ಶಿಡ್ಲಘಟ್ಟ: ಜಿಲ್ಲಾಧಿಕಾರಿ ಡಾ.ಎನ್.ಮಂಜುಳಾ ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಎಸ್.ಶೇಖರಪ್ಪ ಅವರು ತಾಲ್ಲೂಕಿನಲ್ಲಿ ಪ್ರವಾಸ ಕೈಗೊಂಡು ಕುಡಿಯುವ ನೀರಿನ ಲಭ್ಯತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ತಾಲ್ಲೂಕಿನ ಅಬ್ಲೂಡು ಗ್ರಾಮಕ್ಕೆ ಭೇಟಿ ನೀಡಿ ಶಾಸಕರ ಕ್ಷೇತ್ರದ ಅಭಿವೃದ್ಧಿ ನಿಧಿಯಿಂದ ರೂ.3 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಸಮುದಾಯ ಭವನ ವೀಕ್ಷಿಸಿದರು.
ದಿಬ್ಬೂರಹಳ್ಳಿ ಪಾಪಾಗ್ನಿ ನದಿಗೆ ಅಡ್ಡಲಾಗಿ ಜಲ ಮರುಪೂರಣ ಯೋಜನೆಯಡಿಯಲ್ಲಿ ರೂ.15 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಚೆಕ್ ಡ್ಯಾಂ ಕಾಮಗಾರಿಯನ್ನು ಪರಿಶೀಲಿಸಿದರು.
ದಿಬ್ಬೂರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡಹಳ್ಳಿ ಗ್ರಾಮದ ಪರಿಮಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರೂ.80 ಸಾವಿರ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಚರಂಡಿ ಕಾಮಗಾರಿಯನ್ನು ನಿಯಮಾನುಸಾರ ಅನುಷ್ಠಾನಗೊಳಿಸಬೇಕೆಂದು ನಿರ್ದೇಶನ ನೀಡಿದರು.
ಆಟಗೊಲ್ಲಹಳ್ಳಿ ಗ್ರಾಮದಲ್ಲಿ ರೂ.5.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಚೆಕ್ ಡ್ಯಾಂ ಕಾಮಗಾರಿ ಪರಿಶೀಲಿಸಿ ಕಿರು ನೀರು ಸರಬರಾಜು ಯೋಜನೆಯಡಿಯಲ್ಲಿ ಕೊರೆದಿರುವ ಕೊಳವೆ ಬಾವಿಯಲ್ಲಿ ಮೋಟಾರ್ ಪಂಪ್ ಬಿದ್ದು ಹೋಗಿದ್ದು ಅದನ್ನು ತೆಗೆಯಲು ಸಾಧ್ಯವಾಗದ ಕಾರಣ ನಕ್ಕಲಹಳ್ಳಿ ಕೊಳವೆಬಾವಿಯ ಮೂಲಕ ಆಟಗೊಲ್ಲಹಳ್ಳಿ ಗ್ರಾಮಕ್ಕೆ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಈಗಲೇಟಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಸ್ಥಳದ ಇಕ್ಕಟ್ಟಿನಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರವನ್ನು ಸಮೀಪದಲ್ಲಿರುವ ಸಮುದಾಯ ಭವನವನ್ನು ದುರಸ್ಥಿಗೊಳಿಸಿ ಅಲ್ಲಿಗೆ ಸ್ಥಳಾಂತರಿಸಬೇಕೆಂದು ಸೂಚಿಸಿದರು.
ತಾಲ್ಲೂಕಿನ ಗಡಿ ಪ್ರದೇಶವೆಂದು ಗುರುತಿಸಿಕೊಂಡಿರುವ ಸಾದಲಿ ಗ್ರಾಮ ಪಂಚಾಯಿತಿ ಕೇಂದ್ರಕ್ಕೆ ಭೇಟಿ ನೀಡಿ ಶಿಥಿಲಾವಸ್ಥೆಯಲ್ಲಿರುವ ಪಂಚಾಯಿತಿ ಕಟ್ಟಡವನ್ನು ದುರಸ್ಥಿಗೊಳಿಸಲು ಕಾರ್ಯದರ್ಶಿಗೆ ಆದೇಶಿಸಿದರು.
ಗ್ರಾಮದಲ್ಲಿ ನಿವೇಶನರಹಿತರಿಗೆ ನಿವೇಶನ ಸೌಲಭ್ಯ ಕಲ್ಪಿಸುವ ಸಲುವಾಗಿ ಸ್ಥಳಪರಿಶೀಲಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸಾದಲಿ ಈಶ್ವರ ದೇವಸ್ಥಾನವನ್ನು ಪರಿಶೀಲಿಸಿದ ಸಂದರ್ಭದಲ್ಲಿ ಶಿಥಿಲವಾಗಿರುವ ದೇವಾಲಯವನ್ನು ದುರಸ್ಥಿಗೊಳಿಸಲು ಕ್ರಮ ಕೈಗೊಳ್ಳೆಬೇಕೆಂದು ಗ್ರಾಮಸ್ಥರು ಮನವಿ ಮಾಡಿದರು. ಈ ಸಂಬಂಧ ದೇವಾಲಯವನ್ನು ಅಭಿವೃದ್ದಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ತಹಶೀಲ್ದಾರ್‌ಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ನಲ್ಲಪ್ಪನಹಳ್ಳಿ ಗ್ರಾಮದಲ್ಲಿ ನೀರಿನ ಸಮಸ್ಯೆ ಹಾಗೂ ಕಾಂಕ್ರೀಟ್ ರಸ್ತೆಯ ನಿರ್ಮಾಣಕ್ಕೆ ತಾಲ್ಲೂಕು ಕಾರ್ಯನಿರ್ವಾಹಣಾಧಿಕಾರಿಗಳಿಗೆ ಸೂಚನೆ ನೀಡಿ, ಅಗತ್ಯವಾದ ಅನುದಾನವನ್ನು ಸರ್ಕಾರದಿಂದ ಮಂಜೂರು ಮಾಡಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಎನ್.ನಾಗರಾಜ್, ಸಹಾಯಕ ಕಾರ್ಯಪಾಲಕ ಅಭಿಯಂತರ, ಪಿ.ವಿ.ನಾಗಪ್ಪ, ತಹಶೀಲ್ದಾರ್ ಎಲ್.ಬೀಮನಾಯಕ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ಡಾ.ಸುಬ್ರಾನಾಯಕ್, ಸಹಾಯಕ ಎಂಜಿನಿಯರ್ ರಾಮಲಿಂಗಾರೆಡ್ಡಿ, ಜಮೀರ್ ಅಹಮದ್, ಕೇಶವಮೂರ್ತಿ ನಾರಾಯಣಸ್ವಾಮಿ, ರವಿ ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.