ADVERTISEMENT

ಊಲವಾಡಿ: ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2012, 9:05 IST
Last Updated 18 ಅಕ್ಟೋಬರ್ 2012, 9:05 IST

ಚಿಂತಾಮಣಿ: ಪರಿಶಿಷ್ಟ ಜಾತಿ ಕಾಲೊನಿಯ ಜನತೆ ಎದುರಿಸುತಿರುವ ಸಮಸ್ಯೆಗಳಿಗೆ ಗ್ರಾ.ಪಂ.ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಮಾದಿಗ ದಂಡೋರ ಸಂಘಟನೆಯ ನೇತೃತ್ವದಲ್ಲಿ ಗ್ರಾ.ಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ಊಲವಾಡಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಗ್ರಾಮದ ಕಾಲೊನಿಯಲ್ಲಿ ಸುಮಾರು 110 ಕುಟುಂಬಗಳು ವಾಸ ಮಾಡುತ್ತಿವೆ. ಆದರೆ ಸರ್ಮಪಕವಾಗಿ ಕುಡಿಯುವ ನೀರು ಬರುತ್ತಿಲ್ಲ. ಬೀದಿ ದೀಪಗಳು  ಕೆಟ್ಟುಹೋಗಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಕೊಳಚೆ ನೀರು ಮನೆಗಳ ಮುಂದೆ ನಿಂತು ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದರೂ ಗ್ರಾ.ಪಂ. ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ,  ಭಾನುವಾರ ಬಿದ್ದ ಮಳೆ ನೀರು ಮನೆಗಳಿಗೆ ನುಗ್ಗಿದ್ದರಿಂದ ತೀವ್ರ ಸಂಕಷ್ಟ ಎದುರಿಸಬೇಕಾಯಿತು ಎಂದು ಪ್ರತಿಭಟನಕಾರರು ಅಧಿಕಾರಿಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾ.ಪಂ.ಆಡಳಿತ ಮಂಡಳಿಯ ಕಾರ್ಯವೈಖರಿ  ಸಮಸ್ಯೆಗಳಿಗೆ ಕಾರಣ ಎಂದ ಆರೋಪಿಸಿದರು.
ತಾ.ಪಂ ಕಾರ್ಯನಿರ್ವಹಣಾಧಿಕಾರಿ ಡಾ.ಆರ್.ಸುಬ್ರಾನಾಯಕ್ ಸ್ಥಳಕ್ಕೆ ಭೇಟಿ ನೀಡಿ ಬೇಡಿಕೆಗಳನ್ನು ಶೀಘ್ರದಲ್ಲಿಯೆ ಈಡೇರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.
ಮಾದಿಗ ದಂಡೋರ ಸಂಘಟನೆ ಜಿಲ್ಲಾಧ್ಯಕ್ಷ ಎಂ.ವಿ.ರಾಮಪ್ಪ, ಗ್ರಾಮದ ಮುಖಂಡರಾದ ಮೇಸ್ತ್ರಿ ವೆಂಕಟೇಶಪ್ಪ, ಪೆದ್ದನ್ನ, ಮುನಿಶಾಮಪ್ಪ, ನಾರಾಯಣಸ್ವಾಮಿ, ಮಂಜುನಾಥ, ಶಿವ, ಶ್ರೀನಿವಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.