
ಚಾಮರಾಜನಗರ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಸಮಾಜಮುಖಿ ಕಾರ್ಯಗಳು ಮಾದರಿ, ಸರ್ಕಾರ ಮಾಡುವ ಕಾರ್ಯಗಳನ್ನು ಧರ್ಮಸ್ಥಳ ಸಂಸ್ಥೆಗಳು ಮಾಡುತ್ತಿವೆ ಎಂದು ರೋಟರಿ ಅಧ್ಯಕ್ಷ ಕಾಗಲವಾಡಿ ಚಂದ್ರು ಹೇಳಿದರು.
ತಾಲ್ಲೂಕಿನ ಚಂದಕವಾಡಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಸಾಮೂಹಿಕ ಶ್ರೀಲಕ್ಷ್ಮೀ ಪೂಜಾ ಸಮಿತಿ ಚಂದಕವಾಡಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಹಯೋಗದಲ್ಲಿ ಭಾನುವಾರ ನಡೆದ ಸಾಮೂಹಿಕ ಶ್ರೀಲಕ್ಷ್ಮೀ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಳೆದ 14 ವರ್ಷಗಳಿಂದ ಜಿಲ್ಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉತ್ತಮ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಟ್ಟಲು ನೆರವಾಗಿದೆ. ಧಾರ್ಮಿಕ ಸ್ಥಳಗಳ ಅಭಿವೃದ್ಧಿಯಾಗಿವೆ ಎಂದರು.
ಮಾಜಿ ಸಂಸದ ದಿ.ಆರ್.ಧ್ರುವನಾರಾಯಣ್ ಅವರ ಮನವಿಗೆ ಸ್ಪಂದಿಸಿದ ವೀರೇಂದ್ರ ಹೆಗ್ಗಡೆ ಜಿಲ್ಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಆರಂಭಿಸಿದರು. ಅಂದಿನಿಂದ ಇಂದಿನವರೆಗೂ ಪ್ರತಿವರ್ಷ ಸಮಾಜಮುಖಿ ಕಾರ್ಯಗಳು ನಡೆಯುತ್ತಿವೆ. ಮಹಿಳಾ ಸ್ವಸಹಾಯ ಸಂಘಗಳನ್ನು ರಚಿಸಿ ಮಹಿಳಾ ಸ್ವಾವಲಂಬನೆಗೆ ಒತ್ತು ನೀಡಲಾಗಿದೆ. ಗ್ರಾಮಗಳಲ್ಲಿರುವ ಕೆರೆಗಳನ್ನು ಅಭಿವೃದ್ಧಿ ಮಾಡಲಾಗಿದೆ.
ಪರಿಸರ, ಕೃಷಿ, ಆರೋಗ್ಯ, ಶಿಕ್ಷಣ, ವಿದ್ಯಾರ್ಥಿ ವೇತನ, ವಿಮೆ, ವಾತ್ಸಲ್ಯ ಮನೆ, ಹೈನುಗಾರಿಕೆಗೆ ಉತ್ತೇಜನ ನೀಡುವಂತಹ ಕಾರ್ಯಗಳು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ನಡೆದಿವೆ ಎಂದರು.
ಶ್ರೀಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷ ಗೋವಿಂದಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಜನಜಾಗೃತಿ ಸಂಸ್ಥೆಯ ಅಧ್ಯಕ್ಷ ಡಿ.ಪಿ.ಪಕ್ರಾಶ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಂಐಎಸ್ ಯೋಜನಾಧಿಕಾರಿ ಆರತಿ, ಯಳಂದೂರು ತಾಲ್ಲೂಕು ಕ್ಷೇತ್ರ ಯೋಜನಾಧಿಕಾರಿ ಆನಂದ್‌ಗೌಡ, ಬಸವರಾಜು ನಾಯಕ, ರಾಜಸ್ವ ನಿರೀಕ್ಷಕ ಜಯಪ್ಪ ಮಾತನಾಡಿದರು. ಶ್ರೀಕಾಂತ್ ಧಾರ್ಮಿಕ ಉಪನ್ಯಾಸ ನೀಡಿದರು.
ಶಿವನಂಕಾರಪ್ಪ, ಮಹದೇವ, ಪುಟ್ಟಸ್ವಾಮಿ, ಸಾಕಯ್ಯ, ನಾಗರಾಜು, ಮಂಜುನಾಥ್, ಮಲ್ಲೇಶ್, ಮಹದೇವಸ್ವಾಮಿ, ಎಂ.ಎಂ.ಶಶಿಕುಮಾರ್, ಕಾರ್ಯಕರ್ತರು, ಸೇವಾ ಪ್ರತಿನಿಧಿಗಳು, ಸಿಎಸ್‌ಸಿ ಸೇವಾದಾರರು, ಸ್ವ-ಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಕೋಮಿನ ಮುಖಂಡರು, ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.