ADVERTISEMENT

ಪ್ರತಿಯೊಂದು ಮತವೂ ಅಮೂಲ್ಯ: ಸಿಇಒ

ಮತದಾರರ ದಿನಾಚರಣೆ: ಜಿಲ್ಲಾ ಮಟ್ಟದ ಸ್ಪರ್ಧೆಗಳಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2022, 7:22 IST
Last Updated 20 ನವೆಂಬರ್ 2022, 7:22 IST
ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಚಾಮರಾಜನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧಾ ಕಾರ್ಯಕ್ರಮವನ್ನು ಜಿ.ಪಂ ಸಿಇಒ ಕೆ.ಎ.ಗಾಯಿತ್ರಿ ಹಾಗೂ ಇತರ ಗಣ್ಯರು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟಿಸಿದರು
ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಚಾಮರಾಜನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧಾ ಕಾರ್ಯಕ್ರಮವನ್ನು ಜಿ.ಪಂ ಸಿಇಒ ಕೆ.ಎ.ಗಾಯಿತ್ರಿ ಹಾಗೂ ಇತರ ಗಣ್ಯರು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟಿಸಿದರು   

ಚಾಮರಾಜನಗರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ಚುನಾವಣೆಯಲ್ಲಿ ಮತ ಚಲಾಯಿಸುವ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ರಾಷ್ಟ್ರವನ್ನು ಕಟ್ಟುವಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಶನಿವಾರ ತಿಳಿಸಿದರು.

ಜಿಲ್ಲಾ ಸ್ವೀಪ್ ಸಮಿತಿ, ಕಾಲೇಜು ಶಿಕ್ಷಣ ಇಲಾಖೆ, ಚುನಾವಣಾ ಸಾಕ್ಷರತಾ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಯೋಗದೊಂದಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರತಿ ವರ್ಷ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತಿದ್ದು, 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕರು ಮತದಾನದಲ್ಲಿ ಭಾಗವಹಿಸುವಂತೆ ಹಾಗೂ ಮತದಾನದ ಪ್ರಾಮುಖ್ಯ ಮತ್ತು ಮತದಾನದ ಸಾಕ್ಷರತೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯ ಇದೆ’ ಎಂದರು.

ADVERTISEMENT

‘ಜಿಲ್ಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಒಟ್ಟು 309 ಮತದಾರರ ಸಂಘಗಳನ್ನು ರಚಿಸಲಾಗಿದ್ದು, ಈ ಮೂಲಕ ಮತದಾನದ ಶಿಕ್ಷಣ, ಅರಿವು ಮತ್ತು ಮತದಾನದ ಪ್ರಾಮುಖ್ಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ವಿವಿಧ ಚಟುವಟಿಕೆಗಳ ಮೂಲಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ’ ಎಂದರು.

ವಿಧಾನಸಭಾ ಚುನಾವಣೆಯು ಇನ್ನು ಕೆಲವು ತಿಂಗಳಲ್ಲಿ ನಡೆಯಲಿರುವುದರಿಂದ ಮತದಾನದ ಅರಿವು ಹಾಗೂ ಮಹತ್ವವನ್ನು ತಿಳಿಯಬೇಕಾಗಿದೆ. 18 ವರ್ಷ ತುಂಬಿದ ಪ್ರತಿಯೊಬ್ಬ ವಿದ್ಯಾರ್ಥಿಯೂ ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಬೇಕು. ಈಗಾಗಲೇ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ಚುನಾವಣಾ ಆಯೋಗ ಹೊರಡಿಸಿರುವ ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿ, ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದಲ್ಲಿ ಸೇರ್ಪಡೆ ಮಾಡಿಕೊಳ್ಳಲು ಹಾಗೂ ತಿದ್ದುಪಡಿ, ಇತರೆ ಬದಲಾವಣೆಗಳಿದ್ದಲ್ಲಿ ಖಾತರಿಪಡಿಸಿಕೊಳ್ಳಬೇಕು’ ಎಂದರು.

ಕಾಲೇಜು ಪ್ರಾಂಶುಪಾಲ ಡಾ.ಪಿ.ದೇವರಾಜು ಮಾತನಾಡಿದರು. ಸ್ವೀಪ್ ಸಂಚಾಲಕಿ, ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಚಂದ್ರಮ್ಮ, ಬೋಧಕರು, ವಿದ್ಯಾರ್ಥಿಗಳು ಇದ್ದರು.

‘ಮತದಾನದ ಅರಿವು ಅಗತ್ಯ’

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ನಗರದ ಸಂತಪೌಲರ ಪ್ರೌಢಶಾಲೆಯಲ್ಲಿಯೂ ಶನಿವಾರ ಜಿಲ್ಲಾಮಟ್ಟದ ಸ್ಪರ್ಧಾತ್ಮಕ ಚಟುವಟಿಕೆಗಳಾದ ಪ್ರಬಂಧ, ರಸಪ್ರಶ್ನೆ, ಭಿತ್ತಿಪತ್ರ ತಯಾರಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಜಿಲ್ಲಾ ಪಂಚಾಯಿತಿ ಸಿಇಒ ಮಾತನಾಡಿ, ‘ಚುನಾವಣಾ ಆಯೋಗದ ನಿರ್ದೇಶನದಂತೆ ಸ್ವೀಪ್ ಕಾರ್ಯಕ್ರಮಗಳ ಮುಖಾಂತರ ಪ್ರತಿಯೊಬ್ಬರಿಗೂ ಮತದಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಮತದಾನದ ಹಕ್ಕನ್ನು ಚಲಾಯಿಸುವ ಬಗ್ಗೆ ಅರಿವನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಮೂಡಿಸಬೇಕಾಗಿದೆ. ಮತದಾನದ ಮೂಲಕ ಸೂಕ್ತ ನಾಯಕರನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮದು’ ಎಂದರು.

‘ಎಲ್ಲ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವುದು ಮಹತ್ವದಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯು ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಗುರಿಯನ್ನು ಹೊಂದಬೇಕು’ ಎಂದರು.

ತಾಲ್ಲೂಕು ಮಟ್ಟದ ವಿವಿಧ ಶಾಲೆಗಳಿಂದ ಆಯ್ಕೆಯಾಗಿರುವ 55 ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಪ್ರಬಂಧ, ರಸಪ್ರಶ್ನೆ, ಭಿತ್ತಿಪತ್ರ ತಯಾರಿ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಯೋಜನಾ ಉಪ ಸಮನ್ವಾಯಾಧಿಕಾರಿ ಲಕ್ಷ್ಮಿಪತಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.