ADVERTISEMENT

ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2013, 10:08 IST
Last Updated 6 ಏಪ್ರಿಲ್ 2013, 10:08 IST

ಚಿಕ್ಕಬಳ್ಳಾಪುರ: `ಕೇಂದ್ರ ಮತ್ತು ರಾಜ್ಯ ಚುನಾವಣೆ ಆಯೋಗ ಶಿಸ್ತುಬದ್ಧವಾಗಿ, ಪಾರದರ್ಶಕತೆಯಿಂದ ವಿಧಾನಸಭೆ ಚುನಾವಣೆ ನಡೆಸಲು ಬಯಸಿದೆ. ಆಯೋಗದ ನಿರೀಕ್ಷೆಯಂತೆ ಜಿಲ್ಲೆಯಲ್ಲಿ ಸುವ್ಯವಸ್ಥಿತವಾಗಿ ಚುನಾವಣೆ ನಡೆಸಲು ಪ್ರಯತ್ನಿಸಲಾಗುವುದು' ಎಂದು ನೂತನ ಜಿಲ್ಲಾಧಿಕಾರಿ ವಿ.ಶಂಕರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, `ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೇ ಶಾಂತಿಯುತ ಚುನಾವಣೆ ನಡೆಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು' ಎಂದರು.

`ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕಿದ್ದು, ಇದಕ್ಕೆ ಚುನಾವಣೆ ಆಯೋಗ ಆದ್ಯತೆ ನೀಡಿದೆ. ಮತದಾನಕ್ಕೆ ಸಂಬಂಧಿಸಿದಂತೆ ಜಾಗೃತಿ ಮೂಡಿಸಲೆಂದೇ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ತಾಲ್ಲೂಕು ಕೇಂದ್ರಗಳಲ್ಲಿ ಜಾಗೃತಿ ಸಂದೇಶ ಫಲಕವನ್ನು ಅಳವಡಿಸುವ ಜೊತೆಗೆ ಇತರ ಕಾರ್ಯಕ್ರಮ ಕೂಡ ಕೈಗೊಳ್ಳಲಾಗುವುದು' ಎಂದರು.

`ಬೇರೆ ಜಿಲ್ಲೆಗಳಿಗೆ ಹೋಲಿಸಿದಲ್ಲಿ ಇಲ್ಲಿ ಮತದಾನ ಪ್ರಮಾಣ ಉತ್ತಮವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೇ 72ರಷ್ಟು ಮತದಾನ ನಡೆದಿರುವುದು ಗಮನಕ್ಕೆ ಬಂದಿದೆ. ಮತದಾರರಲ್ಲಿ ಅರಿವು ಮೂಡಿಸುವ ಮೂಲಕ ಆ ಪ್ರಮಾಣ ಹೆಚ್ಚಿಸಲು ಪ್ರಯತ್ನಿಸಲಾಗುವುದು' ಎಂದರು.

`ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಪ್ರಥಮ ಹಂತದ ತರಬೇತಿ ಮತ್ತು ಮಾರ್ಗದರ್ಶನ ನೀಡಲಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿಭಾಯಿಸಿದ ಅನುಭವ ಅವರಲ್ಲಿದೆ. ಎಲ್ಲ ಅಧಿಕಾರಿಗಳು, ಸಿಬ್ಬಂದಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ವ್ಯವಸ್ಥಿತವಾಗಿ ಚುನಾವಣೆ ನಡೆಸಲಾಗುವುದು' ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಡಾ.ಎನ್.ಮಂಜುಳಾ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ ಸತ್ಯಭಾಮಾ, ಉಪವಿಭಾಗಾಧಿಕಾರಿ ಕೆ.ಟಿ.ಶಾಂತಲಾ, ತಹಶೀಲ್ದಾರ್ ಡಿ.ಬಿ.ನಟೇಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.