ADVERTISEMENT

ಗುಂಡ್ಲುಪೇಟೆ | ಕಾಡುಪ್ರಾಣಿ ಹಾವಳಿ ತಡೆಗೆ ಆಗ್ರಹ: ರಸ್ತೆ ತಡೆ, ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2025, 2:16 IST
Last Updated 30 ಸೆಪ್ಟೆಂಬರ್ 2025, 2:16 IST
ಗುಂಡ್ಲುಪೇಟೆ ತಾಲ್ಲೂಕಿನ ಕೇರಳ ರಾಷ್ಟ್ರೀಯ ಹೆದ್ದಾರಿಯ ಮದ್ದೂರು ಅರಣ್ಯ ಇಲಾಖೆ ಕಚೇರಿ ಎದುರು ಸಾಮೂಹಿಕ ನಾಯಕತ್ವ ರೈತ ಸಂಘಟನೆ ಮತ್ತು ಹಸಿರು ಸೇನೆ ಪದಾಧಿಕಾರಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು
ಗುಂಡ್ಲುಪೇಟೆ ತಾಲ್ಲೂಕಿನ ಕೇರಳ ರಾಷ್ಟ್ರೀಯ ಹೆದ್ದಾರಿಯ ಮದ್ದೂರು ಅರಣ್ಯ ಇಲಾಖೆ ಕಚೇರಿ ಎದುರು ಸಾಮೂಹಿಕ ನಾಯಕತ್ವ ರೈತ ಸಂಘಟನೆ ಮತ್ತು ಹಸಿರು ಸೇನೆ ಪದಾಧಿಕಾರಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು   

ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಸುತ್ತಮುತ್ತ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿದ್ದು, ಜಾನುವಾರು ಹಾಗೂ ಫಸಲುಗಳ ಮೇಲೆ ನಿರಂತರವಾಗಿ ದಾಳಿ ನಡೆಸಿ ಹಾಳು ಮಾಡುತ್ತಿವೆ. ಇದನ್ನು ತಡೆಯುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ’ ಎಂದು ಆರೋಪಿಸಿ ಸಾಮೂಹಿಕ ನಾಯಕತ್ವ ರೈತ ಸಂಘಟನೆ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಸೋಮವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಮದ್ದೂರು ಅರಣ್ಯ ಇಲಾಖೆ ಕಚೇರಿ ಎದುರು ಸೇರಿದ ಪದಾಧಿಕಾರಿಗಳು ರಸ್ತೆ ತಡೆದು ಮಾನವ ಸರಪಳಿ ನಿರ್ಮಿಸಿ, ಅರಣ್ಯ ಇಲಾಖೆ ಹಾಗೂ ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.

ರೈತ ಮುಖಂಡ ಷಣ್ಮುಖಸ್ವಾಮಿ ಮಾತನಾಡಿ, ‘ಬೇರಂಬಾಡಿ, ಕನ್ನೇಗಾಲ, ಚನ್ನಮಲ್ಲಿಪುರ ಭಾಗದಲ್ಲಿ ಮೂರು ತಿಂಗಳಿಂದ ನಿರಂತರವಾಗಿ ಹುಲಿ ಮತ್ತು ಚಿರತೆ ಕಾಣಿಸಿಕೊಳ್ಳುತ್ತಿದ್ದು, ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ಕೊಂದು ಹಾಕುತ್ತಿವೆ. ಇದರ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಸ್ಪಂದನೆ ಸಿಗುತ್ತಿಲ್ಲ’ ಎಂದು ಕಿಡಿಕಾರಿದರು.

ADVERTISEMENT

‘ಕಾಡು ಪ್ರಾಣಿಗಳ ಹಾವಳಿ ಸಮಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದರೆ ನಾವು ಬೇರೆ ಕಡೆ ಇದ್ದೇವೆ ಬರಲು ಮೂರು ಗಂಟೆ ಆಗುತ್ತದೆ ಎಂದು ಬೇಜಾವಾಬ್ದಾರಿ ಉತ್ತರ ನೀಡುತ್ತಾರೆ. ಇದರಿಂದ ರೈತರಿಗೆ ಸಮಸ್ಯೆ ಉಂಟಾಗುತ್ತಿದ್ದು, ಬೆಳೆದ ಬೆಳೆಗಳು ಕೈ ಸೇರದಂತಾಗಿದೆ. ಜೊತೆಗೆ ಜಮೀನುಗಳಿಗೆ ಹೋಗಲು ಭಯದ ವಾತಾವರಣ ನಿರ್ಮಾಣವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಚಾಮರಾಜನಗರ ಜಿಲ್ಲೆ ಶೇ 52ರಷ್ಟು ಅರಣ್ಯ ಪ್ರದೇಶ ಹೊಂದಿದೆ. ಗುಂಡ್ಲುಪೇಟೆ ತಾಲೂಕಿನಲ್ಲಿ ಬಂಡೀಪುರ ಅಭಯಾರಣ್ಯವಿರುವ ಕಾರಣ ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದೆ. ಇದರಿಂದ ರೈತರು ಮತ್ತು ಬೆಳೆಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಕೂಡಲೇ ಕಾಡು ಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಹಳ್ಳದಮಾದಹಳ್ಳಿ ಲೋಕೇಶ್, ಹೊನ್ನೇಗೌಡನಹಳ್ಳಿ ವೀರಭದ್ರಪ್ಪ, ಬೇರಂಬಾಡಿ ಗಿರಿ, ಶಶಿ, ಕೂತನೂರು ಗಣೇಶ್, ಮಾರಶೆಟ್ಟಿ, ಭೀಮನಬೀಡು ರಾಜು, ಮಹೇಶ್, ಪಾಪಣ್ಣ ಸೇರಿದಂತೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಮತ್ತು ಅಧ್ಯಕ್ಷೀಯ ಮಂಡಳಿ ಸದಸ್ಯರು ಹಾಜರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.