ADVERTISEMENT

ವಿಶ್ವ ಅಂಗವಿಕಲರ ದಿನಾಚರಣೆ 3ರಂದು

1ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಆಯೋಜನೆ: ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಲು ಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2025, 4:03 IST
Last Updated 26 ನವೆಂಬರ್ 2025, 4:03 IST
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವಿಶ್ವ ಅಂಗವಿಕಲರ ದಿನಾಚರಣೆ ಪೂರ್ವಭಾವಿಯಾಗಿ ಸಂಘ–ಸಂಸ್ಥೆಗಳ ಮುಖಂಡರು, ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸಭೆ ನಡೆಸಿದರು
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವಿಶ್ವ ಅಂಗವಿಕಲರ ದಿನಾಚರಣೆ ಪೂರ್ವಭಾವಿಯಾಗಿ ಸಂಘ–ಸಂಸ್ಥೆಗಳ ಮುಖಂಡರು, ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸಭೆ ನಡೆಸಿದರು   

ಚಾಮರಾಜನಗರ: ಡಿ.3ರಂದು ನಡೆಯಲಿರುವ ವಿಶ್ವ ಅಂಗವಿಕಲರ ದಿನಾಚರಣೆಗೆ ಪೂರ್ವಭಾವಿಯಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವಿಶ್ವ ಅಂಗವಿಕಲರ ದಿನಾಚರಣೆ ಸಂಬಂಧ ಸಂಘ–ಸಂಸ್ಥೆಗಳ ಮುಖಂಡರು, ಪ್ರತಿನಿಧಿಗಳು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

3ರಂದು ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಅರ್ಥಪೂರ್ಣವಾಗಿ ಕಾರ್ಯಕ್ರಮ ಆಚರಿಸಲು ಉಪಸಮಿತಿಗಳನ್ನು ನೇಮಿಸಲಾಗಿದ್ದು ಸಮಿತಿಯ ಅಧ್ಯಕ್ಷರು, ಸದಸ್ಯ ಕಾರ್ಯದರ್ಶಿಗಳು ಹಾಗೂ ಸದಸ್ಯರು ನಿಗದಿ ಮಾಡಿರುವ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಣೆ ಮಾಡಬೇಕು ಎಂದರು.

ADVERTISEMENT

ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಡಿ.1ರಂದು ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಆಯೋಜಿಸಬೇಕು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳು ಕ್ರೀಡೆಗಳ ಆಯೋಜನೆಗೆ ಕ್ರೀಡಾಂಗಣವನ್ನು ಸಜ್ಜುಗೊಳಿಸಬೇಕು, ಭಾಗವಹಿಸುವವರಿಗೆ ಕುಡಿಯುವ ನೀರು, ಉಪಾಹಾರ, ಸಾರಿಗೆ ವ್ಯವಸ್ಥೆ ಸಹಿತ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

3ರಂದು ಜಾಥಾ, ವೇದಿಕೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಬೇಕು. ವಿಶೇಷ ಸಾಮರ್ಥ್ಯವುಳ್ಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ವಿಶೇಷ ಸಾಧನೆ ಮಾಡಿರುವ ಅಂಗವಿಕಲರನ್ನು ಗುರುತಿಸಿ ಸನ್ಮಾನಿಸಬೇಕು ಎಂದರು.

ಕಾರ್ಯಕ್ರಮ ನಡೆಯುವ ದಿನ ಆರೋಗ್ಯ ತಪಾಸಣಾ ಶಿಬಿರ, ಯುಡಿಐಡಿ ಕಾರ್ಡ್ ಸೌಲಭ್ಯಕ್ಕಾಗಿ ನೋಂದಣಿ ಶಿಬಿರ ಆಯೋಜಿಸಬೇಕು. ಕ್ರೀಡಾಕೂಟ ಹಾಗೂ ಕಾರ್ಯಕ್ರಮ ಲೋಪಗಳಿಲ್ಲದೆ ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದರು.

ಇದೇವೇಳೆ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಕಾರ್ಯಕ್ರಮ ಆಯೋಜನೆ ಸಂಬಂಧ ಸಲಹೆಗಳನ್ನು ನೀಡಿದರು. ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಸುರೇಶ್, ಜಿಲ್ಲಾ ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಕಲ್ಯಾಣಾಧಿಕಾರಿ ಡಾ.ಕೆ.ಎನ್.ಮಂಜುನಾಥ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಎಂ.ವಿ.ಸುಧಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್‌, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ನಿರ್ದೇಶಕ ಪ್ರಭುಸ್ವಾಮಿ,  ಸಂಘಟನೆಗಳ ಮುಖಂಡರಾದ ಸಿದ್ದಯ್ಯ, ರಮೇಶ್, ಕೃಷ್ಣಮೂರ್ತಿ, ಕುಮಾರ್ ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.