ಚಿಕ್ಕಬಳ್ಳಾಪುರ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ಸಲ್ಲಿಸಿರುವ ವರದಿಯನ್ನು ಸರ್ಕಾರ ಅನುಷ್ಠಾನಗೊಳಿಸಬೇಕು, ಒಳಮೀಸಲಾತಿ ಸೌಲಭ್ಯವನ್ನು ಜಾರಿಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ಅವರು, `ಬೇಡಿಕೆಗಳನ್ನು ಈಡೇರಿಸುವತ್ತ ಅನಗತ್ಯ ನಿರ್ಲಕ್ಷ್ಯ ತೋರಲಾಗುತ್ತಿದ್ದು, ಮಾದಿಗ ಸಮುದಾಯದವರಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ~ ಎಂದು ಆರೋಪಿಸಿದರು.
ಹೋರಾಟ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಶಂಕರಪ್ಪ ಮಾತನಾಡಿ, `ಒಳಮೀಸಲಾತಿಯನ್ನು ಜಾರಿಗೆ ತರುವಂತೆ ಆಗ್ರಹಿಸಿ ಹಲವು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದ್ದರೂ ಸರ್ಕಾರ ಇದುವರೆಗೆ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ.
ಇಲ್ಲಸಲ್ಲದ ನೆಪಗಳನ್ನು ಹೇಳುತ್ತ ಕ್ರಮ ಕೈಗೊಳ್ಳದೇ ನಿರಾಸಕ್ತಿ ತೋರುತ್ತಿರುವ ಸರ್ಕಾರ ಕೂಡಲೇ ಒಳ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು~ ಎಂದರು. `ದೇಶದ ಉಪಪ್ರಧಾನಿ ಬಾಬು ಜಗಜೀವನರಾಂ ಜಯಂತಿ ಸರ್ಕಾರಿ ಹಬ್ಬವನ್ನಾಗಿ ಆಚರಿಸಬೇಕು. ಮಾದಿಗ ಸಮುದಾಯಕ್ಕೆ ಪ್ರತ್ಯೇಕ ನಿಗಮ ಮಂಡಳಿ ರಚಿಸಬೇಕು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ಮೀಸಲು ಕ್ಷೇತ್ರವನ್ನಾಗಿ ಘೋಷಿಸಬೇಕು~ ಎಂದು ತಿಳಿಸಿದರು. ಸಂಘಟನೆ ಕಾರ್ಯದರ್ಶಿ ಕೈವಾರ ದೇವರಾಜ್ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.