ADVERTISEMENT

ಗಡಿ ಭಾಗಗಳಲ್ಲಿ ಕಳ್ಳಸಾಗಣೆ ಹೆಚ್ಚು

ಮಹಿಳೆ, ಮಕ್ಕಳ ಕಳ್ಳಸಾಗಣೆ ತಡೆಯಲು ಸಾರ್ವಜನಿಕರ ಸಹಕಾರ ಬೇಕು– ನ್ಯಾಯಾಧೀಶ ಡಿ.ವಿ.ಪಾಟೀಲ ಅಭಿಮತ

​ಪ್ರಜಾವಾಣಿ ವಾರ್ತೆ
Published 28 ಜನವರಿ 2020, 15:37 IST
Last Updated 28 ಜನವರಿ 2020, 15:37 IST
ಕಾರ್ಯಾಗಾರವನ್ನು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಡಿ.ವಿ.ಪಾಟೀಲ ಉದ್ಘಾಟಿಸಿದರು
ಕಾರ್ಯಾಗಾರವನ್ನು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಡಿ.ವಿ.ಪಾಟೀಲ ಉದ್ಘಾಟಿಸಿದರು   

ಚಾಮರಾಜನಗರ: ರಾಜ್ಯದ ಗಡಿ ಭಾಗಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಕಳ್ಳಸಾಗಣೆ ಪ್ರಕರಣಗಳು ಹೆಚ್ಚು ನಡೆಯುತ್ತಿದ್ದು, ಈ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಡಿ.ವಿ.ಪಾಟೀಲ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ, ‘ಮಹಿಳೆಯರ ಮತ್ತು ಮಕ್ಕಳ ಅಕ್ರಮ ಸಾಗಾಣಿಕೆ ತಡೆಗಟ್ಟುವಿಕೆ, ಬಾಲ್ಯವಿವಾಹ ನಿಷೇಧ’ ಕುರಿತ ವಿಭಾಗೀಯಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಮಹಿಳೆ ಮತ್ತು ಮಕ್ಕಳನ್ನು ಜೀತ ಪದ್ಧತಿ, ಲೈಂಗಿಕ ಚಟುವಟಿಕೆಗಳಿಗೆ ಹಾಗೂ ದೇಹದ ಅಂಗಾಂಗಗಳ ಮಾರಾಟಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಇದನ್ನು ತಡೆಗಟ್ಟಲು ಸಾರ್ವಜನಿಕರು ಸರ್ಕಾರದೊಂದಿಗೆ ಕೈ ಜೋಡಿಸಬೇಕು. ಇದು ಜಿಲ್ಲೆ, ರಾಜ್ಯ, ದೇಶದ ಸಮಸ್ಯೆಯಾಗಿರದೆ ಅಂತರರಾಷ್ಟ್ರೀಯ ಸಮಸ್ಯೆಯಾಗಿರುವುದರಿಂದ ಇಲಾಖೆ ಹಾಗೂ ಸ್ವಯಂಸೇವಾ ಸಂಘ ಸಂಸ್ಥೆಗಳು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಮಾತನಾಡಿ, ‘ಮಹಿಳೆಯರು ಮತ್ತು ಮಕ್ಕಳಿಗೆ ಸಂವಿಧಾನದಲ್ಲಿ ವಿಶೇಷ ಅವಕಾಶ ನೀಡಿದ್ದರೂ ದೌರ್ಜನ್ಯಗಳಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಬಾಲ್ಯ ವಿವಾಹ ಕಾನೂನುಬಾಹಿರ ಎಂದು ಜನರಲ್ಲಿಯೇ ಜಾಗೃತಿ ಮೂಡಬೇಕು. ಇಂತಹ ಪ್ರಕರಣಗಳು ಆಗುವ ಮೊದಲೇ ಎಚ್ಚರಿಕೆ ವಹಿಸಬೇಕು’ ಎಂದು ತಿಳಿಸಿದರು.

‘ಪೋಲಿಸ್ ಇಲಾಖೆಯು ಮಹಿಳೆ ಮತ್ತು ಮಕ್ಕಳ ಕಳ್ಳಸಾಗಣಿಕೆಯನ್ನು ತಡೆಗಟ್ಟುವುದಕ್ಕಾಗಿ ಕ್ರಮಗಳನ್ನು ತೆಗೆದುಕೊಳ್ಳ್ಳುತ್ತಿದೆ. ಮಹಿಳೆಯರನ್ನು ಅನೈತಿಕ ಚಟುವಟಿಕೆಗಳಿಗೆ ಬಳಸಿಕೊಂಡಿರುವ ಮಾಹಿತಿ ಇದ್ದರೆ ತಕ್ಷಣವೇ ಪೋಲಿಸರಿಗೆ ತಿಳಿಸಬೇಕು. ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಸಹಕರಿಸಬೇಕಿದೆ’ ಎಂದುಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ತಿಳಿಸಿದರು.

ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಕಲ್ಯಾಣ ಇಲಾಖೆ ವತಿಯಿಂದ ವಿಶೇಷ ಚೇತನ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಲಾಯಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜೆ.ವಿಶಾಲಾಕ್ಷಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕ ದಯಾನಂದ್, ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಯಾಲಕ್ಕಿಗೌಡ, ಮೈಸೂರು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸ್ನೇಹಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕಿ ರೇವತಿ, ಉಪನಿರ್ದೇಶಕ ಬಿ. ಬಸವರಾಜು ಇದ್ದರು.

**
ಕಾಡು ಪ್ರಾಣಿಗಳಿಗೆ ತೊಂದರೆಯಾಗದಂತೆ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಇಂತಹ ಕಾರ್ಯಕ್ರಮಗಳಿಂದ ಬಂಡೀಪುರ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗುತ್ತದೆ
-ಪುನಟಿ ಶ್ರೀಧರ್‌, ಪ್ರಧಾನ ಅರಣ್ಯಸಂರಕ್ಷಣಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.