ಗೌರಿಬಿದನೂರು: ಅಂಗನವಾಡಿ ಕೇಂದ್ರಗಳನ್ನು ವೇದಾಂತ ಫೌಡೇಶನ್ ಎಂಬ ಸರ್ಕಾರೇತರ ಸಂಸ್ಥೆ ಸುಪರ್ದಿಗೆ ನೀಡಿರುವುದು ನ್ಯಾಯಸಮ್ಮತವಲ್ಲ. ಇದು ಅಂಗನವಾಡಿಗಳನ್ನು ಖಾಸಗೀಕರಣಗೊಳಿಸುವ ಹುನ್ನಾರವೆಂದು ಅಂಗನವಾಡಿ, ಅಕ್ಷರದಾಸೋಹ, ಆಶಾ ಕಾರ್ಯಕರ್ತೆಯರು ಸಿಐಟಿಯು ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಿಂದ ಮೆರವಣಿಗೆ ಹೊರಟ ಕಾರ್ಯಕರ್ತರು ಅಂಬೇಡ್ಕರ್‌ವೃತ್ತ, ನಾಗಯ್ಯರೆಡ್ಡಿ ವೃತ್ತ ಹಾಗೂ ಗಾಂಧಿ ವೃತ್ತದ ಮೂಲಕ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ವಿರುದ್ಧ ಘೋಷಣೆ ಕೂಗಿದರು.
ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಗಂಗಪ್ಪ ಮಾತನಾಡಿ, ಅಸಂಘಟಿತ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ. ಅಸಂಘಟಿತ ಕಾರ್ಮಿಕರಿಗೆ ಕನಿಷ್ಠ 10 ಸಾವಿರ ರೂಪಾಯಿ ಮಾಸಿಕ ವೇತನ ನೀಡಬೇಕು. ಹೊರ ಗುತ್ತಿಗೆ ಆಧಾರದಲ್ಲಿ ಕಾರ್ಮಿಕರನ್ನು ನೇಮಿಸುವುದನ್ನು ನಿಷೇಧಿಸಬೇಕು. ವೇದಾಂತ ಫೌಂಡೇಷನ್ ಸಂಸ್ಥೆಯನ್ನು ರಾಜ್ಯದಿಂದ ತೊಲಗಿಸಬೇಕು. ಈ ಹಿನ್ನೆಲೆಯಲ್ಲಿ ಜುಲೈ 10ರಂದು ರಾಜ್ಯದ ಎಲ್ಲಾ ಜಿಲ್ಲಾ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾತ್ರ ವೇದಾಂತ ಫೌಂಡೇಷನ್‌ಗೆ ಅಂಗನವಾಡಿ ಜವಾಬ್ದಾರಿ ನೀಡುವ ಉದ್ದೇಶ ಎನು ಎಂದು ಪ್ರಶ್ನಿಸಿದರು. ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ತಾಲ್ಲೂಕು ಕೂಲಿ ಕಾರ್ಮಿಕರ ಸಂಘಟನೆ ಅಧ್ಯಕ್ಷ ಸಿ.ಸಿ.ಅಶ್ವತ್ಥಪ್ಪ, ಪ್ರಾಂತ ರೈತ ಸಂಘದ ಅಧ್ಯಕ್ಷ ರವಿಚಂದ್ರರೆಡ್ಡಿ, ಆನೂಡಿ ನಾಗರಾಜ್, ಅನ್ವರ್‌ಬಾಷಾ, ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವೆಂಕಟಲಕ್ಷ್ಮಮ್ಮ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.