ADVERTISEMENT

ಅಕ್ರಮ ಚಟುವಟಿಕೆ ಸಹಿಸುವುದಿಲ್ಲ: ಐಜಿಪಿ

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 12:29 IST
Last Updated 19 ಜನವರಿ 2021, 12:29 IST
ದಕ್ಷಿಣ ವಲಯ ಐಜಿಪಿ ಪ್ರವೀಣ್‌ ಮಧುಕರ್‌ ಪವಾರ್‌ ಅವರು ವಿವಿಧ ಕಾಮಗಾರಿಗಳಿಗೆ ಮಂಗಳವಾರ ಚಾಲನೆ ನೀಡಿದರು
ದಕ್ಷಿಣ ವಲಯ ಐಜಿಪಿ ಪ್ರವೀಣ್‌ ಮಧುಕರ್‌ ಪವಾರ್‌ ಅವರು ವಿವಿಧ ಕಾಮಗಾರಿಗಳಿಗೆ ಮಂಗಳವಾರ ಚಾಲನೆ ನೀಡಿದರು   

ಚಾಮರಾಜನಗರ: ಜಿಲ್ಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ದಕ್ಷಿಣ ವಲಯ ಐಜಿಪಿ ಪ್ರವೀಣ್‌ ಮಧುಕರ್‌ ಪವಾರ್‌ ಅವರು ಮಂಗಳವಾರ ಹೇಳಿದರು.

ನಗರದ ಜಿಲ್ಲಾ ಶಸಸ್ತ್ರ ಮೀಸಲು (ಡಿಎಆರ್‌) ಕೇಂದ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನಡೆಸಿದ ಬಳಿಕ ಮಾತನಾಡಿದ ಅವರು, ‘ನಾನು ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ್ದೇನೆ. ಈಗಾಗಲೇ ನಾಲ್ಕು ಜಿಲ್ಲೆಗಳಿಗೆ ಭೇಟಿ ನೀಡಿದ್ದೇನೆ. ಅಕ್ರಮ ಚಟುವಟಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಎಲ್ಲ ಜಿಲ್ಲೆಗಳಲ್ಲೂ ಇದಕ್ಕೆ ಒತ್ತು ನೀಡುತ್ತೇವೆ’ ಎಂದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ, ಮರಳುಗಣಿಗಾರಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡುತ್ತಿದ್ದೇನೆ. ಅಧಿಕಾರಿಗಳೊಂದಿಗೆ ಎಲ್ಲ ವಿಚಾರಗಳ ಬಗ್ಗೆ ಚರ್ಚೆ ನಡೆಸಿ, ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು’ ಎಂದು ಹೇಳಿದರು.

ADVERTISEMENT

₹6.23 ಕೋಟಿ ವೆಚ್ಚದ ಕಾಮಗಾರಿ: ಡಿಎಆರ್‌ ಕೇಂದ್ರ,ಸಂತೇಮರಹಳ್ಳಿ, ಯಳಂದೂರು, ಗುಂಡ್ಲುಪೇಟೆ ಹಾಗೂ ಬೇಗೂರು ಪೊಲೀಸ್ ವಸತಿ ಗೃಹಗಳ ಸುತ್ತ ಕಾಂಪೌಂಡ್‌, ಒಳ ಚರಂಡಿ, ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಐಜಿಪಿ ಅವರು ಚಾಲನೆ ನೀಡಿದರು.

‘₹6.23 ಕೋಟಿ ಬಿಡುಗಡೆಯಾಗಿದೆ. ಹಲವು ಸಮಯದಿಂದ ಈ ಕೆಲಸಗಳು ಬಾಕಿ ಇದ್ದವು. ತಕ್ಷಣವೇ ಕಾಮಗಾರಿ ಆರಂಭಿಸಿ, ಮಾರ್ಚ್‌ ಒಳಗಾಗಿ ಮುಕ್ತಾಯಗೊಳಿಸಲಾಗುವುದು’ ಎಂದು ಅವರು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್, ಡಿವೈಎಸ್ಪಿಗಳಾದ ಪ್ರಿಯದರ್ಶಿನಿ ಸಾಣೆಕೊಪ್ಪ, ನಾಗರಾಜ ಜಿ. ಅನ್ಸರ್ ಅಲಿ (ಸಿಆರ್‌ಬಿ), ಡಿಎಆರ್ ಡಿವೈಎಸ್ಪಿ ಸೋಮಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.