೈಗೆತ್ತಿಕೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳು ತ್ವರಿತ ಪೂರ್ಣಗೊಳ್ಳಬೇಕು. ರಸ್ತೆಗಳ ಮೇಲೆ ಕುಡಿಯುವ ನೀರು ಹರಿಯದಂತೆ ದುರಸ್ತಿ ಮಾಡಬೇಕು. ನಗರದ ಎಲ್ಲಾ ಭಾಗಗಳಿಗೂ ಸಮರ್ಪಕ ನೀರು ಸರಬರಾಜು ಮಾಡಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ನಿರ್ದೇಶನ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.